ADVERTISEMENT

ಹಾಸ್ಟೆಲ್‌; ಸ್ಥಳೀಯರಿಗೆ ಶೇ 25ರಷ್ಟು ಸ್ಥಾನ: ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 27 ಜನವರಿ 2020, 16:30 IST
Last Updated 27 ಜನವರಿ 2020, 16:30 IST
ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜಕಲ್ಯಾಣ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ಜರುಗಿತು
ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜಕಲ್ಯಾಣ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ಜರುಗಿತು   

ವಿಜಯಪುರ: ‘ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ಶೇ 25ರಷ್ಟು ಸ್ಥಾನಗಳನ್ನು ಕಡ್ಡಾಯವಾಗಿ ಸ್ಥಳೀಯರಿಗೆ ಕೊಡಬೇಕು. ಶಾಸಕರ ಶಿಫಾರಸು ಪತ್ರಗಳನ್ನು ಆಧರಿಸಿ ಬಡ, ನಿರ್ಗತಿಕರ ಮಕ್ಕಳಿಗೂ ಪ್ರವೇಶ ನೀಡಬೇಕು’ ಎಂದು ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಸ್ವಂತ ಕಟ್ಟಡ ಇಲ್ಲದ ಹಾಸ್ಟೆಲ್‌ಗಳಿಗೆ ನಿವೇಶನಗಳನ್ನು ಗುರುತಿಸಬೇಕು. ನಿವೇಶನ ಲಭ್ಯವಿದ್ದರೆ ಕಟ್ಟಡ ಕಾಮಗಾರಿ ಆರಂಭಿಸಬೇಕು. ಹೊಸದಾಗಿ ಮಂಜೂರಾಗಿರುವ ಹಾಸ್ಟೆಲ್‌ಗಳನ್ನು ಬಾಡಿಗೆ ಕಟ್ಟಡದಲ್ಲಿ ಪ್ರಾರಂಭಿಸಿ, ತಕ್ಷಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಬೇಕು. ಯಾವ ಕಾರಣಕ್ಕೂ ಮಕ್ಕಳು ಹಾಸ್ಟೆಲ್ ಸೌಲಭ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಒಂದು ವರ್ಷದಲ್ಲಿ ಜಿಲ್ಲೆಯಲ್ಲಿ ಒಂದೇ ಒಂದು ಹಾಸ್ಟೆಲ್‌ ಕೂಡ ಬಾಡಿಗೆ ಕಟ್ಟಡದಲ್ಲಿ ನಡೆಯದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು’ ಎಂದು ಸೂಚಿಸಿದರು.

ADVERTISEMENT

ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ‘ಹಾಸ್ಟೆಲ್ ಪ್ರವೇಶಕ್ಕೆ ಈಗಿರುವ ನಿಯಮಾವಳಿಯಲ್ಲಿ ಸಡಿಲಿಕೆ ನೀಡಬೇಕು. ಎಷ್ಟೋ ಮಕ್ಕಳಿಗೆ ಕಲಿಯಬೇಕು ಎಂಬ ಉತ್ಸಾಹ ಇರುತ್ತದೆ. ಆದರೆ, ಒಂದೆಡೆ ಬಡತನ ಅಡ್ಡಿಯಾದರೆ, ಇನ್ನೊಂದೆಡೆ ಹೆಚ್ಚು ಅಂಕಗಳಿಸಿರುವುದಿಲ್ಲ. ಹೀಗಾಗಿ, ಇಂತಹ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಬೇಕು’ ಎಂದು ಮನವಿ ಮಾಡಿದರು.

ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ಅರುಣ ಶಹಾಪುರ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.