ವಿಜಯಪುರ: ಬಬಲೇಶ್ವರ ತಾಲ್ಲೂಕಿನ ನಂದಿ ಸಹಕಾರ ಸಕ್ಕರೆ ಕಾರ್ಖಾನೆ, ಇಂಡಿ ತಾಲ್ಲೂಕಿನ ಭೀಮಾಶಂಕರ ಸಹಕಾರ ಸಕ್ಕರೆ ಕಾರ್ಖಾನೆ, ಅಥಣಿ ತಾಲ್ಲೂಕಿನ ಕೃಷ್ಣಾ ಸಹಕಾರ ಸಕ್ಕರೆ ಕಾರ್ಖಾನೆಗಳಿಗೆ ಅಗತ್ಯವಿರುವ ಆರ್ಥಿಕ ನೆರವನ್ನು ಹೇಗೆ ಒದಗಿಸಬೇಕು ಎನ್ನುವ ಬಗ್ಗೆ ಸರಿಯಾದ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿಯವರು ಹಣಕಾಸು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರ ಕಚೇರಿಯಲ್ಲಿ ಸಹಕಾರ ಸಕ್ಕರೆ ಕಾರ್ಖಾನೆಗಳಿಗೆ ಒದಗಿಸಬೇಕಾದ ನೆರವು ನೀಡುವ ಕುರಿತು ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
‘ಸಹಕಾರ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕ ನೆರವು ಬೇಕಾಗಿದೆ. ಅವಧಿ ಸಾಲ, ರೈತರಿಗೆ ಮಾಡಬೇಕಾದ ಹಣ ಪಾವತಿ, ಕಬ್ಬಿನ ಕಟಾವು, ಸಾಗಣೆ, ಸಕ್ಕರೆ ಮತ್ತು ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆ ವೆಚ್ಚಗಳ ಭಾರ ವಿಪರೀತವಾಗಿದೆ. ಈ ಕಾರ್ಖಾನೆಗಳಿಗೆ ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ ಅಥವಾ ಬ್ಯಾಂಕ್ ಖಾತರಿ ಮೂಲಕ ಆರ್ಥಿಕ ಸಹಾಯ ದೊರಕಿಸಿ ಕೊಡಬೇಕು’ ಎಂದು ಸಭೆಯಲ್ಲಿ ಸಚಿವರು ಗಮನಕ್ಕೆ ತಂದರು. ಈ ಬಗ್ಗೆ ನಿಗಮದ ಜತೆಗೂ ಚರ್ಚಿಸಲು ಮುಖ್ಯಮಂತ್ರಿ ಸೂಚಿಸಿದರು.
‘ಕೃಷ್ಣಾ ಸಹಕಾರ ಸಕ್ಕರೆ ಕಾರ್ಖಾನೆಗೆ ₹192 ಕೋಟಿ, ನಂದಿ ಸಹಕಾರ ಸಕ್ಕರೆ ಕಾರ್ಖಾನೆಗೆ ₹150 ಕೋಟಿ, ಭೀಮಾ ಶಂಕರ ಸಹಕಾರ ಸಕ್ಕರೆ ಕಾರ್ಖಾನೆಗೆ ₹130 ಕೋಟಿ ಬೇಕಿದೆ. ಇಷ್ಟು ನೆರವು ದೊರಕಿಸಿ ಕೊಟ್ಟರೆ, ವಿದ್ಯುತ್ ಉತ್ಪಾದನೆಯಿಂದ ಬರುವ ಹಣವನ್ನು ಸಾಲ ತೀರಿಸಲು ಕಾರ್ಖಾನೆಗಳು ಆಸಕ್ತಿ ಹೊಂದಿವೆ’ ಎಂದು ಅವರು ನುಡಿದಿದ್ದಾರೆ.
ಈ ಸಂಬಂಧ ಸಕ್ಕರೆ ಆಯುಕ್ತರು ಮತ್ತು ಎನ್.ಸಿ.ಡಿ.ಸಿ. ಅಧಿಕಾರಿಗಳ ಜತೆ ಸಮಗ್ರವಾಗಿ ಚರ್ಚಿಸಿ, ಸಮರ್ಪಕ ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿ ಸೂಚಿಸಿದರು.
ಸಚಿವರಾದ ಎಂ.ಬಿ. ಪಾಟೀಲ, ಎಚ್.ಕೆ. ಪಾಟೀಲ, ಶಿವಾನಂದ ಪಾಟೀಲ, ಎಚ್.ಸಿ. ಮಹದೇವಪ್ಪ, ಶಾಸಕರಾದ ಯಶವಂತರಾಯ ಗೌಡ ಪಾಟೀಲ, ಜೆ.ಟಿ. ಪಾಟೀಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಹಣಕಾಸು ಇಲಾಖೆಯ ಕಾರ್ಯದರ್ಶಿ ಪಿ.ಸಿ. ಜಾಫರ್, ನಂದಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಕುಮಾರ ದೇಸಾಯಿ ಜೈನಾಪುರ, ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ರಾಜಗೋಪಾಲ ಭಾಗವಹಿಸಿದ್ದರು.
‘ಕೃಷ್ಣಾ ಕಾರ್ಖಾನೆಯು 27 ಮೆಗಾವಾಟ್ ಮತ್ತು ನಂದಿ ಕಾರ್ಖಾನೆಯು 37 ಮೆಗಾವಾಟ್ ಸಾಮರ್ಥ್ಯದ ಸಹವಿದ್ಯುತ್ (ಕೋಜೆನ್) ಘಟಕ ಸ್ಥಾಪಿಸುವ ಆಸಕ್ತಿ ಹೊಂದಿವೆ. ಜೊತೆಗೆ ಕೃಷ್ಣಾ ಹಾಗೂ ಭೀಮಾ ಕಾರ್ಖಾನೆಯು ಎಥೆನಾಲ್ ಉತ್ಪಾದನಾ ಘಟಕವನ್ನೂ ಸ್ಥಾಪಿಸಲು ಮುಂದಾಗಿದೆ. ಸಹಕಾರ ತತ್ವದ ಮೇಲೆ ನಡೆಯುತ್ತಿರುವ ಈ ಕಾರ್ಖಾನೆಗಳ ಪುನಶ್ಚೇತನ ಸಮರ್ಪಕವಾಗಿ ನಡೆಯಬೇಕಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.