ADVERTISEMENT

ಗಣೇಶೋತ್ಸವ ಐದು ದಿನಗಳಿಗೆ ಸೀಮಿತ

ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ್ ಸೂಚನೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2021, 14:10 IST
Last Updated 7 ಸೆಪ್ಟೆಂಬರ್ 2021, 14:10 IST
ವಿಜಯಪುರದಲ್ಲಿ ಮಂಗಳವಾರ ಗಣೇಶೋತ್ಸವದ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ್, ಜಿ.ಪಂ.ಸಿಇಓ ಗೋವಿಂದ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಉಪ ವಿಭಾಗಾಧಿಕಾರಿ ಬಲರಾಮ ಲಮಾಣಿ, ಪಾಲಿಕೆ ಆಯುಕ್ತ ವಿಜಯ್‌ ಮೆಕ್ಕಳಕಿ, ಎಎಸ್‌ಪಿ ರಾಮ ಅರಿಸಿದ್ಧಿ ಇದ್ದಾರೆ
ವಿಜಯಪುರದಲ್ಲಿ ಮಂಗಳವಾರ ಗಣೇಶೋತ್ಸವದ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ್, ಜಿ.ಪಂ.ಸಿಇಓ ಗೋವಿಂದ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಉಪ ವಿಭಾಗಾಧಿಕಾರಿ ಬಲರಾಮ ಲಮಾಣಿ, ಪಾಲಿಕೆ ಆಯುಕ್ತ ವಿಜಯ್‌ ಮೆಕ್ಕಳಕಿ, ಎಎಸ್‌ಪಿ ರಾಮ ಅರಿಸಿದ್ಧಿ ಇದ್ದಾರೆ   

ವಿಜಯಪುರ: ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಗಣೇಶೋತ್ಸವವನ್ನು ಐದು ದಿನಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಗಣೇಶೋತ್ಸವದ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವೇಳೆ ಶಾಂತತೆ ಹಾಗೂ ಕೋವಿಡ್ ನಿಯಮಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವೇಳೆ ಕೋವಿಡ್-19 ಲಸಿಕಾ ಕಾರ್ಯಕ್ರಮವನ್ನೂ ಆಯೋಜಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಅವರು ತಿಳಿಸಿದರು.

ಈ ಬಾರಿಯೂ ಪಿ.ಓ.ಪಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧವಿದ್ದು, ಸಾರ್ವಜನಿಕರು ಸಹಕರಿಸಲು ವಿನಂತಿಸಿದರು.

ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳಗಳಲ್ಲಿ ಅನಗತ್ಯ ಜನಸಂದಣಿ ಆಗದಂತೆ ಅಧಿಕಾರಿಗಳು, ಸಂಘಟಕರು ನೋಡಿಕೊಳ್ಳಬೇಕು ಎಂದು ಹೇಳಿದರು.

ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳು ಸಮನ್ವಯತೆಯಿಂದ ಕೋವಿಡ್ ಮಾರ್ಗಸೂಚಿಗಳನ್ನು ಗಮನದಲ್ಲಿರಿಸಿಕೊಂಡು ಕಾರ್ಯನಿರ್ವಹಿಸಲು ಸೂಚಿಸಿದರು.

ಗಣೇಶ ಚತುರ್ಥಿಯನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ-ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬೇಕು ಎಂದರು.

ಸರ್ಕಾರದ ಆದೇಶದಂತೆ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲು ಅವಕಾಶ ಕಲ್ಪಿಸಲಾಗಿದ್ದು, ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸಬೇಕು ಎಂದು ತಿಳಿಸಿದರು.

ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು, ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮಹಾನಗರ ಪಾಲಿಕೆ, ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯಬೇಕು ಎಂದರು.

ನಗರ ಪ್ರದೇಶಗಳಲ್ಲಿ ವಾರ್ಡಿಗೆ ಒಂದರಂತೆ ಸಾರ್ವಜನಿಕ ಗಣೇಶೋತ್ಸವನ್ನು ಮಾತ್ರ ಆಚರಿಸಲು ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸಬೇಕು. ಒಮ್ಮೆಲೇ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾಧಿಗಳಿಗೆ ಅನುವು ಮಾಡಬೇಕು ಎಂದು ಹೇಳಿದರು.

ಸಾರ್ವಜನಿಕ ಗಣೇಶೋತ್ಸವ ಆಯೋಜಕರು ಕೋವಿಡ್-19ರ ನೆಗೆಟಿವ್ ವರದಿ ಮತ್ತು ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದರು.

ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು. ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿ ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಮುಖ್ಯವಾಗಿ ಡಿ.ಜೆ. ಮೂಲಕ ಹಾಗೂ ಇನ್ನಿತರೆ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ ಎಂದು ಅವರು ಹೇಳಿದರು.

ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಮೆರವಣಿಗೆ ಸಂಪೂರ್ಣ ನಿರ್ಬಂಧಿಸಲಾಗಿದೆ ಎಂದರು.

ಮನೆಯಲ್ಲಿ ವಿಗ್ರಹಗಳನ್ನು ಪೂಜಿಸಿದ ಬಳಿಕ ಮನೆಯಲ್ಲಿಯೇ ವಿಸರ್ಜಿಸಬೇಕು ಮತ್ತು ಸರ್ಕಾರಿ, ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಮಹಾನಗರ ಪಾಲಿಕೆ, ಜಿಲ್ಲಾಡಳಿತ ಹತ್ತಿರದ ಸ್ಥಳೀಯ ಸಂಸ್ಥೆಗಳ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ನಿರ್ಮಿಸಲಾಗುವ ಹೊಂಡ ಅಥವಾ ಮೊಬೈಲ್ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಉಪ ವಿಭಾಗಾಧಿಕಾರಿ ಬಲರಾಮ ಲಮಾಣಿ, ಮಹಾನಗರ ಪಾಲಿಕೆಯ ಆಯುಕ್ತ ವಿಜಯ್‌ ಮೆಕ್ಕಳಕಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಿಸಿದ್ಧಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಕುಮಾರ ಯರಗಲ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.