ತಿಕೋಟಾ: ಬಬಲೇಶ್ವರ ಹಾಗೂ ತಿಕೋಟಾ ತಾಲ್ಲೂಕಿನ ದಾಶ್ಯಾಳ, ಸಾರವಾಡ ಹಾಗೂ ದದಾಮಟ್ಟಿ ಗ್ರಾಮಗಳಲ್ಲಿ ಸ್ವಚ್ಛ ವಾಹಿನಿ ಮತ್ತು ಡಂಗುರ ಸಾರುವ ಮೂಲಕ ಪ್ರವಾಹದಿಂದ ಸುರಕ್ಷಿತವಾಗಿರಲು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಹೇಳಿದರು.
ತಿಕೋಟಾ ಮತ್ತು ಬಬಲೇಶ್ವರ ತಾಲ್ಲೂಕಿಗೆ ಗುರುವಾರ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ತಿಕೋಟಾ ಪಟ್ಟಣದ ಕೆ.ಜಿ.ಎಸ್ ಶಾಲೆಗೆ ಭೇಟಿ ನೀಡಿ, ಶಾಲೆಯ ಮೂಲ ಸೌಕರ್ಯಗಳನ್ನು ವೀಕ್ಷಿಸಿದರು, ಶಿಥಿಲಾವಸ್ಥೆಗೊಂಡಿರುವ ಶಾಲಾ ಕೊಠಡಿಗಳಲ್ಲಿ ಮಕ್ಕಳಿಗೆ ಬೋಧನೆ ಮಾಡದೇ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ಪಾಠ ಮಾಡಬೇಕು. ವಿದ್ಯಾರ್ಥಿಗಳ ಶಾಲಾ ಶೌಚಾಲಯ ಕಡ್ಡಾಯವಾಗಿ ಬಳಸುವಂತೆ ಚಾಲ್ತಿಯಲ್ಲಿ ಇಡಬೇಕು. ಮುಂಬರುವ ದಿನಗಳಲ್ಲಿ ಮಳೆ ಬರುವ ಸಾಧ್ಯತೆ ಇದೆ. ಯಾವುದೇ ಶಾಲೆ ಆವರಣದಲ್ಲಿ ಮಳೆ ನೀರು ನಿಲ್ಲದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಿಕೊಂಡು, ಎಲ್ಲೆಲ್ಲಿ ದುರಸ್ತಿ ಅವಶ್ಯಕತೆ ಇದೆಯೋ ಅಲ್ಲಿ ಕ್ರಿಯಾಯೋಜನೆ ತಯಾರಿಸಿ, ಇಲಾಖೆಯ ಮೇಲಾಧಿಕಾರಿಗಳಿಗೆ ಸಲ್ಲಿಸಬೇಕು ಎಂದರು.
ಪಟ್ಟಣದಿಂದ ತಾಜಪುರ ಎಚ್. ಗ್ರಾಮ ಪಂಚಾಯಿತಿಗೆ ಹೋಗುವ ರಸ್ತೆಯ ಮಧ್ಯದಲ್ಲಿರುವ ಹಳ್ಳಕ್ಕೆ ಭೇಟಿ ನೀಡಿದ ಸಿಇಒ, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಹಳ್ಳವನ್ನು ನಿಯಮಾನುಸಾರ ದುರಸ್ತಿ ಮಾಡಲು ಮತ್ತು ಪರಿಹಾರ ಕೈಗೊಳ್ಳುವ ಕ್ರಮಗಳ ಕುರಿತು ನಾಳೆ ಬೆಳಿಗ್ಗೆ ನನಗೆ ವರದಿ ಸಲ್ಲಿಸಬೇಕು ಎಂದು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೋಟ್ಯಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರನಾಳ ಗ್ರಾಮದ ಡೋಣಿ ನದಿ ಬ್ರಿಡ್ಜ್ ಗೆ ಭೇಟಿ ನೀಡಿ ಪರಿಶೀಲಿಸಿದರು. ರೈತರ ಬೆಳೆ ಹಾನಿಯಾಗದಂತೆ ಅದಕ್ಕೆ ಪೂರಕವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಮತ್ತು ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.
ಹೊನವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಸಿಇಒ, ಶಾಲಾ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಪ್ರಗತಿ ಹಂತದಲ್ಲಿರುವ ಶೌಚಾಲಯ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು. ಅಡುಗೆ ಕೋಣೆ ಕಾಮಗಾರಿಯನ್ನು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.
ಬಸವಂತರಾಯ ಪ್ರೌಢ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿದ್ಯಾರ್ಥಿಗಳಿಗೆ ನಿಯಮಿತವಾಗಿ ಕಾಲ ಕಾಲಕ್ಕೆ ಪರೀಕ್ಷೆಗಳನ್ನು ಏರ್ಪಡಿಸಬೇಕು. ಪರೀಕ್ಷೆಯಿಂದ ವಿದ್ಯಾರ್ಥಿಗಳ ಜ್ಞಾನ ವರ್ಧನೆಗೆ ವಿನೂತನ ಚಟುವಟಿಕೆಗಳನ್ನು ಜರುಗಿಸಬೇಕು. ಪ್ರೌಢಶಾಲೆಗೆ ಖಾಲಿ ಇದ್ದ ಶಿಕ್ಷಕರ ಹುದ್ದೆಗೆ ಪ್ರಸ್ತಾವ ಕೂಡಲೇ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ತಿಕೋಟಾ ತಾಲ್ಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವಂತ್ರಾಯಗೌಡ ಬಿರಾದಾರ, ಬಬಲೇಶ್ವರ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಜೆ.ಎಸ್.ಪಠಾಣ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರವಿ ಪವಾರ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ ಬಳೋಲಮಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಎಸ್. ಮ್ಯಾಗೇರಿ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಬಸನಗೌಡ ಪಾಟೀಲ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಜನಮಟ್ಟಿ, ತಾಲ್ಲೂಕ ಪಂಚಾಯಿತಿಯ ಸಹಾಯಕ ನಿರ್ದೇಶಕರು (ಗ್ರಾ.ಉ) ಬಸವರಾಜ ಸಂಕಗೊಂಡ, ಸೆಕ್ಷನ್ ಇಂಜಿನಿಯರ್ ಪ್ರಶಾಂತ ಹೆಬ್ಬಾರೆ, ತಾಲ್ಲೂಕು ಪಂಚಾಯಿತಿ ಲೆಕ್ಕಾಧಿಕಾರಿ ಅನ್ವರ್ ನದಾಫ್, ಶೋಭಾ ಶೀಳಿನ, ಉಮೇಶ ಕನಮಡಿ, ಸಂತೋಷಕುಮಾರ ಬಿರಾದಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.