ADVERTISEMENT

ಹಳ್ಳಿಗಳಿಗೆ ಭೇಟಿ ನೀಡಿ, ಪರಿಶೀಲಿಸಲು ಸೂಚನೆ: ಸುನೀಲ್‌ ಕುಮಾರ್

ತಹಶೀಲ್ದಾರ್‌, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಡಿಸಿ ವಿಡಿಯೊ ಸಂವಾದ

​ಪ್ರಜಾವಾಣಿ ವಾರ್ತೆ
Published 2 ಜೂನ್ 2021, 11:19 IST
Last Updated 2 ಜೂನ್ 2021, 11:19 IST
ಪಿ.ಸುನೀಲ್‌ ಕುಮಾರ್
ಪಿ.ಸುನೀಲ್‌ ಕುಮಾರ್   

ವಿಜಯಪುರ: ತಹಶೀಲ್ದಾರರು ಮತ್ತು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳು ಜಂಟಿಯಾಗಿಪ್ರತಿದಿನ ತಮ್ಮ ವ್ಯಾಪ್ತಿಯ 10 ಗ್ರಾಮಗಳಿಗೆ ಭೇಟಿ ನೀಡಿ, ಕೋವಿಡ್ ಮುನ್ನೆಚ್ಚರಿಕೆ ಕುರಿತು ಜನರಿಗೆ ಸೂಕ್ತ ತಿಳಿವಳಿಕೆ ನೀಡಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್‌ ಸೂಚನೆ ನೀಡಿದರು.

ಜಿಲ್ಲೆಯ ವಿವಿಧ ತಾಲ್ಲೂಕುಗಳ ತಹಶೀಲ್ದಾರ್‌ ಮತ್ತು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದ ಅವರು, ಹಳ್ಳಿಗಳಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಅವಶ್ಯಕ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಕೋವಿಡ್ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.

ಕೋವಿಡ್ ಎರಡನೇ ಅಲೆ ಹರಡದಂತೆ ಸರಪಳಿಯನ್ನು ತುಂಡರಿಸಲು ಈಗಾಗಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಅವುಗಳ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಎಂದರು.

ADVERTISEMENT

ಮದುವೆ ಸಮಾರಂಭಗಳಿಗೆ ಗರಿಷ್ಠ 40 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಮಾರ್ಗಸೂಚಿಯ ಪಾಲನೆಯ ಬಗ್ಗೆ ತಹಶೀಲ್ದಾರರು ಮದುವೆ ಸಮಾರಂಭ ಜರುಗುವ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಹಾಗೂ ಸರ್ಕಾರದ ಮಾರ್ಗಸೂಚಿಯ ಉಲ್ಲಂಘನೆ ಕಂಡುಬಂದರೆ ಕೂಡಲೇ ಪ್ರಕರಣ ದಾಖಲಿಸಬೇಕು ಎಂದು ಸೂಚಿಸಿದರು.

ತಾಲ್ಲೂಕಿನ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ಇರುವ 5 ಗ್ರಾಮಗಳಿಗೆ ತಹಶೀಲ್ದಾರರು ಮತ್ತು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳು ಜಂಟಿಯಾಗಿ ಆಯಾ ಗ್ರಾಮಗಳಿಗೆ ಭೇಟಿ ನೀಡಿ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಲು ಕಾರಣವೇನು ಎಂಬುದರ ಬಗ್ಗೆ ಪತ್ತೆ ಹಚ್ಚುಬೇಕು ಮತ್ತು ಕೋವಿಡ್ ನಿಯಂತ್ರಣ ಕುರಿತು ಅವಶ್ಯಕ ಕ್ರಮ ಕೈಗೊಳ್ಳಬೇಕು ಎಂದರು.

ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿ ಕಂಡು ಬಂದ ಗ್ರಾಮಗಳಲ್ಲಿ ತಹಶೀಲ್ದಾರರು ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು ತೆಗೆದುಕೊಂಡ ಕ್ರಮದ ಬಗ್ಗೆಉಪವಿಭಾಗಾಧಿಕಾರಿಗಳು ಪ್ರತಿದಿನ ಪರಿಶೀಲನೆ ಮಾಡಬೇಕು ಹಾಗೂ ಕೋವಿಡ್ ನಿಯಂತ್ರಣ ಕುರಿತು ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳಿಗೆ ವರದಿ ನೀಡಬೇಕು ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿರುವುದರಿಂದ ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು ತಾಲ್ಲೂಕು ಪಂಚಾಯ್ತಿಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆಗಳನ್ನು ಸಹ ನೀಡಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ ಹಾಗೂ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.