
ವಿಜಯಪುರ: ‘ಜನವರಿ 9ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಭೇಟಿ ನೀಡಲಿದ್ದು, ವೀರರಾಣಿ ಕಿತ್ತೂರು ಚನ್ನಮ್ಮ ಪ್ರತಿಮೆ ಅನಾವರಣ, ಬಸ್ ನಿಲ್ದಾಣಕ್ಕೆ ಕಿತ್ತೂರ ರಾಣಿ ಚನ್ನಮ್ಮ ಹೆಸರು ನಾಮಕರಣ, ನಗರದಲ್ಲಿ ವೆಲೋಡ್ರೊಮ್ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಶಿಲಾನ್ಯಾಸ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ನಗರದ ದರಬಾರ್ ಶಾಲಾ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ‘ವ್ಯವಸ್ಥಿತವಾಗಿ ಯಾವುದೇ ಲೋಪಗಳಿಲ್ಲದಂತೆ ಕಾರ್ಯಕ್ರಮವನ್ನು ಆಯೋಜಿಸಲು ಕ್ರಮಕೈಗೊಳ್ಳಬೇಕು’ ಎಂದು ಅವರು ಹೇಳಿದರು.
‘ಅಂದು ನಡೆಯುವ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಹಾಗೂ ಶಂಕುಸ್ಥಾಪನೆಗೆ ಸಿದ್ಧತೆಯನ್ನು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ತಯಾರಿ ಮಾಡಿಕೊಂಡು ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಶ್ರಮಿಸಬೇಕು’ ಎಂದು ಅವರು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ‘ಕಾರ್ಯಕ್ರಮದಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಹಾಗೂ ಕಾರ್ಯಕ್ರಮಕ್ಕೆ ಸೂಕ್ತ ಬಂದೊಬಸ್ತ್ ವ್ಯವಸ್ಥೆ ಕಲ್ಪಿಸಲು ಸೂಕ್ತ ಕ್ರಮವಹಿಸಿದೆ’ ಎಂದು ತಿಳಿಸಿದರು.
ಸಭೆಗೂ ಮೊದಲು ಜಿಲ್ಲಾಧಿಕಾರಿ ಡಾ.ಆನಂದ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಜಂಟಿಯಾಗಿ ಕೇಂದ್ರ ಬಸ್ ನಿಲ್ದಾಣ ಹಾಗೂ ವೇಲೋಡ್ರಮ್ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ರಾಹುಲ್ ಬಾವಿದೊಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಗುಣಾರಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಡಿವೈಎಸ್‍ಪಿ ಬಸವರಾಜ ಯಲಿಗಾರ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಆಹಾರ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಅಶೋಕ ಗೋಣಸಗಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಿಂ ಬಾಬಾ ಮುದ್ದೇಬಿಹಾಳ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲಿಕ ಮಾನವರ, ಲೋಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಎಂಜಿನಿಯರ್ ಸಿ.ಎಸ್.ಪೊಲೀಸ್ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಎಂ.ಎಚ್.ಬಾಂಗಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ವಿದ್ಯಾಧರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ ಇದ್ದರು.
Quote - ಸಿ.ಎಂ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ವಹಿಸಿದ ಯಾವುದೇ ಜವಾಬ್ದಾರಿಯನ್ನು ಲೋಪವಾಗದಂತೆ ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಡಾ.ಆನಂದ್ ಕೆ. ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.