ADVERTISEMENT

ಭೂಕಂಪನ: ಸುರಕ್ಷಿತ ಬಯಲು ಪ್ರದೇಶ ಗುರುತಿಸಿ- ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2021, 14:21 IST
Last Updated 16 ಅಕ್ಟೋಬರ್ 2021, 14:21 IST
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಮಾತನಾಡಿದರು.ಜಿಲ್ಲಾ ಪಂಚಾಯ್ತಿ ಸಿಇಒ ಗೋವಿಂದ ರೆಡ್ಡಿ ಇದ್ದಾರೆ
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಮಾತನಾಡಿದರು.ಜಿಲ್ಲಾ ಪಂಚಾಯ್ತಿ ಸಿಇಒ ಗೋವಿಂದ ರೆಡ್ಡಿ ಇದ್ದಾರೆ   

ವಿಜಯಪುರ : ಜಿಲ್ಲೆಯ ಭೂಕಂಪನ ಸಂಭವಿಸಿದ ಗ್ರಾಮಗಳಲ್ಲಿ ಸುರಕ್ಷತಾ ಬಯಲು ಪ್ರದೇಶಗಳನ್ನು ಗುರುತಿಸಿ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಿದ ಅವರು, ಅವರು ಲೋಕೋಪಯೋಗಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಮತ್ತು ತಹಶೀಲದಾರ್‌ ಅವರನ್ನು ಒಳಗೊಂಡ ತಂಡವು ಭೂಕಂಪನ ಸಂಭವಿಸಿದ ಎಲ್ಲ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಗ್ರಾಮ ಪಂಚಾಯ್ತಿ ಟಾಸ್ಕ್ ಫೋರ್ಸ್ ಸಭೆ ಜರುಗಿಸಬೇಕು ಎಂದು ತಿಳಿಸಿದರು.

ಆರೋಗ್ಯ, ಹೆಸ್ಕಾಂ ಮತ್ತು ಅಗ್ನಿಶಾಮಕ ಇಲಾಖೆಗಳು ಭೂಕಂಪನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಕೊಳ್ಳಬೇಕು. ಗ್ರಾಮ ಪಂಚಾಯ್ತಿ ಮಟ್ಟದಲ್ಲಿರುವ ಗ್ರಾಮ ಪಂಚಾಯ್ತಿ ವಿಪತ್ತು ನಿರ್ವಹಣಾ ಪ್ರಾಧಿಕಾರಗಳನ್ನು ಜಾಗೃತಗೊಳಿಸಬೇಕು ಎಂದರು.

ADVERTISEMENT

ಭೂಕಂಪನ ಅನುಭವಕ್ಕೆ ಬಂದ ಗ್ರಾಮಗಳಿಗೆ ಭೇಟಿ ನೀಡಿ ಜನರಿಗೆ ತಿಳಿವಳಿಕೆ ನೀಡಿ ಆತ್ಮ ಸ್ಥೈರ್ಯ ತುಂಬಬೇಕು. ಈ ನಿಟ್ಟಿನಲ್ಲಿ ಸ್ವಯಂ ಸೇವಕರು ಮತ್ತು ಸ್ಥಳೀಯ ಸಂಘ-ಸಂಸ್ಥೆಗಳ ನೆರವನ್ನು ಪಡೆಯಬೇಕು. ಭೂಕಂಪನ ಪೂರ್ವದಲ್ಲಿ ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳು, ಭೂಕಂಪನ ಸಂಭವಿಸಿದಾಗ ಕೈಕೊಳ್ಳಬೇಕಾದ ಕ್ರಮಗಳು ಭೂಕಂಪನ ನಂತರ ಕೈಕೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ತಿಳಿವಳಿಕೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಮೇಲಿಂದ-ಮೇಲೆ ಭೂಮಿ ಕಂಪಿಸುತ್ತಲಿರುವುದರಿಂದ ಈ ಕುರಿತು ಅಧ್ಯಯನವನ್ನು ಕೈಕೊಳ್ಳಲು ಮತ್ತು ಜನರಿಗೆ ತಿಳಿವಳಿಕೆಯನ್ನು ನೀಡಲು ಹೈದರಾಬಾದ್‌ನ ನ್ಯಾಷನಲ್ ಜಿಯೋಫಿಸಿಕಲ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನಿಂದ ಮೂವರು ವಿಜ್ಞಾನಿಗಳನ್ನೊಳಗೊಂಡ ತಂಡವು ಅ.18ರಂದು ಜಿಲ್ಲೆಗೆ ಭೇಟಿ ನೀಡಿ ಅಧ್ಯಯನ ಕೈಗೊಳ್ಳಲಿದ್ದು, ಆ ಸಮಯದಲ್ಲಿ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಹಾಜರಿದ್ದು, ವಿಜ್ಞಾನಿಗಳಿಗೆ ಅಗತ್ಯ ಮಾಹಿತಿಯನ್ನು ನೀಡಲು ಸೂಚಿಸಿದರು.

ಜಿಲ್ಲೆಯಲ್ಲಿ ಸದ್ಯಕ್ಕೆ ಸಂಭವಿಸಿರುವ ಭೂಕಂಪನ ರಿಕ್ಟರ್ ಮಾಪನದಲ್ಲಿ 2 ರಿಂದ 3 ಮ್ಯಾಗ್ನಿಟ್ಯೂಡ್ ತೀವ್ರತೆಯನ್ನೊಳಗೊಂಡಿದ್ದು, ಹಾನಿಕರ ತೀವ್ರತೆ ಇರುವುದಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ ಎಂದರು.

ಸಾರ್ವಜನಿಕರು ಆತಂಕಕ್ಕೆ ಒಳಗಾಗದೇ ಇರಲು ಹಾಗೂ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಹೇಳಿದರು. ಜಿಲ್ಲಾ ಪಂಚಾಯ್ತಿ ಸಿಇಒ ಗೋವಿಂದ ರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.