ADVERTISEMENT

ಪರೀಕ್ಷೆ ಅಕ್ರಮ ತಡೆಯಲು ಡಿಸಿ ಸೂಚನೆ

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 18 ಮೇ 2022, 14:17 IST
Last Updated 18 ಮೇ 2022, 14:17 IST
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ  ಡಾ.ವಿಜಯಮಹಾಂತೇಶ ದಾನಮ್ಮನವರ ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್‌ ಇದ್ದಾರೆ
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ  ಡಾ.ವಿಜಯಮಹಾಂತೇಶ ದಾನಮ್ಮನವರ ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್‌ ಇದ್ದಾರೆ   

ವಿಜಯಪುರ: ಮೇ 21 ಮತ್ತು 22ರಂದು ನಡೆಯಲಿರುವ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಜಯಪುರ ನಗರದ 16 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ.4330 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ADVERTISEMENT

ಶಿಕ್ಷಕರ ( 6ರಿಂದ 8ನೇ ತರಗತಿ) ನೇಮಕಾತಿಯ ಸಿಇಟಿ ಪರೀಕ್ಷೆಯು ಅಚ್ಚುಕಟ್ಟಾಗಿ ನಡೆಯುವಂತೆ ಪರೀಕ್ಷೆಗೆ ನಿಯೋಜನೆಗೊಂಡ ಮುಖ್ಯ ಅಧೀಕ್ಷಕರು, ಸ್ಥಾನಿಕ ಜಾಗೃತದಳದವರು ಮತ್ತು ಇನ್ನೀತರ ಎಲ್ಲ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು ಎಂದರು.

ಮಾರ್ಗಾಧಿಕಾರಿಗಳು, ಪರೀಕ್ಷಾ ನಿಯಂತ್ರಕರು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕಾರ್ಯವೇನು ಎಂಬುದನ್ನರಿತು ಸರಿಯಾಗಿ ಕಾರ್ಯನಿರ್ವಹಿಸಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿಡಿಯೋಗ್ರಫಿ ಮತ್ತು ಸಿಸಿಟಿವಿಗಳ ನಿರ್ವಹಣೆ ಇರಬೇಕು ಎಂದು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್‌ ಮಾತನಾಡಿ, ಪರೀಕ್ಷೆಗಳ ಅಕ್ರಮದ ಸುದ್ದಿಗಳು ಮಾಧ್ಯಮಗಳಲ್ಲಿ ಬರುತ್ತಿವೆ. ಹೀಗಾಗಿ ಜಾಗೃತೆಯಿಂದ ಪರೀಕ್ಷೆಗಳನ್ನು ನಡೆಸಬೇಕು. ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಪ್ರತಿಯೊಬ್ಬರು ಸಹಕರಿಸಬೇಕು. ಪರೀಕ್ಷಾ ಅಕ್ರಮಕ್ಕೆ ಯಾರು ಕೂಡ ಅವಕಾಶ ಮಾಡಿಕೊಡಬಾರದು ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ತಪಾಸಣೆಯು ನಿಯಮಿತವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಪರೀಕ್ಷಾ ದಿನದಂದು ಸರಿಯಾದ ಸಮಯಕ್ಕೆ ಹಾಜರಾಗಬೇಕು. ಸ್ಥಾನಿಕ ಜಾಗೃತದ ದಳದ ಸಿಬ್ಬಂದಿ, ಪರೀಕ್ಷಾ ಮುಖ್ಯ ಅಧೀಕ್ಷಕರು ಸರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಮತ್ತು ಇನ್ನೀತರ ನಿಷೇಧಿತ ವಸ್ತುಗಳನ್ನು ತರದಂತೆ ಈಗಾಗಲೇ ಅಭ್ಯರ್ಥಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎನ್.ವಿ.ಹೊಸೂರ ಅವರು ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಸಹಾಯಕ ಆಯುಕ್ತರಾದ ಬಲರಾಮ ಲಮಾಣಿ ಮತ್ತು ಇನ್ನೀತರ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.