
ವಿಜಯಪುರ: ‘ಕ್ಯಾನ್ಸರ್ ಪ್ರಕರಣಗಳ ಹೆಚ್ಚಳಕ್ಕೆ ಜೀವನಶೈಲಿಯ ಬದಲಾವಣೆ, ಅನಾರೋಗ್ಯಕರ ಆಹಾರ ಪದ್ಧತಿ ಹಾಗೂ ಪರಿಸರ ಅಂಶಗಳು ಪ್ರಮುಖ ಕಾರಣಗಳಾಗಿವೆ’ ಎಂದು ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ಅರ್ಚನಾ ಕುಲಕರ್ಣಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್.ಸಿ.ಡಿ ಘಟಕ ಹಾಗೂ ಇಂಡಿಯನ್ ಕ್ಯಾನ್ಸರ್ ಸೊಸೈಟಿ-ಕರ್ನಾಟಕ ಸಹಯೋಗದಲ್ಲಿ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಜನಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಮಾತನಾಡಿದರು.
‘ಆರೋಗ್ಯಕರ ಆಹಾರ ಪದ್ಧತಿ ಅನುಸರಿಸುವುದು, ನಿಯಮಿತ ವ್ಯಾಯಾಮ ಮಾಡುವುದನ್ನು ರೂಢಿಸಿಕೊಳ್ಳಬೇಕು. ಮುನ್ನೆಚ್ಚರಿಕೆ ಕ್ರಮಗಳು ಮತ್ತು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚುವ ಮೂಲಕ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು’ ಎಂದು ಹೇಳಿದರು.
ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್ ಕಾರಣಗಳು, ಲಕ್ಷಣಗಳು ಹಾಗೂ ತಪಾಸಣಾ ವಿಧಾನಗಳ ಕುರಿತು ಮಾತನಾಡಿದ ಡಾ.ಗುರುರಾಜ ಕುಲಕರ್ಣಿ, ‘ದೈಹಿಕ ಚಟುವಟಿಕೆಗಳಿಂದ ಕೂಡಿದ ಜೀವನ ಅಳವಡಿಸಿಕೊಂಡರೇ ಬಹುತೇಕ ರೋಗಗಳನ್ನು ನಿಯಂತ್ರಿಸಲು ಸಾಧ್ಯ. ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ಯೋಗ, ನಡಿಗೆ, ಓಟ, ಈಜು ಸೇರಿದಂತೆ ವಿವಿಧ ವ್ಯಾಯಾಮಗಳಲ್ಲಿ ತೊಡಗಿಸಿಕೊಳ್ಳಬೇಕು. ದಿನನಿತ್ಯ ಆರೋಗ್ಯಕರ ಆಹಾರ ಸೇವನೆ ಕ್ಯಾನ್ಸರ್ ಅಪಾಯವನ್ನು ತಗ್ಗಿಸಲು ನೆರವಾಗುತ್ತದೆ’ ಎಂದರು.
ಅಶ್ವಿನಿ ಹಾರ್ಟ್ ಫೌಂಡೇಷನ್ ಮಕ್ಕಳ ತಜ್ಞರಾದ ಡಾ.ಎಲ್.ಎಚ್.ಬಿದರಿ ಹಾಗೂ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಯೋಜನಾ ಅಭಿವೃದ್ಧಿ ಅಧಿಕಾರಿ ಡಾ. ಜಾನ್ ಕಟವಟೆ, ಡಾ. ಮಂಜುನಾಥ ಮಸಳಿ, ಸುರೇಶ್ ಹೊಸಮನಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ. ಕೋಲೂರ, ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿ ಮೋತಿಲಾಲ ಲಮಾಣಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೇಖಾ ದಶವಂತ, ಜಿಲ್ಲಾ ಕಾರ್ಯಕ್ರಮ ಸಂಯೋಜಕ ಡಾ. ಪ್ರೀಯದರ್ಶನಿ ಪಾಟೀಲ ಇದ್ದರು.
Cut-off box - ಜಂತು ಹುಳು ನಿವಾರಣಾ ದಿನಾಚರಣೆ ವಿಜಯಪುರ: ‘ಜಂತುಹುಳು ಬಾಧೆಯಿಂದ ಮಕ್ಕಳಲ್ಲಿ ಅಪೌಷ್ಟಿಕತೆ ರಕ್ತಹೀನತೆ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಕುಂಠಿತವಾಗುವ ಸಾಧ್ಯತೆ ಇರುವುದರಿಂದ 1ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಉಚಿತವಾಗಿ ಜಂತುಹುಳು ನಿವಾರಣೆಯ ‘ಅಲ್ಬೆಂಡೊಜೋಲ್’ ಮಾತ್ರೆ ವಿತರಿಸಲಾಗುತ್ತಿದೆ’ ಎಂದು ಡಾ.ಪರಸುರಾಮ ಹಿಟ್ನಳ್ಳಿ ಅವರು ತಿಳಿಸಿದರು. ನಗರದ ಮಹಾತ್ಮ ಗಾಂಧಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆಯಲ್ಲಿ ಅವರು ಮಾತನಾಡಿದರು. ‘ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪ್ರತಿ ಆರು ತಿಂಗಳಿಗೊಮ್ಮೆ ಈ ಮಾತ್ರೆಯನ್ನು ಕಡ್ಡಾಯವಾಗಿ ಸೇವಿಸಬೇಕು’ ಎಂದು ಹೇಳಿದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕೆ.ಡಿ. ಗುಂಡಬಾವಡಿ ಮಹಾತ್ಮ ಗಾಂಧಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಅಧ್ಯಕ್ಷ ಡಾ.ಮಂಜುನಾಥ ಪೋಳ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ. ಕೋಲೂರ ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿ ಮೊತಿಲಾಲ ಲಮಾಣಿ ನಗರ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎನ್.ಬಿ. ಚೌಧರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.