ADVERTISEMENT

ಗಾಂಧಿ; ಅಪರೂಪದ ಛಾಯಾಚಿತ್ರ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2018, 15:43 IST
Last Updated 2 ಅಕ್ಟೋಬರ್ 2018, 15:43 IST
ವಿಜಯಪುರದ ಪ್ರವಾಸೋದ್ಯಮ ಇಲಾಖೆಯ ಆರ್ಟ್‌ ಗ್ಯಾಲರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಮಹಾತ್ಮಗಾಂಧೀಜಿ ಅವರ ಅಪರೂಪದ ಛಾಯಾಚಿತ್ರ ಪ್ರದರ್ಶನವನ್ನು ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಮಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಮನಗೂಳಿ, ಜಿ.ಪಂ.ಅಧ್ಯಕ್ಷೆ ನೀಲಮ್ಮ ಮೇಟಿ ಉದ್ಘಾಟಿಸಿದರು
ವಿಜಯಪುರದ ಪ್ರವಾಸೋದ್ಯಮ ಇಲಾಖೆಯ ಆರ್ಟ್‌ ಗ್ಯಾಲರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಮಹಾತ್ಮಗಾಂಧೀಜಿ ಅವರ ಅಪರೂಪದ ಛಾಯಾಚಿತ್ರ ಪ್ರದರ್ಶನವನ್ನು ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಮಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಮನಗೂಳಿ, ಜಿ.ಪಂ.ಅಧ್ಯಕ್ಷೆ ನೀಲಮ್ಮ ಮೇಟಿ ಉದ್ಘಾಟಿಸಿದರು   

ವಿಜಯಪುರ:ಮಹಾತ್ಮ ಗಾಂಧೀಜಿ ಅವರ ಜೀವನ ಚರಿತ್ರೆಯ ಅತ್ಯುತ್ತಮ ಛಾಯಾಚಿತ್ರಗಳ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಮನಗೂಳಿ ಮಂಗಳವಾರ ಚಾಲನೆ ನೀಡಿದರು.

ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಪ್ರವಾಸೋದ್ಯಮ ಇಲಾಖೆಯ ಆರ್ಟ್‌ ಗ್ಯಾಲರಿಯಲ್ಲಿ ಆಯೋಜಿಸಿದ್ದ ಮಹಾತ್ಮಗಾಂಧೀಜಿ ಅವರ ಅಪರೂಪದ ಛಾಯಾಚಿತ್ರ ಪ್ರದರ್ಶನ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಗಮನ ಸೆಳೆಯಿತು.

ಮಹಾತ್ಮ ಗಾಂಧೀಜಿಯವರ ಬಾಲ್ಯದ ಜೀವನದಿಂದ ವಿವಿಧ ಸ್ವಾತಂತ್ರ್ಯ ಚಳವಳಿಗಳ ಅಪರೂಪದ ಛಾಯಾಚಿತ್ರ ಪ್ರದರ್ಶನ ಗಮನ ಸೆಳೆಯುತ್ತಿದ್ದು, ಉಚಿತ ಪ್ರವೇಶಾವಕಾಶವನ್ನು ಈ ಛಾಯಾಚಿತ್ರ ಪ್ರದರ್ಶನಕ್ಕೆ ಕಲ್ಪಿಸಲಾಗಿದೆ. ಶುಕ್ರವಾರದವರೆಗೂ ಈ ಛಾಯಾಚಿತ್ರ ಪ್ರದರ್ಶನಗೊಳ್ಳಲಿದ್ದು, ಸಾರ್ವಜನಿಕರೆಲ್ಲರೂ ವೀಕ್ಷಿಸಬಹುದಾಗಿದೆ.

ADVERTISEMENT

ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಎಂ.ಸಿ.ಮನಗೂಳಿ, ‘ನಗರದಲ್ಲಿ ಸುಸಜ್ಜಿತ ಆರ್ಟ್‌ ಗ್ಯಾಲರಿ ಸ್ಥಾಪನೆಗೆ ಮಂಜೂರಾತಿ ದೊರೆತಿದ್ದು, ಸರ್ಕಾರದ ಮಟ್ಟದಲ್ಲಿ ಇನ್ನಿತರ ಅವಶ್ಯಕತೆಗಳ ಬಗ್ಗೆಯೂ ಗಮನ ಸೆಳೆದು ಪ್ರವಾಸಿಗರಿಗೆ ಆಕರ್ಷಣೀಯವಾಗುವ ಆರ್ಟ್‌ ಗ್ಯಾಲರಿ ಸ್ಥಾಪನೆಗೆ ಪ್ರಯತ್ನಿಸಲಾಗುವುದು’ ಎಂದರು.

ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಹೊರ ತಂದಿರುವ ಗಾಂಧೀಜಿ ವಿಶೇಷಾಂಕಗಳಾದ ಜನಪದ, ಮಾರ್ಚ್‌ ಆಫ್ ಕರ್ನಾಟಕ ಕೈಪಿಡಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಬಿಡುಗಡೆಗೊಳಿಸಿದರು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ನೀಲಮ್ಮ ಮೇಟಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬಾಪು ಗಾಂಧಿ, ಗಾಂಧಿ ಬಾಪು ಆದ ಕತೆಯ ಕೈಪಿಡಿಯನ್ನು ಬಿಡುಗಡೆಗೊಳಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಸುಲೇಮಾನ ಡಿ.ನದಾಫ್, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಮಹೇಶ ಕ್ಯಾತನ್, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್.ಜಿ.ಲೋಣಿ, ಡಿಎಫ್ಒ ಸೆರಿನಾ, ರಿಯಾಜ ಫಾರೂಖಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.