ವಿಜಯಪುರ: ವಿದ್ಯಾರ್ಥಿಗಳು ಓದಿನೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಿ ಸುಂದರ ಭದ್ರ ಭವಿಷ್ಯಕ್ಕೆ ಬುನಾದಿ ಹಾಕಿಕೊಳ್ಳುವ ಮೂಲಕ ಜೀವನದ ಪ್ರಮುಖ ಘಟ್ಟವಾದ ವಿದ್ಯಾರ್ಥಿ ಜೀವನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗುರುವಾರ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಅರಕೇರಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಅಂತರ್ ಶಾಲಾ ಹಾಗೂ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನೆರಳು ನಮ್ಮನ್ನು ಹಿಂಬಾಲಿಸಿದಂತೆ ನಮ್ಮ ಸಾಧನೆಗಳು ನಮ್ಮನ್ನು ಹಿಂಬಾಲಿಸುತ್ತವೆ. ಮೇಜರ್ ಧ್ಯಾನ ಚಂದ ಅವರ ಜನ್ಮದಿನದಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಅವರು ಹಾಕಿಯಲ್ಲಿ ತಮ್ಮದೆಯಾದ ಛಾಪು ಮೂಡಿಸಿ, ಹಾಕಿ ಮಾಂತ್ರಿಕರಾಗಿದ್ದು ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಅವರ ಸಾಧನೆ ಅವಲೋಕಿಸಿ, ಅವರ ಸತತ ಶ್ರಮ ಕಠಿಣ ಅಭ್ಯಾಸಗಳಿಂದ ಮಾಡಿರುವ ಅವರ ಸಾಧನೆಯನ್ನು ವಿದ್ಯಾರ್ಥಿಗಳು ಪ್ರೇರಣೆಯಾಗಿ ಪಡೆದು, ಸಾಧನೆ ಪಥದಲ್ಲಿ ಸಾಗಿ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರುವಂತಾಗಲಿ ಎಂದು ಅವರು ಆಶಿಸಿದರು.
ಈ ವಸತಿ ಶಾಲೆಯು ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಹೆಸರಿನಲ್ಲಿದ್ದು, ಅವರ ಜೀವನ ಚರಿತ್ರೆ ಅಧ್ಯಯನ ಮಾಡುವ ಮೂಲಕ ಅವರ ಸಾಧನೆಗಳನ್ನು ತಿಳಿದುಕೊಳ್ಳಬೇಕು. ಸಾಧಕರು ನಮಗೆ ಯಾವಾಗಲೂ ಪ್ರೇರಣಾದಾಯಕರಾಗಿರುತ್ತಾರೆ ಎಂದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್ ಮಾತನಾಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ಮಾಡಲು ಹಲವು ಅವಕಾಶ ಒದಗಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಉತ್ತಮ ಸಾಧನೆಗೆ ಮುಂದಾಗಬೇಕು ಎಂದು ಹೇಳಿದರು.
ವಿಜಯಪುರ ಐ.ಆರ್.ಬಿ ಕಮಾಂಡೆಂಟ್ ನಂದಕುಮಾರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಅರಕೇರಿಯ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಪ್ರಾಂಶುಪಾಲ ರೇಖಾ ಬಾರ್ಕಿಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.