ADVERTISEMENT

ಕುಡಿಯುವ ನೀರಿನ ಸಮರ್ಪಕ ನಿರ್ವಹಣೆಗೆ ಡಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2021, 13:06 IST
Last Updated 15 ಏಪ್ರಿಲ್ 2021, 13:06 IST
ವಿಜಯಪುರ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಗುರುವಾರ ಕುಡಿಯುವ ನೀರಿನ ಸಮರ್ಪಕ ನಿರ್ವಹಣೆ ಕುರಿತು ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಮಾತನಾಡಿದರು.ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ,  ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ ಇದ್ದಾರೆ
ವಿಜಯಪುರ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಗುರುವಾರ ಕುಡಿಯುವ ನೀರಿನ ಸಮರ್ಪಕ ನಿರ್ವಹಣೆ ಕುರಿತು ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಮಾತನಾಡಿದರು.ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ,  ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ ಇದ್ದಾರೆ   

ವಿಜಯಪುರ: ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಕೆರೆಗಳಿಗೆ ನೀರು ಭರ್ತಿಗೆ ಅವಶ್ಯಕ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಸೂಚನೆ ನೀಡಿದರು.

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮರ್ಪಕ ನಿರ್ವಹಣೆ ಕುರಿತು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಗುರುವಾರ ನೀರಾವರಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಹಾಗೂ ಸಂಬಂಧಪಟ್ಟ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಚಿಮ್ಮಲಗಿ ಏತ ನೀರಾವರಿ ಯೋಜನೆಯಿಂದ ಬಹು ಹಳ್ಳಿಗಳಿಗೆ ಅನುಕೂಲವಾಗುವ ಅರೇಶಂಕರ ಕೆರೆಯನ್ನು ಬರುವ ಮೇ 25 ರಿಂದ ಭರ್ತಿ ಮಾಡುವ ಕುರಿತಂತೆ ಪ್ರಾದೇಶಿಕ ಆಯುಕ್ತರನ್ನು ಕೋರಲು ಸಭೆಯಲ್ಲಿ ನಿರ್ಧರಿಸಲಾಯಿತು.ಅರೇಶಂಕರ ಕೆರೆ ನೀರು ಪೋಲಾಗದಂತೆ ನೋಡಿಕೊಳ್ಳಲು ಸೂಚಿಸಿದರು.

ADVERTISEMENT

ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಬಹು ಹಳ್ಳಿ ಕುಡಿಯುವ ನೀರಿನ ಯೋಜನೆಗಳಿಗಾಗಿ ನಾರಾಯಣಪುರ ಹಿನ್ನೀರಿನ ಅವಶ್ಯಕತೆಯಿದ್ದು, ನೀರಿನ ನಿರ್ವಹಣೆಗಾಗಿ ಆಲಮಟ್ಟಿಯಿಂದ ನೀರು ಬಿಡುಗಡೆ ಮಾಡುವಂತೆಯೂ ಕೋರಲು ನಿರ್ಧರಿಸಲಾಯಿತು.

ಮುಂಬರುವ ದಿನಗಳಲ್ಲಿ ಭೀಮಾನದಿಯಲ್ಲಿ ನೀರು ಕಡಿಮೆಯಾದಲ್ಲಿ ಮಹಾರಾಷ್ಟ್ರದ ಮೂಲಕ ಸೊಲ್ಲಾಪುರ ಹಾಗೂ ಅಕ್ಕಲಕೋಟಗಳಿಗೆ ನೀರು ಬಿಡುಗಡೆಯಾದಲ್ಲಿ ಆ ನೀರು ಬಳಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಸೂಚನೆ ನೀಡಿದರು.

ಮುಂಬರುವ ದಿನಗಳಲ್ಲಿ ನಗರ, ಹಳ್ಳಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾದರೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಆದ್ಯತೆ ನೀಡಬೇಕು. ಉಪವಿಭಾಗಾಧಿಕಾರಿಗಳ ಅನುಮೋದನೆ ಮೇಲೆಟ್ಯಾಂಕರ್ ಮೂಲಕ ನೀರು ಸರಬರಾಜುಗೆ ಕ್ರಮ ಕೈಗೊಳ್ಳಬೇಕು ಎಂದರು.

ಬಾಡಿಗೆ ಆಧಾರಿತ ಕೊಳವೆಬಾವಿಗಳಿಗೆ ನಿಗದಿತ ಅನುದಾನ ಬಿಡುಗಡೆಗೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಉಪ ವಿಭಾಗಾಧಿಕಾರಿ ರಾಹುಲ್ ಸಿಂಧೆ, ಬಲರಾಮ ಲಮಾಣಿ, ಮಹಾನಗರ ಪಾಲಿಕೆ ಆಯುಕ್ತಶ್ರೀಹರ್ಷಾ ಶೆಟ್ಟಿ ಸೇರಿದಂತೆ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.