ವಿಜಯಪುರ: ‘ರಾಜ್ಯದಲ್ಲಿ ಶೀಘ್ರದಲ್ಲೇ ನಡೆಯಲಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಕಾಂಗ್ರೆಸ್ ಪಕ್ಷ, ಕಾರ್ಯಕರ್ತರನ್ನು ಅಣಿಗೊಳಿಸುವ ಕೆಲಸವನ್ನು ಪ್ರಾರಂಭಿಸಲಾಗಿದೆ’ ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿಯು ಇದುವರೆಗೆ ಕೇವಲ ಚುನಾವಣೆಗಾಗಿ ಮಾತ್ರ ಎಂಬ ಪ್ರತೀತಿ ಇತ್ತು. ಆದರೆ, ಇದೇ ಮೊದಲ ಬಾರಿಗೆ ಕೆಪಿಸಿಸಿ ಮತ್ತು ಮುಖ್ಯಮಂತ್ರಿಯವರ ಶಿಫಾರಸ್ಸಿನ ಮೇರೆಗೆ ಪ್ರಚಾರ ಸಮಿತಿಯನ್ನು ಎಐಸಿಸಿ ಮಾನ್ಯಗೊಳಿಸಿ, ಕಾಯಂಗೊಳಿಸಿದೆ’ ಎಂದು ತಿಳಿಸಿದರು.
‘ಪ್ರಚಾರ ಸಮಿತಿಗೆ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಅಧ್ಯಕ್ಷರ ನೇಮಕ ಆಗಿದೆ. ಜಿಲ್ಲಾ ಸಮಿತಿ, ಬ್ಲಾಕ್ ಸಮಿತಿ, ಬೂತ್ ಸಮಿತಿ ರಚಿಸಲು ಮುಂದಾಗಲಾಗಿದೆ. ಸುಮಾರು ಒಂದು ಲಕ್ಷ ಕಾರ್ಯಕರ್ತರನ್ನು ಈ ಸಮಿತಿಯಲ್ಲಿ ಸೇರಿಸಿಕೊಂಡು ಸಂಘಟನೆ ಬಲಪಡಿಸಲು ನಿರ್ಧರಿಸಲಾಗಿದೆ’ ಎಂದರು.
‘ಕಾಂಗ್ರೆಸ್ ಪಕ್ಷದ ಸಿದ್ಧಾಂತ, ನಾಯಕತ್ವ ಮತ್ತು ಪಕ್ಷದ ಕಾರ್ಯಕ್ರಮಗಳ ಬಗ್ಗೆ ಪ್ರಚುರಪಡಿಸುವುದು, ವಿರೋಧ ಪಕ್ಷಗಳ ಅಪಪ್ರಚಾರದ ವಿರುದ್ಧ ಸತ್ಯವನ್ನು ಕಾರ್ಯಕರ್ತರಿಗೆ ತಿಳಿಸಲು ಚುನಾವಣಾ ಪ್ರಚಾರ ಸಮಿತಿ ವಿವಿಧ ಕಾರ್ಯಕ್ರಮ ಆಯೋಜಿಸಲಿದೆ’ ಎಂದು ಹೇಳಿದರು.
‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈಗಾಗಲೇ ದೇಶದಾದ್ಯಂತ ಮತಕಳ್ಳತನದ ಬಗ್ಗೆ ಆಂದೋಲನ ಆರಂಭಿಸಿದ್ದಾರೆ. ಪ್ರತಿಯೊಬ್ಬ ಪ್ರಜೆಯ ಮತದಾನದ ಹಕ್ಕನ್ನು ಕಾಪಾಡಲು ಮುಂದಾಗಿದ್ದಾರೆ. ಈ ಬಗ್ಗೆ ಪಕ್ಷದ ಕಾರ್ಯಕರ್ತರಿಗೆ ಅರಿವು ಮೂಡಿಸಿ, ಆಂದೋಲನ ವ್ಯಾಪಕಗೊಳಿಸಲು ಆದ್ಯತೆ ನೀಡಲಾಗುವುದು’ ಎಂದು ತಿಳಿಸಿದರು.
