ADVERTISEMENT

ವಿಜಯಪುರ ಮೊದಲ ಹಂತ, ಇಂಡಿ ಎರಡನೇ ಹಂತ

ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಚುನಾವಣೆ ನಡೆಸಲು ಸನ್ನದ್ಧ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 13:43 IST
Last Updated 30 ನವೆಂಬರ್ 2020, 13:43 IST
ವಿಜಯಪುರ ಜಿಲ್ಲೆಯಲ್ಲಿ ನಡೆಯಲಿರುವ ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲೆಯ ಅಧಿಕಾರಿಗಳೊಂದಿಗೆ ಆಯೋಜಿಸಲಾಗಿದ್ದ ವಿಡಿಯೊ ಸಂವಾದದಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ಮಾತನಾಡಿದರು 
ವಿಜಯಪುರ ಜಿಲ್ಲೆಯಲ್ಲಿ ನಡೆಯಲಿರುವ ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲೆಯ ಅಧಿಕಾರಿಗಳೊಂದಿಗೆ ಆಯೋಜಿಸಲಾಗಿದ್ದ ವಿಡಿಯೊ ಸಂವಾದದಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ಮಾತನಾಡಿದರು    

ವಿಜಯಪುರ: ವಿಜಯಪುರ ಉಪ ವಿಭಾಗದ ವಿಜಯಪುರ, ಬಬಲೇಶ್ವರ, ತಿಕೋಟಾ, ಬಸವನ ಬಾಗೇವಾಡಿ, ಕೋಲ್ಹಾರ, ನಿಡಗುಂದಿ, ಮುದ್ದೇಬಿಹಾಳ ಮತ್ತು ತಾಳಿಕೋಟಿ ತಾಲ್ಲೂಕುಗಳಲ್ಲಿ ಡಿಸೆಂಬರ್‌ 22ರಂದು ಮೊದಲನೇ ಹಂತದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ತಿಳಿಸಿದರು.

ಜಿಲ್ಲೆಯ ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್‌, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ ಸಂವಾದದಲ್ಲಿ ಅವರು ಮಾತನಾಡಿದರು.

ಇಂಡಿ ಉಪ ವಿಭಾಗದ ಇಂಡಿ, ಚಡಚಣ, ಸಿಂದಗಿ, ಆಲಮೇಲ ಮತ್ತು ದೇವರ ಹಿಪ್ಪರಗಿ ತಾಲ್ಲೂಕುಗಳಲ್ಲಿ ಡಿಸೆಂಬರ್‌ 27ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಸಲಾಗುವುದು ಎಂದು ಹೇಳಿದರು.

ADVERTISEMENT

ಮುಕ್ತ ನ್ಯಾಯಸಮ್ಮತ, ಶಾಂತಿಯುತವಾಗಿ ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲು ಈಗಿನಿಂದಲೇ ಸಿದ್ಧಗೊಳ್ಳುವಂತೆ ಅವರು ಸೂಚನೆ ನೀಡಿದ್ದಾರೆ.

ಯಾವುದೇ ಲೋಪಕ್ಕೆ ಅವಕಾಶ ನೀಡದೆ ಚುನಾವಣಾ ಆಯೋಗದ ನೂತನ ನಿಯಮಾವಳಿ ಹಾಗೂ ನಿರ್ದೇಶನಗಳನ್ವಯ ವ್ಯವಸ್ಥಿತವಾಗಿ ಚುನಾವಣೆ ನಡೆಸಲು ಸನ್ನದ್ಧಗೊಳ್ಳುವಂತೆ ಅವರು ಸೂಚಿಸಿದರು.

ಹೊಸದಾಗಿ ರಚನೆಯಾಗಿರುವ ಆಲಮೇಲ ತಾಲ್ಲೂಕಿನಲ್ಲಿ ತಾಲ್ಲೂಕು ಕಚೇರಿ ಇಲ್ಲದೇ ಇರುವುದರಿಂದ ಮೂಲ ಸಿಂದಗಿ ತಾಲ್ಲೂಕಿನಲ್ಲಿ ಮಸ್ಟ್ರಿಂಗ್, ಡಿಮಸ್ಟ್ರಿಂಗ್ ಮತ್ತು ಮತ ಎಣಿಕೆ ಕಾರ್ಯವನ್ನು ಮಾಡಿಕೊಳ್ಳಬೇಕು ಎಂದರು.

ಗ್ರಾಮ ಪಂಚಾಯ್ತಿ ಚುನಾವಣೆಗೆ ಸಂಬಂಧಪಟ್ಟಂತೆ ಈಗಾಗಲೇ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾ, ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೇನರ್‌ಗಳನ್ನು ನೇಮಕ ಮಾಡಿದ್ದು, ಅವರಿಗೆ ಒಂದು ಹಂತದ ತರಬೇತಿಯನ್ನು ಜಿಲ್ಲಾ ಆಡಳಿತದಿಂದ ನೀಡಲಾಗಿದೆ ಎಂದು ಹೇಳಿದರು.

