ADVERTISEMENT

ಕೋವಿಡ್‌ನಿಂದ ಗುಣಮುಖ; ವಿಜಯಪುರ ಪ್ರಥಮ

ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2020, 13:16 IST
Last Updated 10 ಆಗಸ್ಟ್ 2020, 13:16 IST
ಪಿ.ಸುನೀಲ್‌ಕುಮಾರ್‌
ಪಿ.ಸುನೀಲ್‌ಕುಮಾರ್‌   

ವಿಜಯಪುರ: ಕೋವಿಡ್‌ ಸೋಂಕಿನಿಂದ ಅತಿ ಹೆಚ್ಚು ಜನ ಗುಣಮುಖರಾಗಿ ಮನೆಗೆ ತೆರಳುತ್ತಿರುವವರ ಪೈಕಿರಾಜ್ಯದಲ್ಲಿ ವಿಜಯಪುರ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದುಜಿಲ್ಲಾಧಿಕಾರಿ ಪಿ. ಸುನೀಲ್‌‌ ಕುಮಾರ್‌ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತವು ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು,ರೋಗಿಗಳನ್ನು ಸಕಾಲಕ್ಕೆ ಮತ್ತು ಆದ್ಯತೆ ಮೇಲೆ ಚಿಕಿತ್ಸೆಗೆ ಒಳಪಡಿಸಿದ ಕಾರಣ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ ಎಂದರು.

ಆರೋಗ್ಯ ಇಲಾಖೆಯ ವ್ಯವಸ್ಥಿತ ಸಹಕಾರ ಹಾಗೂ ಚಿಕಿತ್ಸೆಗಳಿಂದಾಗಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಗುಣಮುಖರಾಗಿ ಮನೆಗೆ ತೆರಳುತ್ತಿದ್ದಾರೆ ಎಂದು ಅವರು ಹೇಳಿದರು.

ADVERTISEMENT

ಬೆಂಗಳೂರಿನ ನಂತರ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್‌ ಪೀಡಿತರನ್ನು ಹೋಂ ಐಸೊಲೇಷನ್‌ ಮಾಡಿರುವ ಜಿಲ್ಲೆ ವಿಜಯಪುರವಾಗಿದೆ ಎಂದರು.

ನಗರದ ಜಿಲ್ಲಾಸ್ಪತ್ರೆ ಮತ್ತು ಬಿ.ಎಲ್.ಡಿ.ಇ ಆಸ್ಪತ್ರೆಗಳಲ್ಲಿ ಆರ್.ಟಿ.ಪಿ.ಸಿ.ಆರ್ ಲ್ಯಾಬ್‍ಗಳು ಈಗಾಗಲೇ ಪ್ರಾರಂಭವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಎರಡು ಶಿಫ್ಟ್‌ನಲ್ಲಿ ಕೋವಿಡ್ ಗಂಟಲು ದ್ರವ ಮಾದರಿ ಪರೀಕ್ಷೆ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ 3 ಶಿಫ್ಟ್‌ಗಳಲ್ಲಿ ಗಂಟಲು ದ್ರವ ಮಾದರಿಯನ್ನು ಪರೀಕ್ಷೆ ಮಾಡುವ ಉದ್ದೇಶ ಹೊಂದಲಾಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಸಿಟಿವ್ ರೋಗಿಗಳನ್ನು ಗುರುತಿಸಲು ಸಾಧ್ಯವಾಗಲಿದೆ. ಮೂರನೇ ಶಿಫ್ಟ್‌ನಲ್ಲಿ ಕಾರ್ಯ ನಿರ್ವಹಿಸಲು ಕೊರತೆಯಿರುವ ಲ್ಯಾಬ್ ಟೆಕ್ನಿಷಿಯನ್‍ಗಳ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದರು.

ಆರ್.ಟಿ.ಪಿ.ಸಿ.ಆರ್ ಲ್ಯಾಬ್‍ನಲ್ಲಿ ಈಗಾಗಲೆ ಒಂದು ಶಿಫ್ಟ್‌ನಲ್ಲಿ ಶೇ 90 ರಷ್ಟು ಗಂಟಲು ದ್ರವ ಮಾದರಿಯನ್ನು ಪರೀಕ್ಷೆ ಮಾಡಲಾಗುತ್ತಿದ್ದು, ಸದ್ಯ ಜಿಲ್ಲೆಯಲ್ಲಿ ಪ್ರತಿದಿನ 150 ರಿಂದ 180 ರ ವರೆಗೆ ಗಂಟಲು ದ್ರವ ಮಾದರಿ ಪರೀಕ್ಷೆಯನ್ನು ಲ್ಯಾಬ್‍ನಲ್ಲಿ ಕೈಗೊಳ್ಳಲಾಗುತ್ತಿದೆ. ಮೂರು ಶಿಫ್ಟ್‌ಗಳಲ್ಲಿ ಪರೀಕ್ಷೆ ಪ್ರಾರಂಭವಾದರೆ ಸುಮಾರು 250ರ ವರೆಗೆ ಮಾಡಬಹುದಾಗಿದ್ದು, ಈ ಗುರಿಯನ್ನು ಮುಟ್ಟುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.

ಕೋವಿಡ್-19ಗೆ ಸಂಬಂಧಿಸಿದಂತೆ ಗಂಟಲು ದ್ರವ ಮಾದರಿಯನ್ನು ಪಡೆಯುವಾಗ ವ್ಯಕ್ತಿಯ ಆಧಾರ್‌ ಕಾರ್ಡ್‍ನಲ್ಲಿರುವ ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ಪಡೆದುಕೊಳ್ಳಲಾಗುತ್ತದೆ. ಮೊಬೈಲ್ ಸಂಖ್ಯೆಗೆ ಒಟಿಪಿ ಬರುವ ಕಾರಣದಿಂದಾಗಿ ಯಾವುದೇ ರೀತಿಯಲ್ಲಿ ವ್ಯಕ್ತಿಗಳು ಸುಳ್ಳು ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ ಎಂದರು.

ಒಂದು ವೇಳೆ ಪಾಸಿಟಿವ್ ಬಂದರೆ ಅವರಿಗೆ ಹೋಂ ಐಸೊಲೇಷನ್ ಅಥವಾ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ಇದರ ಜೊತೆಗೆ ಕೋವಿಡ್ ಸೆಂಟರ್‌ಗಳಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.