ADVERTISEMENT

ಬಸವನಬಾಗೇವಾಡಿ: ಭೂ ದಾಖಲೆಗಳ ಡಿಜಿಟಲೀಕರಣಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2025, 14:37 IST
Last Updated 11 ಜನವರಿ 2025, 14:37 IST
ಬಸವನಬಾಗೇವಾಡಿಯ ಮಿನಿವಿಧಾನಸೌಧ ಕಟ್ಟಡದಲ್ಲಿ ತಾಲ್ಲೂಕು ಕಚೇರಿ ಸರ್ವೆ ಮತ್ತು ನೋಂದಣಿ ಇಲಾಖೆಗಳ ಎಲ್ಲ ಭೂ ದಾಖಲೆಗಳ ಡಿಜಿಟಲೀಕರಣಕ್ಕೆ ಸಚಿವ ಶಿವಾನಂದ ಪಾಟೀಲ ಚಾಲನೆ ನೀಡಿದರು
ಬಸವನಬಾಗೇವಾಡಿಯ ಮಿನಿವಿಧಾನಸೌಧ ಕಟ್ಟಡದಲ್ಲಿ ತಾಲ್ಲೂಕು ಕಚೇರಿ ಸರ್ವೆ ಮತ್ತು ನೋಂದಣಿ ಇಲಾಖೆಗಳ ಎಲ್ಲ ಭೂ ದಾಖಲೆಗಳ ಡಿಜಿಟಲೀಕರಣಕ್ಕೆ ಸಚಿವ ಶಿವಾನಂದ ಪಾಟೀಲ ಚಾಲನೆ ನೀಡಿದರು   

ಬಸವನಬಾಗೇವಾಡಿ: ಪಟ್ಟಣದ ಮಿನಿವಿಧಾನಸೌಧದ ಮೇಲಂತಸ್ತಿನ ಕೋಣೆಯಲ್ಲಿ ತಾಲ್ಲೂಕು ಕಚೇರಿ, ಸಮೀಕ್ಷೆ ಮತ್ತು ನೋಂದಣಿ ಇಲಾಖೆಗಳ ಎಲ್ಲ ಭೂ ದಾಖಲೆಗಳ ಡಿಜಿಟಲೀಕರಣಕ್ಕೆ ಸಕ್ಕರೆ, ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಶನಿವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ಭೂಸುರಕ್ಷಾ ಯೋಜನೆಯು ರಾಜ್ಯದ ಕಂದಾಯ ಇಲಾಖೆ ಕೈಗೊಂಡಿರುವ ಮಹತ್ವಾಕಾಂಕ್ಷಿ ಯೋಜನೆ. ಈ ಯೋಜನೆಯಡಿ ತಾಲ್ಲೂಕು ಕಚೇರಿಯ ಅಭಿಲೇಖಾಲಯಗಳಲ್ಲಿರುವ ಅತ್ಯಂತ ಪ್ರಮುಖವಾದ ಹಳೆಯ ಮತ್ತು ಸ್ವಾತಂತ್ರ್ಯಪೂರ್ವದ ಅರ್ವೇಯ ಭೂ ದಾಖಲೆಗಳನ್ನು ಇಂಡೆಕ್ಸಿಂಗ್, ಕ್ಯಾಟಲಾಗಿಂಗ್, ಸ್ಕ್ಯಾನಿಂಗ್ ಮತ್ತು ಅಪ್‌ಲೋಡಿಂಗ್ ಮಾಡಿ ಗಣಕೀಕರಣಗೊಳಿಸಲಾಗುತ್ತಿದೆ’ ಎಂದು ಹೇಳಿದರು.

‘ಹಳೆಯ ಶಿಥಿಲಗೊಂಡ ದಾಖಲೆಗಳನ್ನು ಶಾಶ್ವತವಾಗಿ ಡಿಜಿಟಲ್ ರೂಪದಲ್ಲಿ ಉಳಿಸಿಕೊಳ್ಳಲು ನಕಲಿ ದಾಖಲೆಗಳ ಸೃಷ್ಟಿಯನ್ನು ತಡೆಗಟ್ಟಲು ಮತ್ತು ಅವುಗಳನ್ನು ಅನ್‌ಲೈನ್‌ನಲ್ಲಿ ನಾಗರಿಕರಿಗೆ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಭೂ ಸುರಕ್ಷಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ’ ಎಂದರು.