ಮತದಾರರ ಪಟ್ಟಿಗೆ ಸಂಬಂಧಪಟ್ಟಂತೆ ಯಾವುದಾದರೂ ದೂರುಗಳು ಬಂದಲ್ಲಿ ಅವುಗಳನ್ನು ಶೀಘ್ರ ಇತ್ಯರ್ಥಗೊಳಿಸುವ ಬಗ್ಗೆ ಕ್ರಮವಹಿಸಬೇಕು ಎಂದರು.

ಹಿಂದಿನ ಚುನಾವಣೆ ಘಟನಾವಳಿಗಳನ್ನು ಪರಿಶೀಲಿಸಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಿ, ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಬೇಕು. ಚುನಾವಣಾಧಿಕಾರಿಗಳಿಗೆ, ಮತಗಟ್ಟೆ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿ, ಸಿಬ್ಬಂದಿಗಳಿಗೆ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಮಾಡಬೇಕು ಎಂದು ಸೂಚಿಸಿದರು.

ಮತದಾನದ ದಿನದಂದು ಮತಗಟ್ಟೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಮತದಾನದ ಸಮಯದಲ್ಲಿ ಪರಸ್ಪರ ಅಂತರವನ್ನು ಕಾಯ್ದುಕೊಂಡು ಮತದಾನ ಮಾಡುವಂತೆ ಮತಗಟ್ಟೆಯಲ್ಲಿ ಹಾಜರಿರುವ ಪೊಲೀಸ್ ಸಿಬ್ಬಂದಿ ಕ್ರಮವಹಿಸುವಂತೆ ತಿಳಿಸಿದರು.

ನಾಮಪತ್ರಗಳನ್ನು ಆಯಾ ಗ್ರಾಮ ಪಂಚಾಯ್ತಿ ಕಾರ್ಯಾಲಯಗಳಲ್ಲಿಯೇ ಸ್ವೀಕರಿಸುವುದರಿಂದ ಗ್ರಾಮ ಪಂಚಾಯ್ತಿಗಳಲ್ಲಿ ಕರ್ತವ್ಯ ನಿರ್ವಹಿಸುವ ಚುನಾವಣಾ ಆಧಿಕಾರಿಗಳಿಗೆ ಇಂಟರ್‌ನೆಟ್‌ ಸೌಲಭ್ಯದೊಂದಿಗೆ ಸುಸ್ಥಿತಿಯಲ್ಲಿರುವ ಕಂಪ್ಯೂಟರ್‌ಗಳನ್ನೊಳಗೊಂಡಂತೆ ಮೂಲ ಸೌಕರ್ಯಗಳನ್ನು ಹಾಗೂ ಡೇಟಾ ಎಂಟ್ರಿ ಆಪರೇಟರ್‌ಗಳನ್ನು ಒದಗಿಸುವಂತೆ ಪಿ.ಡಿ.ಒ.ಗಳಿಗೆ ಸೂಕ್ತ ಸೂಚನೆ ನೀಡಬೇಕು ಎಂದು ಹೇಳಿದರು.

ಗ್ರಾಮ ಪಂಚಾಯ್ತಿಯಲ್ಲಿ ಸರ್ಕಾರಿ ನೌಕರರು ಪಕ್ಷಾತೀತವಾಗಿ ನಡೆದುಕೊಳ್ಳಬೇಕು ಹಾಗೂ ನೌಕರರು ಚುನಾವಣಾ ಕಾರ್ಯದ ಬಗ್ಗೆ ಯಾವುದೇ ದೂರುಗಳಿಗೆ ಎಡೆಮಾಡಿಕೊಳ್ಳದಂತೆ ನಡೆದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಮಾತನಾಡಿ, ಶಾಂತಿಯುತ ಚುನಾವಣೆಗೆ ಸಕಲ ಕ್ರಮ ಕೈಗೊಳ್ಳಲಾಗುವುದು, ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು. ಪೊಲೀಸ್ ಇಲಾಖೆಯೊಂದಿಗೆ ವಿವಿಧ ಇಲಾಖೆ ಅಧಿಕಾರಿಗಳೂ ಸಮನ್ವಯತೆಯಿಂದ ಚುನಾವಣೆ ನ್ಯಾಯಸಮ್ಮತ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿ, ಚುನಾವಣೆ ಘೋಷಣೆ ನಂತರ ಚುನಾವಣೆ ನೀತಿ ಸಂಹಿತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಭ್ಯರ್ಥಿಗಳಿಗೆ ಜಾತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು. ಚುನಾವಣಾ ಲೋಪಕ್ಕೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.