ADVERTISEMENT

ಭೂ ಒಡೆತನ ಯೋಜನೆ; ಪ್ರಸ್ತಾವಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2019, 12:27 IST
Last Updated 16 ಡಿಸೆಂಬರ್ 2019, 12:27 IST
ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ಜರುಗಿತು
ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ಜರುಗಿತು   

ವಿಜಯಪುರ: ‘ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯ ಭೂ ಒಡೆತನ ಯೋಜನೆಯಡಿ ಅವಶ್ಯಕವಿರುವ ಅನುದಾನ-ಜಮೀನು ಕುರಿತ ಪ್ರಸ್ತಾವವನ್ನು ವಾರದಲ್ಲಿ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಎಸ್‌ಸಿಪಿ, ಟಿಎಸ್‌ಪಿ ಯೋಜನೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಭೂ ಒಡೆತನ ಯೋಜನೆಯಡಿ ಒಟ್ಟು ₹40 ಕೋಟಿ ವೆಚ್ಚದ 226 ಎಕರೆ ಜಮೀನಿಗೆ ಸಂಬಂಧಪಟ್ಟಂತೆ ಪ್ರಸ್ತಾವ ಸಲ್ಲಿಸಬೇಕಾಗಿದ್ದು, ಈ ಪೈಕಿ 100 ಎಕರೆ ಜಮೀನಿಗೆ ಮಾತ್ರ ಪ್ರಸ್ತಾವ ಸಲ್ಲಸಲಾಗಿದೆ. ಬಾಕಿ ಉಳಿದಿರುವ ಜಮೀನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ದೊರೆಯುವಂತೆ ನೋಡಿಕೊಳ್ಳಬೇಕು’ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

‘ಕೃಷ್ಣಾ ಭಾಗ್ಯ ಜಲ ನಿಗಮ (ಕೆಬಿಜೆಎನ್‌ಎಲ್‌)ದ ವತಿಯಿಂದ ಆಲಮಟ್ಟಿ ಹಾಗೂ ರಾಂಪುರ ವಲಯದಲ್ಲಿ ಕೊಳವೆಬಾವಿ, ಸಿ.ಸಿ ರಸ್ತೆ, ತೆರೆದ ಬಾವಿ ಸೇರಿ ನಿಗದಿತ ಕಾಮಗಾರಿಗಳನ್ನು, ನಿಗದಿತ ಅವಧಿಯೊಳಗೆ ಜಾರಿಗೊಳಿಸಬೇಕು’ ಎಂದು ಸೂಚಿಸಿದರು.

‘ಕೃಷಿ ಇಲಾಖೆ ಹಾಗೂ ತೋಟಗಾರಿಕಾ ಇಲಾಖೆಗಳ ವ್ಯಾಪ್ತಿಯಲ್ಲಿ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ನೂರರಷ್ಟು ಪ್ರಗತಿ ಸಾಧಿಸಬೇಕು. ಫಲಾನುಭವಿ ಆಧಾರಿತ ಯೋಜನೆಗಳಿಗೆ ಸಂಬಂಧಿಸಿದಂತೆ ಅನುದಾನದ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಈಗಾಗಲೇ ಮೀಸಲಿಡಲಾದ ಅನುದಾನವನ್ನು ಸಮರ್ಪಕವಾಗಿ ಬಳಸಿ, ಅರ್ಹರಿಗೆ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.

‘ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ ಸುಮಾರು ₹23 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ಪಟ್ಟಿಯನ್ನು ಗ್ರಾಮವಾರು ಹಾಗೂ ತಾಲ್ಲೂಕುವಾರು ನೀಡಬೇಕು. ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ ಸಮುದಾಯ ಭವನ, ಸಿ.ಸಿ.ರಸ್ತೆ, ಸೇರಿ ಇತರ ಕಾಮಗಾರಿ ಕೈಗೆತ್ತಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ರೇಷ್ಮೆ ಇಲಾಖೆ ವ್ಯಾಪ್ತಿಯಲ್ಲಿ ಆರ್ಥಿಕ ಮತ್ತು ಭೌತಿಕ ಪ್ರಗತಿ ಸಾಧಿಸಬೇಕು. ವಿಶೇಷವಾಗಿ ಕಿಸಾನ್ ನರ್ಸರಿ ಯೋಜನೆಯಡಿ 15 ದಿನಗಳಲ್ಲಿ ಆರ್ಥಿಕ ಪ್ರಗತಿ ಸಾಧಿಸಿ, ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಬೇಕು. ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಪರಿಣಾಮಗಾರಿಯಾಗಿ ಹಮ್ಮಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಸಂವಿಧಾನದ ಬಗ್ಗೆ ತಿಳಿವಳಿಕೆ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು’ ಎಂದು ಸೂಚಿಸಿದರು.

‘ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಸೌಲಭ್ಯ ಕಲ್ಪಿಸಬೇಕು. ದೇವರಾಜ ಅರಸು ನಿಗಮ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕೃಷ್ಣಾ ಭಾಗ್ಯ ಜಲನಿಗಮ ಸೇರಿ ವಿವಿಧ ಇಲಾಖೆಗಳಿಂದ ಕೊಳವೆಬಾವಿ ಕೊರೆಯಿಸುವುದಕ್ಕೆ ಸಂಬಂಧಿಸಿದಂತೆ ಫಲಾನುಭವಿಗಳ ಪುನರಾವರ್ತನೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.

‘ಆಯುಷ್ ಇಲಾಖೆ ವ್ಯಾಪ್ತಿಯಲ್ಲಿ ಮನೆ ಮದ್ದು ಕಾರ್ಯಕ್ರಮದಡಿಯಲ್ಲಿ ನಿಗದಿತ ಆರ್ಥಿಕ ಹಾಗೂ ಭೌತಿಕ ಸಾಧನೆ ಮಾಡಬೇಕು. ಆಲಮೇಲ, ಚಡಚಣ, ಕೊಲ್ಹಾರ, ನಾತಲವಾಡ ಸೇರಿ ಕಡಿಮೆ ಪ್ರಗತಿ ಸಾಧಿಸಿದ ನಗರ ಸ್ಥಳೀಯ ಸಂಸ್ಥೆಗಳು, ನಿಗದಿತ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸಬೇಕು’ ಎಂದು ಹೇಳಿದರು.

ಸಂಸದ ರಮೇಶ ಜಿಗಜಿಣಗಿ, ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದ ರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.