
ವಿಜಯಪುರ ನಗರದ ಹೊರ ವಲಯದ ಭೂತನಾಳ ಬಳಿ ನಿರ್ಮಿಸಲಾಗಿರುವ ಸೈಕ್ಲಿಂಗ್ ವೆಲೋಡ್ರೋಮ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಗುರುವಾರ ಪರಿಶೀಲಿಸಿದರು
ಪ್ರಜಾವಾಣಿ ಚಿತ್ರ
ವಿಜಯಪುರ: ಜನವರಿ 9ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರ ಸ್ವಾಗತಕ್ಕೆ ‘ಗುಮ್ಮಟಪುರ’ ಸಿಂಗಾರಿಗೊಂಡಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಸಚಿವರು, ಶಾಸಕರು, ಜನಪ್ರತಿನಿಧಿಗಳ ಕಟೌಟ್, ಬ್ಯಾನರ್, ಫ್ಲೆಕ್ಸ್, ಸ್ವಾಗತ ಕಮಾನುಗಳು ರಾರಾಜಿಸುತ್ತಿವೆ.
ನಗರದಾದ್ಯಂತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಸಿಎಂ, ಸಚಿವರು ಸಾಗುವ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಪರ್ಯಾಯ ಮಾರ್ಗಗಳ ಮೂಲಕ ವಾಹನಗಳ ಸಂಚಾರಕ್ಕೆ ಪೊಲೀಸರು ಅವಕಾಶ ಕಲ್ಪಿಸಿದ್ದಾರೆ.
ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿಯವರಿಂದ ಉದ್ಘಾಟನೆಯಾಗುತ್ತಿರುವ ಸೈಕ್ಲಿಂಗ್ ವೆಲೋಡ್ರೋಮ್ ಹಾಗೂ ದರ್ಬಾರ್ ಮೈದಾನದಲ್ಲಿ ನಿರ್ಮಿಸಲಾಗಿರುವ ಬೃಹತ್ ವೇದಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಗುರುವಾರ ಪರಿಶೀಲಿಸಿದರು.
ಸಿಎಂ, ಡಿಸಿಎಂ ಮತ್ತು ಸಚಿವರು ಜ.9ರಂದು ಬೆಳಿಗ್ಗೆ 11.30ಕ್ಕೆ ವಿಜಯಪುರಕ್ಕೆ ಆಗಮಿಸಲಿದ್ದು, ಆರಂಭದಲ್ಲಿ ಕೇಂದ್ರ ಬಸ್ ನಿಲ್ದಾಣದ ಎದುರು ನಿರ್ಮಿಸಲಾಗಿರುವ ವೀರ ರಾಣಿ ಕಿತ್ತೂರು ಚನ್ನಮ್ಮ ಪ್ರತಿಮೆ ಅನಾವರಣ ಮಾಡಲಿದ್ದಾರೆ ಬಳಿಕ ಭೂತನಾಳ ಬಳಿ ನಿರ್ಮಿಸಲಾಗಿರುವ ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟಿಸಲಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದರು.
ವಿಜಯಪುರ, ಜಮಖಂಡಿ, ಬಾಗಲಕೋಟೆ ಜಿಲ್ಲೆಗಳ ಸೈಕ್ಲಿಸ್ಟ್‌ಗಳು ಸೈಕ್ಲಿಂಗ್‌ನಲ್ಲಿ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕ ಪಡೆಯುವ ಮೂಲಕ ಈ ಭಾಗದ ಕ್ರೀಡಾ ಸಾಧಕರು ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಇದುವರೆಗೂ ಹೆದ್ದಾರಿ, ರಸ್ತೆ ಮೇಲೆ ತರಬೇತಿ ಮಾಡುತ್ತಿದ್ದರು. ಈ ವೇಲೋಡ್ರೋಮ್ ನಿರ್ಮಾಣದಿಂದ ಈ ಭಾಗದ ಕ್ರೀಡಾಪಟುಗಳಿಗೆ ಮತ್ತಷ್ಟು ಅನುಕೂಲವಾಗಿದೆ ಎಂದು ಹೇಳಿದರು.
ಸೈಕ್ಲಿಂಗ್ ವೇಲೋಡ್ರೋಮ್‌ನಲ್ಲಿ ಸೈಕ್ಲಿಸ್ಟ್‌ಗಳಿಗಿರುವ ಸೌಲಭ್ಯಗಳು, ಸುರಕ್ಷತಾ ವ್ಯವಸ್ಥೆಗಳು, ತಾಂತ್ರಿಕ ಅಂಶಗಳ ಕುರಿತು ಸಂಬಂಧಿಸಿದ ಅಧಿಕಾರಿಗಳು ಸಚಿವರಿಗೆ ಸಮಗ್ರ ಮಾಹಿತಿ ನೀಡಿದರು.
ಸಿಎಂ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ವೇದಿಕೆ ಕಾರ್ಯಕ್ರಮವನ್ನು ಸೂಸೂತ್ರವಾಗಿ ನಡೆಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಆಸನದ ವ್ಯವಸ್ಥೆ, ಕುಡಿಯುವ ನೀರು ಹಾಗೂ ಕೈಗೊಂಡಿರುವ ಭದ್ರತಾ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳಿಂದ ಸಚಿವ ಮಾಹಿತಿ ಪಡೆದುಕೊಂಡರು.
ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಡಾ. ಆನಂದ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್, ಸೈಕ್ಲಿಂಗ್ ಅಸೋಸಿಯೇಷನ್ ರಾಜ್ಯ ಘಟಕದ ಅಧ್ಯಕ್ಷ ರಾಜು ಬಿರಾದಾರ, ಮುಖಂಡರಾದ ಹಮೀದ್ ಮುಶ್ರೀಫ್, ದಿನೇಶ್ ಹಳ್ಳಿ, ಮಹಾಂತೇಶ ಬಿರಾದಾರ, ಚಂದ್ರಶೇಖರ ಶೆಟ್ಟಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕರುನಾಡಿನ ದೀರ್ಘಾವಧಿ ಮುಖ್ಯಮಂತ್ರಿಯಾಗಿ ದಾಖಲೆ ನಿರ್ಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಪಕ್ಷಾತೀತವಾಗಿ ಸನ್ಮಾನಿಸಿ ಗೌರವಿಸಲಾಗುವುದುಎಂ.ಬಿ.ಪಾಟೀಲ ಜಿಲ್ಲಾ ಉಸ್ತುವಾರಿ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.