‘ರಾಜ್ಯ ಕಾಂಗ್ರೆಸ್ ಸರ್ಕಾರ ಭರವಸೆ ನೀಡಿದಂತೆ ಅಧಿಕಾರಕ್ಕೆ ಬಂದು ಆರು ತಿಂಗಳ ಒಳಗಾಗಿ ಗ್ಯಾರಂಟಿ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆಯನ್ನು ವಿರೋಧ ಪಕ್ಷದವರು ಬಿಟ್ಟಿ ಗ್ಯಾರಂಟಿ ಎಂದು ಅಪಪ್ರಚಾರ ನಡೆಸಿದರು. ಆದರೆ, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ₹1 ಲಕ್ಷ ಕೋಟಿ ಹಣವನ್ನು ಜನರ ಕೈಗೆ ನೇರವಾಗಿ ವರ್ಗಾವಣೆ ಮಾಡುತ್ತಿದೆ. ಇದರಿಂದ ಜನರ ಆರ್ಥಿಕ ಶಕ್ತಿ ವೃದ್ಧಿಯಾಗಿದೆ. ಕೇಂದ್ರ ಸರ್ಕಾರ ನಡೆಸಿದ ಸರ್ವೇಯಲ್ಲಿ ರಾಜ್ಯದ ತಲಾ ಆದಾಯ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ’ ಎಂದು ಸಮರ್ಥಿಸಿಕೊಂಡರು.
‘ಸಂವಿಧಾನದ ಮೇಲೆ ಕೇಂದ್ರ ಸರ್ಕಾರ ನಿರಂತರ ದಾಳಿ ನಡೆಸಿದೆ. ಸಮಾಜವಾದ, ಜಾತ್ಯತೀತ ಪದಗಳನ್ನೇ ತೆಗೆದುಹಾಕಲು ಮುಂದಾಗಿದೆ. ವಿರೋಧ ಪಕ್ಷಗಳ ವಿರುದ್ಧ ದಾಳಿ ಮಾಡಲು ಚುನಾವಣಾ ಆಯೋಗ, ಇಡಿ, ನ್ಯಾಯಾಂಗವನ್ನು ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತದೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ಪ್ರಚಾರ ಸಮಿತಿ ಕೆಲಸ ಮಾಡಲಿದೆ’ ಎಂದರು.
‘ಇಂದಿರಾಗಾಂಧಿ ಅವರು ತುರ್ತು ಪರಿಸ್ಥಿತಿ ಜಾರಿಗೊಳಿಸಿದ ಸಂದರ್ಭದಲ್ಲಿ ರಾಜಕೀಯ ಮುಖಂಡರನ್ನು ಸೆರೆಯಲ್ಲಿ ಇಟ್ಟಿರಬಹುದು. ಆದರೆ, ಇದರಿಂದ ಜನಸಾಮಾನ್ಯರಿಗೆ ಯಾವುದೇ ತೊಂದರೆಯಾಗಲಿಲ್ಲ. ಇದೀಗ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ. ಸಂವಿಧಾನ, ಪ್ರಜಾಪ್ರಭುತ್ವವವನ್ನು ಶಿಥಿಲಗೊಳಿಸಲಾಗುತ್ತಿದೆ. ಈ ಬಗ್ಗೆ ಪಕ್ಷದ ಕಾರ್ಯಕರ್ತರಿಗೆ ತಿಳಿಸುವ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರಚಾರ ಸಮಿತಿ ಕಾರ್ಯನಿರ್ವಹಿಸಲಿದೆ’ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಎಸ್. ಜಿ. ಮಹಾಬಲೇಶ್ವರ, ಶರಣಪ್ಪ ಕೂಟಗಿ, ಮನೀರ್ ಅಹ್ಮದ್, ಪಿ.ಕೆ. ನಿರಲಕಟ್ಟಿ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಸರ್ಫರಾಜ್ ಮಿರ್ದೆ, ಕೃಷ್ಣ ಕಾಮಟೆ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ಬಿ.ಎಂ.ಬಿರಾದಾರ ಮನಗೂಳಿ ಕಾಂಗ್ರೆಸ್ ಸೇರ್ಪಡೆ | ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿ |ಯತ್ನಾಳ ಅವರು ಮುತಾಲಿಕ್ ಆಗಲು ಹೊರಟಿದ್ದಾರೆ
ಪಕ್ಷದ ಮುಖಂಡರು ಕಾರ್ಯಕರ್ತರಿಗೆ ರಾಜ್ಯಮಟ್ಟದಲ್ಲಿ ಮತ್ತು ವಿಭಾಗ ಮಟ್ಟದಲ್ಲಿ ತರಬೇತಿ ನೀಡಿ ಪಕ್ಷವನ್ನು ಸಿದ್ಧಾಂತದ ಆಧಾರದ ಮೇಲೆ ಕೊಂಡೊಯ್ಯಲು ಆದ್ಯತೆ ನೀಡಲಾಗುವುದುವಿನಯಕುಮಾರ್ ಸೊರಕೆ ಅಧ್ಯಕ್ಷ ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.