ADVERTISEMENT

ಅಂಗವಿಕಲರಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸಲು ಕ್ರಮ: ಜಿಲ್ಲಾಧಿಕಾರಿ ಡಾ. ಆನಂದ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2025, 5:05 IST
Last Updated 4 ಡಿಸೆಂಬರ್ 2025, 5:05 IST
ವಿಜಯಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು
ವಿಜಯಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು   

ವಿಜಯಪುರ: ಸರ್ಕಾರಿ ಕಚೇರಿಗಳು ಸಾರ್ವಜನಿಕ ಕಟ್ಟಡಗಳಲ್ಲಿ ಅಂಗವಿಕಲರಿಗೆ ಪ್ರಥಮಾದ್ಯತೆ ಮೇರೆಗೆ ಮೂಲ ಸೌಕರ್ಯಗಳು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆನಂದ.ಕೆ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಆಯೋಜಿಸಿದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿಕಲಚೇತನರ ಅಭಿವೃದ್ಧಿಗಾಗಿ ವಿಕಲಚೇತನರ ಹಕ್ಕುಗಳ ಕಾಯ್ದೆ 2016 ಸಮರ್ಪಕ ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದಲ್ಲಿ ಇತ್ತೀಚೆಗೆ ವಿಕಲಚೇತನರ ಕುಂದುಕೊರತೆ ಸಭೆ ನಡೆಸಿ, ಸಮಸ್ಯೆಗಳನ್ನು ಆಲಿಸಲಾಗಿದೆ. ಎಲ್ಲ ಸಮಸ್ಯೆಗಳಿಗೆ ಸ್ಪಂದಿಸಲು ತಾಲ್ಲೂಕು ಮಟ್ಟದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ವಿಶೇಷ ಚೇತನರ ಸಮಸ್ಯೆ ಆಲಿಸಿ ಪರಿಹಾರಕ್ಕಾಗಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಅಂಗವಿಕಲರಿಗೆ ಮೀಸಲಿಟ್ಟ ಶೇ.5ರಷ್ಟು ಅನುದಾನವನ್ನು ವಿವಿಧ ಯೋಜನೆಗಳಡಿ ಬಳಕೆಯಾಗಿರುವ ಕುರಿತು ಪ್ರದರ್ಶನಾ ಫಲಕಗಳಲ್ಲಿ ಕಡ್ಡಾಯವಾಗಿ ಸಾರ್ವಜನಿಕರು ವೀಕ್ಷಿಸುವ ಅನುಕೂಲಕ್ಕಾಗಿ ಕ್ರಮವಹಿಸಲಾಗುತ್ತಿದೆ ಎಂದು ಹೇಳಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಜೀವನದಲ್ಲಿ ಬರುವ ಸಮಸ್ಯೆಗಳನ್ನು ಎದುರಿಸಲು ಆತ್ಮವಿಶ್ವಾಸ ಅಗತ್ಯ. ಸಕಾರಾತ್ಮವಾಗಿ ಯೋಚನೆ ಮಾಡಿ ಸಮಸ್ಯೆಗಳಿಂದ ಹೊರ ಬಂದು ಉತ್ತಮ ಸುಗಮ ಜೀವನಕ್ಕೆ ಅಡಿಪಾಯ ಹಾಕಿಕೊಳ್ಳಬೇಕು. ತಮ್ಮ ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ನಮ್ಮನ್ನು ಅಥವಾ ಸಂಬಂಧಿಸಿದ ಅಧಿಕಾರಿಗಳಿಗೆ ಸಂಪರ್ಕಿಸಿ ಸಮಸ್ಯೆಗಳನ್ನು ಇತ್ಯರ್ಥ ಪಡೆಸಿಕೊಳ್ಳಬಹುದಾಗಿದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಎಸ್.ಎನ್. ಬಸವ ರೆಡ್ಡಿ ಮಾತನಾಡಿದರು. ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲಾಯಿತು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದವರೆಗೆ ಇಂಧನ ಚಾಲಿತ ತ್ರಿಚಕ್ರವಾಹನಗಳ ಜಾಥಾ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.