ಮುದ್ದೇಬಿಹಾಳ : ಪಟ್ಟಣದ ನ್ಯಾಯಾಲಯದ ಕಟ್ಟಡದಲ್ಲಿ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸ್ಥಾಪನೆಗೆ ಸರ್ಕಾರದಿಂದ ಮಂಜೂರಾತಿ ದೊರೆತ ಹಿನ್ನೆಲೆಯಲ್ಲಿ ಇಲ್ಲಿನ ವಕೀಲರ ಸಂಘದ ನೇತೃತ್ವದಲ್ಲಿ ಶುಕ್ರವಾರ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮಾತನಾಡಿ, ‘ಕರ್ನಾಟಕ ಉಚ್ಛ ನ್ಯಾಯಲಯವು ಮುದ್ದೇಬಿಹಾಳದಲ್ಲಿ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸ್ಥಾಪನೆಗೆ ನಿರ್ಣಯ ಕೈಗೊಂಡಿದ್ದನ್ನು ಸರ್ಕಾರದ ಆರ್ಥಿಕ ಇಲಾಖೆಗೆ ತಿಳಿಸಿತ್ತು. ನ್ಯಾಯಾಲಯಕ್ಕೆ ಅಗತ್ಯವಾದ ಪೂರಕ ಅಧಿಕಾರಿ, ಸಿಬ್ಬಂದಿ ಹುದ್ದೆಗಳೊಂದಿಗೆ ಮಂಜೂರಾತಿ ನೀಡಲು ಹೈಕೋರ್ಟ್ ರಿಜಿಸ್ಟಾರ್ ಜನರಲ್ ಅವರು ಕೋರಿದ್ದರು. ಒಟ್ಟು 16 ಹುದ್ದೆಗಳಿಗೆ ಸರ್ಕಾರ ಮಂಜೂರಾತಿ ನೀಡಿದೆ’ ಎಂದು ತಿಳಿಸಿದರು.
‘ಈ ನ್ಯಾಯಾಲಯ ಸ್ಥಾಪನೆಗೆ ನ್ಯಾಯಮೂರ್ತಿ ಎಚ್.ಪಿ.ಸಂದೇಶ್,ಈಗಿನ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ಹಿಂದಿನ ಕಾನೂನು ಸಚಿವ ಎಚ್.ಕೆ.ಪಾಟೀಲ್, ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಕಾರಣರಾಗಿದ್ದಾರೆ. ಹಣಕಾಸಿನ ಇಲಾಖೆ ಜಿಲ್ಲಾ ನ್ಯಾಯಾಲಯ ಸ್ಥಾಪನೆಗೆ ಡಿ.10ರಂದು ಗೆಜೆಟ್ ನೋಟಿಫಿಕೇಷನ್ ಮಾಡಿದೆ’ ಎಂದರು.
‘ನ್ಯಾಯಾಲಯ ಸ್ಥಾಪನೆಯಿಂದ ರೈತರಿಗೆ, ವ್ಯಾಪಾರಸ್ಥರಿಗೆ, ಸಾರ್ವಜನಿಕರಿಗೆ, ವಕೀಲರಿಗೆ ಹೆಚ್ಚು ಅನುಕೂಲವಾಗಲಿದೆ. ಹೆಚ್ಚಿನ ಆರ್ಥಿಕ ಹೊರೆ ತಪ್ಪಿ ಸಮಯದ ಉಳಿತಾಯವಾಗುತ್ತದೆ ಎಂದು ತಿಳಿಸಿದರು.
ಸಂಘದ ಉಪಾಧ್ಯಕ್ಷ ಎಚ್.ಜಿ.ನಾಗೋಡ, ಪ್ರಧಾನ ಕಾರ್ಯದರ್ಶಿ ಪಿ.ಬಿ.ಗೌಡರ, ಖಜಾಂಚಿ ಬಿ.ಪಿ.ಮ್ಯಾಗೇರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.