ADVERTISEMENT

ಕೋವಿಡ್‌ ಭಯ ಬೇಡ; ಮುನ್ನೆಚ್ಚರಿಕೆ ಅಗತ್ಯ

ಜಿಲ್ಲೆಯಲ್ಲಿ ವರದಿಯಾಗದ ಪ್ರಕರಣ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಮಾಹಿತಿ

​ಪ್ರಜಾವಾಣಿ ವಾರ್ತೆ
Published 30 ಮೇ 2025, 15:24 IST
Last Updated 30 ಮೇ 2025, 15:24 IST
ಟಿ.ಭೂಬಾಲನ್
ಟಿ.ಭೂಬಾಲನ್   

ವಿಜಯಪುರ: ‘ಕೋವಿಡ್ ಬಗ್ಗೆ ಜಿಲ್ಲೆಯ ಸಾರ್ವಜನಿಕರು ಯಾವುದೇ ಭಯಪಡುವ ಅವಶ್ಯಕತೆ ಇಲ್ಲ. ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆದ್ಯಾಗ್ಯೂ ಮುಂಜಾಗ್ರತೆ ಕ್ರಮ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ. 

‘ಜಿಲ್ಲಾಸ್ಪತ್ರೆಯಲ್ಲಿ ಈಗಾಗಲೇ 10 ಬೆಡ್‍ಗಳ ವಿಶೇಷ ವಾರ್ಡ್‌ ಜತೆಗೆ 10 ವೆಂಟಿಲೇಟರ್ ಮತ್ತು 426 ಬೆಡ್‍ಗಳಿಗೆ ಸೆಂಟರ್ ಆಮ್ಲಜನಕ, ಲಿಕ್ವಿಡ್ ಮೆಡಿಕಲ್ ಆಮ್ಲಜನಕ (ಎಲ್‍ಎಂಒ), 185 ಜಂಬೋ ಸಿಲಿಂಡರ್, ಅಗತ್ಯ ಔಷಧಗಳು, ಮಾಸ್ಕ್‌, ಕಿಟ್ ದಾಸ್ತಾನು ಮಾಡಲಾಗಿದೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

‘ಖಚಿತ ಪ್ರಕರಣಗಳು ಕಂಡುಬಂದಲ್ಲಿ ರೋಗಿಗಳಿಗೆ ಹೋಂ ಐಸೊಲೇಷನ್ ಮಾಡಲಾಗುವುದು. ತೀವ್ರತರದ ರೋಗ ಲಕ್ಷಣವುಳ್ಳ ರೋಗಿಗಳಿಗೆ ಜಿಲ್ಲಾಸ್ಪತ್ರೆ, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಗರ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

‘ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು, ಪೋಷಕರು ಶಾಲೆಗೆ ಕಳುಹಿಸದಿರುವುದು ಉತ್ತಮ. ಸಾರ್ವಜನಿಕರು ಆಗಾಗ ಸಾಬೂನು ಅಥವಾ ಸ್ಯಾನಿಟೈಸರ್‌ನಿಂದ ಕೈ ತೊಳೆಯಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ ಉಪಯೋಗಿಸಬೇಕು. ಯಾವುದೇ ತರಹದ ಕೆಮ್ಮು, ನೆಗಡಿ, ಗಂಟಲು ನೋವು, ಜ್ವರ ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು. ಮಕ್ಕಳು, ವೃದ್ಧರು, ಗರ್ಭಿಣಿಯರಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಹೆಚ್ಚಿನ ನಿಗಾ ವಹಿಸಬೇಕು’ ಎಂದು ಸಲಹೆ ನೀಡಿದ್ದಾರೆ.

‘ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ತೀವ್ರ ಉಸಿರಾಟದ ತೊಂದರೆ ಇರುವವರು ಹಾಗೂ ಗರ್ಭಿಣಿಯರು, ಮಕ್ಕಳು, ವೃದ್ಧರಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ವೈದ್ಯರ ಸಲಹೆ ಮೇರೆಗೆ ಕೋವಿಡ್‌ ಪರೀಕ್ಷೆ ಮಾಡಲಾಗುತ್ತದೆ. ಸೋಂಕು ದೃಢಪಡಿಸಿಕೊಳ್ಳಲು ಆರ್‌ಟಿಪಿಸಿಆರ್ ಪರೀಕ್ಷೆಗಾಗಿ ಕಲಬುರಗಿಯ ಜಿಮ್ಸ್ ಪ್ರಯೋಗಾಲಯ ನಿಗದಿಪಡಿಸಲಾಗಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.