ADVERTISEMENT

ಚುನಾವಣಾ ಅಕ್ರಮ ಕಡಿವಾಣಕ್ಕೆ ರವಿ ಕೃಷ್ಣಾರೆಡ್ಡಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2023, 14:40 IST
Last Updated 3 ಫೆಬ್ರುವರಿ 2023, 14:40 IST
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.   

ವಿಜಯಪುರ: ‘ವಿಧಾನಸಭೆ ಚುನಾವಣೆಗೆ ಕೆಲವು ದಿನ ಬಾಕಿ ಇರುವಾಗಲೇ ಮತದಾರರಿಗೆ ಆಮಿಷ ಒಡ್ಡುವ ಪ್ರಯತ್ನ ಹಲವೆಡೆ ನಡೆಯುತ್ತಿದೆ. ಭ್ರಷ್ಟಾಚಾರಕ್ಕೆ ಆಸ್ಪದ ನೀಡದಂತೆ ಚುನಾವಣೆ ನಡೆಸಬೇಕು’ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (ಕೆ.ಆರ್.ಎಸ್.) ರಾಜ್ಯ ಘಟಕದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಆಗ್ರಹಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ನಡೆದ ಜಾಗೃತಿ ರ‍್ಯಾಲಿಯಲ್ಲಿ ಮಾತನಾಡಿದ ಅವರು, ‘ವಿವಿಧ ರಾಜಕೀಯ ಪಕ್ಷಗಳ ಭ್ರಷ್ಟ ರಾಜಕಾರಣಿಗಳು ಹಾಗೂ ಪುಡಾರಿಗಳು ತಮ್ಮತಮ್ಮ ಕ್ಷೇತ್ರದ ಮತದಾರರಿಗೆ ಆಮಿಷ ಒಡ್ಡುವ ಅಪರಾಧ ಸ್ವರೂಪದ ಕೆಲಸಗಳನ್ನು ಈಗಲೇ ಆರಂಭಿಸಿದ್ದಾರೆ. ಆ ಮೂಲಕ ಅಧಿಕಾರ ಹಿಡಿಯಲು ಯತ್ನಿಸುವವರಿಗೆ ತಕ್ಕ ಪಾಠ ಕಲಿಸಬೇಕಿದೆ. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ, ಆಯಾ ಜಿಲ್ಲಾಡಳಿತ ಕಠಿಣ ಕ್ರಮ ಅನುಸರಿಸಬೇಕು’ ಎಂದು ಒತ್ತಾಯಿಸಿದರು.

‘ಜನರು ಆಮಿಷಕ್ಕೆ ಬಲಿಯಾಗಿ ಭ್ರಷ್ಟರಿಗೆ ಮಣೆ ಹಾಕಬಾರದು. ಸಭ್ಯ ಮತ್ತು ಅಭಿವೃದ್ಧಿ–ಸುಗಮ ಆಡಳಿತದ ಕುರಿತಾಗಿ ದೂರದೃಷ್ಟಿತ್ವ ಹೊಂದಿರುವವರನ್ನು ಆಯ್ಕೆ ಮಾಡುವ ಕೆಲಸ ಮಾಡಬೇಕು’ ಎಂದರು.

ADVERTISEMENT

‘ಮತದಾರರಿಗೆ ಆಮಿಷ ಒಡ್ಡುವ ಪ್ರಕರಣ ವರದಿಯಾದರೆ ಜನರೂ ತಕ್ಷಣ ಚುನಾವಣಾ ಅಧಿಕಾರಿಗಳ ಗಮನಕ್ಕೆ ತರುವ ಕೆಲಸವಾಗಬೇಕು. ತಪ್ಪಿತಸ್ಥರನ್ನು ಶಿಕ್ಷಿಸುವಂತಾಗಬೇಕು’ ಎಂದು ಆಗ್ರಹಿಸಿದರು.

ಮತದಾರರಿಗೆ ಆಮಿಷ ಒಡುತ್ತಿರುವ ಕ್ರಿಮಿನಲ್ ನಡವಳಿಕೆಯ ರಾಜಕಾರಣಿಗಳ ದುಷ್ಕೃತ್ಯಗಳಿಗೆ ಕಡಿವಾಣ ಹಾಕಬೇಕು ಮತ್ತು ಪ್ರಜಾಪ್ರಭುತ್ವ ವಿರೋಧಿ ಕೃತ್ಯಗಳನ್ನು ಚುನಾವಣಾ ಆಯೋಗಕ್ಕೆ ವರದಿ ಮಾಡಬೇಕು ಎಂದು ಒತ್ತಾಯಿಸಿದರು.

ಭ್ರಷ್ಟ ಮತ್ತು ನೀಚ ರಾಜಕಾರಣಿಗಳ ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕದೆ ಇದ್ದರೇ ಕರ್ನಾಟಕದಲ್ಲಿ ಪ್ರಾಮಾಣಿಕರು, ದಕ್ಷರು, ಜನಪರ ಕಾಳಜಿಯುಳ್ಳ ರಾಜಕಾರಣಿಗಳು ಗೆಲ್ಲಲು ಸಾಧ್ಯವೇ ಇಲ್ಲ ಮತ್ತು ಕರ್ನಾಟಕ ಗುಂಡಾಚಾರಮುಕ್ತವಾಗುವುದು ಅಸಾಧ್ಯ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.