ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಅಭಿಯಾನದ ಮೂರನೇ ಹಂತ ಆರಂಭವಾಗಿದ್ದು, ನೋಂದಣಿ ಮಾಡಿಕೊಳ್ಳುವ ಮೂಲಕ 60 ವರ್ಷ ಮೇಲ್ಪಟ್ಟವರು ಹಾಗೂ 45 ರಿಂದ 59 ವರ್ಷದ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಲಸಿಕೆ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಅಭಿಯಾನದ ಮೊದಲನೆಯ ಹಂತದಲ್ಲಿ ಕೋವಿಡ್ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರೋಗ್ಯ ಕಾರ್ಯಕರ್ತರಿಗೆ ಮತ್ತು ವಿವಿಧ ಇಲಾಖೆಯ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಯಿತು. ಸದ್ಯ ಸೋಂಕಿನ ಅಪಾಯದ ವಲಯದಲ್ಲಿರುವ 60 ವರ್ಷ ಮೇಲ್ಪಟ್ಟವರು ವಿವಿಧ ರೋಗಗಳಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲಾಗುತ್ತದೆ ಎಂದರು.
ಮೂರನೇ ಹಂತದಲ್ಲಿ ಎಲ್ಲ ಸಾರ್ವಜನಿಕರಿಗೂ ಲಸಿಕೆ ಲಭ್ಯವಿದೆ.ಲಸಿಕೆ ಪಡೆಯುವವರಿಗೆ ನೋಂದಣಿ ಕಡ್ಡಾಯವಾಗಿದೆ. ನೋಂದಣಿ ಸಮಯದಲ್ಲಿ ಗುರುತಿನಚೀಟಿ ಸರಿಯಾದ ದಾಖಲೆಗಳನ್ನು ನೀಡಬೇಕು ಎಂದರು.
ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತದೆ. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ, ಖಾಸಗಿ ಆಸ್ಪತ್ರೆಯಲ್ಲಿ ₹ 250 ದರ ನಿಗದಿ ಮಾಡಲಾಗಿದೆ. ಮೊದಲು ಡೋಸ್ ಪಡೆದ 28 ದಿನಕ್ಕೆ 2ನೇ ಡೋಸ್ ಪಡೆಯಬೇಕು. ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆಗಳಾದ ಬಸವನ ಬಾಗೇವಾಡಿ, ಮುದ್ದೇಬಿಹಾಳ, ಇಂಡಿ ಹಾಗೂ ಸಿಂದಗಿಯಲ್ಲಿ ಉಚಿತ ಲಸಿಕೆ ನೀಡಲಾಗುತ್ತಿದೆ ಎಂದರು.
ಜಿಲ್ಲೆಯ ಖಾಸಗಿ ಆರೋಗ್ಯ ಸಂಸ್ಥೆಗಳಾದ ಬಿ.ಎಲ್.ಡಿ.ಇ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಅಲ್ ಅಮೀನ್ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಲಸಿಕೆ ನೀಡಲಾಗುವುದು ಎಂದು ಹೇಳಿದರು.
ಆನ್‍ಲೈನ್ ನೋಂದಣಿಗೆ ಆರೋಗ್ಯ ಸೇತು ಆ್ಯಪ್, ನೇರ ನೋಂದಣಿಗೆ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳನ್ನು ಬಳಸಬಹುದು. ಇದಕ್ಕಾಗಿ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಚಾಲನಾ ಪರವಾನಗಿ, ಪಾನ್ ಕಾರ್ಡ್, ಪಾಸ್ ಪೋರ್ಟ್ ಇವುಗಳಲ್ಲಿ ಯಾವುದಾದರೂ ಒಂದನ್ನು ತೆಗೆದುಕೊಂಡು ಬರಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.