ADVERTISEMENT

SSLC ಪರೀಕ್ಷೆ ನಿರ್ವಹಣೆಯಲ್ಲಿ ವಿಫಲ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಮಾನತು

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2024, 15:49 IST
Last Updated 15 ಏಪ್ರಿಲ್ 2024, 15:49 IST
ಎನ್‌.ಎಚ್‌ ನಾಗೂರ
ಎನ್‌.ಎಚ್‌ ನಾಗೂರ   

ವಿಜಯಪುರ: ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಗಮವಾಗಿ ನಿರ್ವಹಿಸುವಲ್ಲಿ ವಿಫಲರಾದ ಮತ್ತು ಕರ್ತವ್ಯ ಲೋಪ ಆರೋಪದ ಮೇಲೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್‌.ಎಚ್‌.ನಾಗೂರ ಅವರನ್ನು ಅಮಾನತುಗೊಳಿಸಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ, ವೆಬ್‌ ಕಾಸ್ಟಿಂಗ್‌ ವ್ಯವಸ್ಥೆ ಸರಿಯಾಗಿ ಮಾಡಿಲ್ಲ. ಪರೀಕ್ಷೆ ನಕಲಿಗೆ ಅವಕಾಶ ನೀಡಿದ ಆರೋಪವೂ ಅವರ ಮೇಲಿದೆ. ಹೊರ್ತಿಯ ರೇವಣ ಸಿದ್ದೇಶ್ವರ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರ ಹಾಗೂ ಕಾರಜೋಳದ ರಾಣಿ ಚನ್ನಮ್ಮ ವಸತಿ ಶಾಲೆಯ ಪರೀಕ್ಷಾ ಕೇಂದ್ರದ ಒಳಗೆ ವಿದ್ಯಾರ್ಥಿಗಳನ್ನು ತಪಾಸಣೆ ಮಾಡದೇ ಬಿಟ್ಟಿರುವುದು ಮತ್ತು ಪರೀಕ್ಷಾ ಕೇಂದ್ರದ ಹೊರಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಗುಂಪುಗೂಡಿ ನಕಲು ಮಾಡಲು ಸಹಕರಿಸಿರುವುದು ವಿಚಾರಣೆ ವೇಳೆ ಸಾಬೀತಾಗಿದೆ.

ಈ ಬಗ್ಗೆ ವಿವರಣಾತ್ಮಕ ವರದಿ ನೀಡುವಂತೆ ಸೂಚಿಸಿದರೂ ಸೂಕ್ತ ಮಾಹಿತಿ ನೀಡದೇ ನಿರ್ಲಕ್ಷ್ಯ ವಹಿಸಿದ್ದಾರೆ. ಹಿರಿಯ ಅಧಿಕಾರಿಗಳು ಕರೆ ಮಾಡಿದರೂ ಸ್ವೀಕರಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಈ ಎಲ್ಲದರ ಹಿನ್ನೆಲೆಯಲ್ಲಿ ಶಿಸ್ತು ಕ್ರಮ ಬಾಕಿ ಇರಿಸಿ, ಸೇವೆಯಿಂದ ಅಮಾನತು ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.