ADVERTISEMENT

‘ಡಿಜಿಟಲೀಕರಣದಿಂದ ಅಭಿಲೇಖಾಲಯದ ಸಿಬ್ಬಂದಿಯನ್ನು ಸಂಪರ್ಕಿಸಿ ದಾಖಲೆಗಳನ್ನು ಪಡೆಯುವುದು ತಪ್ಪುತ್ತದೆ. ದಾಖಲೆಗಳ ವ್ಯತ್ಯಾಸ ರೆಕಾರ್ಡ್ ಮಿಸ್ಸಿಂಗ್, ವಿಳಂಬ ಎಲ್ಲ ಸಮಸ್ಯೆಗಳು ಪರಿಹಾರವಾಗಲಿದೆ. ಜನರು ದಾಖಲೆಗಳಿಗಾಗಿ ಕಚೇರಿಗೆ ಭೇಟಿ ನೀಡುವ ಬದಲು ಸುಲಭವಾಗಿ ಆನ್‌ಲೈನ್ ಮೂಲಕ ಪಡೆಯಬಹುದು’ ಎಂದರು.

‘ರಾಜ್ಯದಲ್ಲಿ ಪ್ರಸ್ತುತ 209 ತಾಲ್ಲೂಕು ಕಚೇರಿಗಳಲ್ಲಿ ಭೂ ದಾಖಲೆಗಳ ಗಣಕೀಕರಣ ಕಾರ್ಯ ಆರಂಭಿಸಲಾಗುತ್ತಿದೆ. ಬಸವನಬಾಗೇವಾಡಿ, ಕೊಲ್ಹಾರ, ನಿಡಗುಂದಿ ಮೂರು ತಾಲ್ಲೂಕು ಸೇರಿ ಅಖಂಡ ಬಸವನಬಾಗೇವಾಡಿ ತಾಲ್ಲೂಕಿಗೆ ಸಂಬಂಧಿಸಿದ ಅಭಿಲೇಖಾಲಯದ ದಾಖಲೆಗಳ ಗಣಕೀಕರಣ ಕಾರ್ಯ ಆರಂಭವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ತರಬೇತಿ ಪಡೆದ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ’ ಎಂದು ಹೇಳಿದರು.

ಕಂದಾಯ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಬಸವನಬಾಗೇವಾಡಿ ತಹಶೀಲ್ದಾರ್ ವೈ.ಎಸ್.ಸೋಮನಕಟ್ಟಿ, ಕೊಲ್ಹಾರ ತಹಶೀಲ್ದಾರ್ ಎಸ್.ಎಸ್.ನಾಯಕಲಮಠ, ನಿಡಗುಂದಿ ತಹಶೀಲ್ದಾರ್ ಎ.ಡಿ.ಅಮರವಾಡಗಿ, ಗ್ರೇಡ್-2 ತಹಶೀಲ್ದಾರ್‌ರಾದ ಜಿ.ಎಸ್.ನಾಯಕ, ಎಚ್.ಎನ್.ಬಡಿಗೇರ, ಎಡಿಎಲ್‌ಆರ್ ಜಿ.ಬಿ.ವಗ್ಗನವರ, ಭೂ ದಾಖಲೆಗಳ ಇಲಾಖೆಯ ವ್ಯವಸ್ಥಾಪಕ ಎ.ಬಿ.ಕಲಾದಗಿ, ಶಿರಸ್ತೇದಾರರಾದ ಬಿ.ಆರ್.ಪೊಲೇಶಿ, ಎಂ.ಡಿ.ಬಳಗಾನೂರ, ಎ.ಎಚ್.ಬಳೂರಗಿ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಎಚ್.ಯರಝರಿ, ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸುರೇಶ ಹಾರಿವಾಳ, ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.