ವಿಜಯಪುರ: ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಅಕ್ಟೋಬರ್ 30ರಂದು ನಡೆಯಲಿರುವ ಉಪ ಚುನಾವಣೆ ಸಂಬಂಧ ಮಂಗಳವಾರದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ ಚುನಾವಣೆಗೆ ಅಕ್ಟೋಬರ್ 1ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು, ಅ.30ರಂದು ಬೆಳಿಗ್ಗೆ 7ರಿಂದ ಸಂಜೆ 7ರ ವರೆಗೆ ಮತದಾನ ನಡೆಯಲಿದೆ. ನವೆಂಬರ್ 2ರಂದು ಬೆಳಿಗ್ಗೆ 8ರಿಂದ ಜಿಲ್ಲಾ ಕೇಂದ್ರದಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಹೇಳಿದರು.
ಸಿಂದಗಿ ತಹಶೀಲ್ದಾರ್ ಕಚೇರಿಯಲ್ಲಿ ಚುನಾವಣಾಧಿಕಾರಿಗಳ ಕಚೇರಿಯನ್ನು ಸ್ಥಾಪಿಸಲಾಗಿದ್ದು, ಇಂಡಿ ಉಪ ಉಪ ವಿಭಾಗಾಧಿಕಾರಿ ರಾಹುಲ್ ಶಿಂಧೆ ಚುನಾವಣಾಧಿಕಾರಿಯಾಗಿರುತ್ತಾರೆ. ಸಿಂದಗಿ ತಹಶೀಲ್ದಾರ್ ಸಂಜೀವಕುಮಾರ ದಾಸರ ಸಹಾಯಕ ಚುನಾವಣಾಧಿಕಾರಿಯಾಗಿರುತ್ತಾರೆ ಎಂದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಅವರು ಮಾದರಿ ನೀತಿ ಸಂಹಿತೆ ಜಿಲ್ಲಾ ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ಹೇಳಿದರು.
ಮತದಾರರು
ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ 1,20,949 ಪುರುಷ, 1,13,327 ಮಹಿಳಾ ಹಾಗೂ ಇತರೆ 33 ಸೇರಿದಂತೆ ಒಟ್ಟು 2,34,309 ಮತದಾರರು ಇದ್ದಾರೆ ಎಂದು ಹೇಳಿದರು.
ಮತಗಟ್ಟೆ
ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 271 ಮತಗಟ್ಟೆಗಳಿದ್ದು, ಕೋವಿಡ್ ನಿಯಮಗಳ ಪ್ರಕಾರ ಒಂದು ಸಾವಿರಕ್ಕಿಂತ ಹೆಚ್ಚು ಮತದಾರರು ಇರುವ ಮತಗಟ್ಟೆಗಗಳು 73 ಇದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದರು.
ಉಪ ಚುನಾವಣೆ ಕಾರ್ಯಕ್ಕೆ 2200 ಮತಗಟ್ಟೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 15 ಸೆಕ್ಟರ್ ಅಧಿಕಾರಿಗಳು, 60 ಫ್ಲೈಯಿಂಗ್ ಸ್ವ್ಕಾಡ್, 75 ಸ್ಟ್ಯಾಟಿಕ್ ಸರ್ವಲೆನ್ಸ್ ತಂಡ, 1 ಲೆಕ್ಕ ಪತ್ರ ಪರಿಶೀಲನಾ ತಂಡ, 12 ಮಾಸ್ಟರ್ ಟ್ರೈನರ್‌ಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಸಿಂದಗಿ ಪಟ್ಟಣದಲ್ಲಿರುವ ಆರ್.ಡಿ.ಪಾಟೀಲ್ ಕಾಲೇಜನಲ್ಲಿ ಮಸ್ಟರಿಂಗ್ ಮತ್ತು ಡಿ–ಮಸ್ಟರಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.
ಉಪ ಚುನಾವಣೆಗೆ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್‌ಗಳನ್ನು ಉಪಯೋಗಿಸಲಾಗುವುದು. ಒಟ್ಟು 696 ಬ್ಯಾಲೆಟ್ ಯುನಿಟ್, 687 ಕಲಂಟ್ರೋಲ್ ಯುನಿಟ್ ಹಾಗೂ 686 ವಿವಿ ಪ್ಯಾಟ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳಲಾಗಿದೆ ಎಂದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುರೇಶ ಕೋಕರೆ ಅವರನ್ನು ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್‌ಗಳ ಬಗ್ಗೆ ಜಿಲ್ಲಾ ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್, ಇಂಡಿ ಉಪ ವಿಭಾಗಾಧಿಕಾರಿ ರಾಹುಲ್ ಶಿಂಧೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
****
ಅ.8 ನಾಮಪತ್ರ ಸಲ್ಲಿಸುವ ಕೊನೆಯ ದಿನ
ಅ.11ರಂದು ನಾಮಪತ್ರ ಪರಿಶೀಲನೆ
ಅ.13 ನಾಮಪತ್ರ ಹಿಂಪಡೆಯಲು ಕೊನೆಯ ದಿನ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.