
ವಿಜಯಪುರ: ಜನರ ಪಾಲ್ಗೊಳ್ಳುವಿಕೆಯಿಂದ ಮಾತ್ರ ಅಭಿವೃದ್ಧಿ ಯೋಜನೆಗಳು ಯಶಸ್ವಿಯಾಗುತ್ತವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನರ ಬೇಡಿಕೆಗಳಿಗುಣವಾಗಿ ಜನರ ಶ್ರೇಯೋಭಿವೃದ್ಧಿಯ ಕ್ರಿಯಾಯೋಜನೆಗಳನ್ನು ರೂಪಿಸಿ ಜನರ ಜೀವನಮಟ್ಟ ಸುಧಾರಣೆಗೆ ಕ್ರಮ ವಹಿಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ 2025-27ನೇ ಸಾಲಿನ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿ ಯೋಜನಾ ಸಭೆಯಲ್ಲಿ ಮಾತನಾಡಿದರು.
ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಾಗ ಜನರ ಬೇಡಿಕೆಗಳಿಗೆ ಆದ್ಯತೆ ನೀಡಿ, ಅವರ ಬೇಡಿಕೆಗಳನ್ನು ಯೋಜನೆಗಳಲ್ಲಿ ಅಳವಡಿಸಬೇಕು ಎಂದರು.
ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಅಭಿವೃದ್ಧಿ ಸಮಿತಿಗಳ ಸಭೆಗಳನ್ನು ಆಯೋಜಿಸಿ 2026-27ನೇ ಸಾಲಿನ ಕ್ರಿಯಾಯೋಜನೆಗಳನ್ನು ಸಿದ್ದಪಡಿಸಬೇಕು ಎಂದರು.
ರೈತರ ಜಮೀನುಗಳಿಗೆ ಎತ್ತಿನಗಾಡಿ ರಸ್ತೆಯ ಬೇಡಿಕೆಗಳಿಗೆ ಆದ್ಯತೆ ನೀಡಿ ಯೋಜನೆಗಳಲ್ಲಿ ಅಳವಡಿಸಬೇಕು ಎಂದು ಹೇಳಿದರು.
ಗ್ರಾಮ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಮುಂಬರುವ ಜನವರಿ ನಾಲ್ಕನೇ ಭಾನುವಾರದಿಂದ ಪ್ರತಿ ತಿಂಗಳು ಹಳ್ಳಿ-ಹಳ್ಳಿಗಳಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಬೇಕು. ಶ್ರಮದಾನ ಮಾಡುವ ಮೂಲಕ ಸ್ವಚ್ಛತೆ ಮತ್ತು ಶುಚಿತ್ವದ ಕುರಿತು ಜನರನ್ನು ಪ್ರೇರೇಪಿಸಬೇಕು ಎಂದರು.
ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಅಭಿವೃದ್ದಿ ಸಮಿತಿ ಸಭೆಗಳನ್ನು ನಡೆಸಿ, ನ.30 ರೊಳಗೆ ಸಮಿತಿಗೆ ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಸಚಿವ ಶಿವಾನಂದ ಪಾಟೀಲ ಮಾತನಾಡಿ, ಕೃಷಿ ಅಧಿಕಾರಿಗಳು ಮಣ್ಣು ಫಲವತ್ತತೆ ಕುರಿತು ರೈತರಿಗೆ ಅಗತ್ಯ ಸಲಹೆ ನೀಡಬೇಕು. ಪ್ರತಿ ಹಳ್ಳಿಗಳಲ್ಲಿ ಸಾವಯವ ಕೃಷಿ ಕುರಿತು ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹಾಗೂ ಫಲಿತಾಂಶ ಸುಧಾರಣೆಗೆ ಸೂಕ್ತ ಯೋಜನೆಗಳನ್ನು ರೂಪಿಸಿಕೊಂಡು ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಸರ್ಕಾರ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಿದ್ದರೂ ಸಹ ಕಳಪೆ ಫಲಿತಾಂಶ ಬರಲು ಇರುವ ಮುಖ್ಯ ಕಾರಣ ಗುರುತಿಸಿ, ಸುಧಾರಣೆಗೆ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಅನೇಕ ಉತ್ತಮ ಶಿಕ್ಷಕರಿದ್ದಾರೆ ಇಂತಹವರನ್ನು ಗುರುತಿಸಿ ಅವರ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.
ಶಾಸಕ ಅಶೋಕ ಮನಗೂಳಿ ಮಾತನಾಡಿ, ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸಂಬಂಧಿಸಿದವರ ಸಭೆ ನಡೆಸಬೇಕು. ಅಧಿಕಾರಿಗಳು ಶಾಲೆಗಳಿಗೆ ದಿಢೀರ್ ಭೇಟಿ ನೀಡಿ ಮಕ್ಕಳ ಹಾಜರಾತಿ, ಶೈಕ್ಷಣಿಕ ಪ್ರಗತಿ, ಕುರಿತು ಪರಿಶೀಲನೆ ನಡೆಸಬೇಕು. ಕಲಿಕೆಯಲ್ಲಿ ಹಿಂದುಳಿಯಲು ಇರುವ ಕಾರಣವನ್ನು ಕಂಡು ಹಿಡಿದು ಪರಿಹಾರ ಬೋಧನೆಗೆ ಕ್ರಮ ವಹಿಸಬೇಕು ಎಂದು ಅವರು ಹೇಳಿದರು.
ಕಾಲಕಾಲಕ್ಕೆ ಗ್ರಾಮ ಸಭೆಗಳನ್ನು ನಡೆಸಿ ಜನರ ಸಮಸ್ಯೆಗಳನ್ನು ಆಲಿಸಿ ಅವರ ಬೇಡಿಕೆಗಳನ್ನು ಸ್ವೀಕರಿಸಿ ಜನರ ಶ್ರೇಯೋಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಅಧಿಕಾರಿಗಳು ಕ್ರಮ ವಹಿಸಬೇಕು.ಡಿ.ಆರ್. ಪಾಟೀಲ, ಉಪಾಧ್ಯಕ್ಷ, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ
ಜಿಲ್ಲಾಧಿಕಾರಿ ಡಾ.ಆನಂದ ಕೆ. ಮಾತನಾಡಿ, ಜಿಲ್ಲೆಯಲ್ಲಿ ಸ್ಮಶಾನ ಭೂಮಿ ಅವಶ್ಯವಿದ್ದೆಡೆ ಜಮೀನು ಒದಗಿಸಲಾಗುತ್ತಿದೆ. ಸರ್ಕಾರಿ ಜಮೀನು ಲಭ್ಯವಿರದೇ ಇದ್ದಲ್ಲಿ ಈಗಾಗಲೇ ಖಾಸಗಿ ಖರೀದಿಸಿ ಒದಗಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್ ಮಾತನಾಡಿ, ಈಗಾಗಲೇ ಜಿಲ್ಲೆಯಲ್ಲಿ ಸ್ವಚ್ಛತಾ ಶನಿವಾರ ಅಭಿಯಾನ ಯಶಸ್ವಿಯಾಗಿ ಹಮ್ಮಿಕೊಳ್ಳಲಾಗುತ್ತಿದೆ. ಸ್ವಚ್ಛತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಶಾಸಕ ವಿಠ್ಠಲ ಕಟಕಧೋಂಡ, ಗ್ರಾಮ ಪಂಚಾಯಿತಿ ಸದಸ್ಯರ ರಾಜ್ಯ ಒಕ್ಕೂಟದ ಅಧ್ಯಕ್ಷ ಸತೀಶ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ವಿ. ಕುಂಬಾರ, ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.