ADVERTISEMENT

ಸ್ವಾತಂತ್ರ್ಯ ಅಮೃತ ಮಹೋತ್ಸವ ಅನಾವರಣ

ಅಹಿಂಸೆ, ಸತ್ಯಾಗ್ರಹದ ಮೂಲಕ ಬ್ರಿಟಿಷರನ್ನು ಮಣಿಸಿದ ಸ್ವಾತಂತ್ರ್ಯ ಸಂಗ್ರಾಮ ಅದ್ವಿತೀಯ: ಸಚಿವ ಕತ್ತಿ ಶ್ಲಾಘನೆ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2022, 11:15 IST
Last Updated 15 ಆಗಸ್ಟ್ 2022, 11:15 IST
ವಿಜಯಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಏರ್ಪಡಿಸಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಅವರು ಪೊಲೀಸ್‌ ಸಿಬ್ಬಂದಿಯಿಂದ ಗೌರವ ವಂದನೆ ಸ್ವೀಕರಿಸಿದರು –ಪ್ರಜಾವಾಣಿ ಚಿತ್ರ
ವಿಜಯಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಏರ್ಪಡಿಸಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಅವರು ಪೊಲೀಸ್‌ ಸಿಬ್ಬಂದಿಯಿಂದ ಗೌರವ ವಂದನೆ ಸ್ವೀಕರಿಸಿದರು –ಪ್ರಜಾವಾಣಿ ಚಿತ್ರ   

ವಿಜಯಪುರ: 'ಗುಮ್ಮಟನಗರಿ' ವಿಜಯಪುರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸ್ವಾತಂತ್ರ್ಯ ಅಮೃತ ಮಹೋತ್ಸವನ್ನು ಸಡಗರ, ಸಂಭ್ರಮದಿಂದ ಸೋಮವಾರ ಅಚರಿಸಲಾಯಿತು.

ಜಿಟಿಜಿಟಿ ಮಳೆ, ದಟ್ಟ ಮೋಡ ಕವಿದ ವಾತಾವರಣದ ನಡುವೆಯೂ ಶಾಲೆ, ಕಾಲೇಜು, ಸರ್ಕಾರಿ ಕಚೇರಿ, ಕೋರ್ಟ್, ಸಂಘ, ಸಂಸ್ಥೆಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ದೇಶಭಕ್ತಿ ಮೆರೆಯಲಾಯಿತು. ಆಕರ್ಷಿಕ ಪಥಸಂಚಲನ, ಕವಾಯತು, ದೇಶಭಕ್ತಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೆಳೆದವು.

ಕತ್ತಿ ಧ್ವಜಾರೋಹಣ:

ADVERTISEMENT

ವಿಜಯಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಏರ್ಪಡಿಸಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಧ್ವಜಾರೋಹಣ ನೆರವೇರಿಸಿದರು.

ಸ್ವಾತಂತ್ರೋತ್ಸವ ಸಂದೇಶ ನೀಡಿದ ಸಚಿವ ಕತ್ತಿ, ಜಾತಿ,ಮತ,ಧರ್ಮಗಳ ಬೇಧ ಮರೆತು, ನಿಸ್ವಾರ್ಥ ಮನೋಭಾವದಿಂದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ, ತ್ಯಾಗ, ಬಲಿದಾನ ಮಾಡಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟ ಎಲ್ಲ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸೋಣ ಮತ್ತು ನಮನ ಸಲ್ಲಿಸೋಣ ಎಂದರು.

ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ಅಹಿಂಸೆ, ಸತ್ಯಾಗ್ರಹಗಳ ಮೂಲಕ ಬ್ರಿಟಿಷರನ್ನು ಮಣಿಸಿದ ಸ್ವಾತಂತ್ರ್ಯ ಸಂಗ್ರಾಮ ಅದ್ವಿತೀಯ ಸಂಗತಿಯಾಗಿದೆ ಎಂದರು.

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದ ಕರ್ನಾಟಕದ ಹಾಗೂ ವಿಜಯಪುರದ ಹೋರಾಟಗಾರರನ್ನು ಸಚಿವರು ಸ್ಮರಿಸಿದರು.

ಜಾತ್ಯತೀತ ನೆಲೆಗಟ್ಟಿನ ಮೇಲೆ ನಿಂತಿರುವ ನಮ್ಮ ದೇಶದ ಸಾಮಾಜಿಕ, ಆರ್ಥಿಕ, ರಾಜಕೀಯ, ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ ಹಾಗೂ ರಕ್ಷಣಾ ವಲಯಗಳ ನೀತಿ, ಸಿದ್ದಾಂತಗಳನ್ನು ಮತ್ತು ತತ್ವ ಆದರ್ಶಗಳನ್ನು ನಿರಂತರವಾಗಿ ಎತ್ತಿ ಹಿಡಿಯಲು ನಾವೆಲ್ಲರೂ ಕಂಕಣಬದ್ಧರಾಗಿ ದುಡಿಯೋನ ಎಂದರು.

ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರಿಗೆ, ಮಾಜಿ ಸೈನಿಕರಿಗೆ, ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಜಿಲ್ಲೆಯ ವಿವಿಧ ಕ್ಷೇತ್ರದ ಸಾಧಕರಿಗೆ ಸಚಿವರು ಸನ್ಮಾನಿಸಿದರು.

ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳು ಆಕರ್ಷಕ ಕವಾಯತು, ದೇಶಭಕ್ತಿ ಗೀತೆಗಳಿಗೆ ನೃತ್ಯ, ಕರಾಟೆ, ಮಲ್ಲಕಂಬ ಸಾಹಸಗಳನ್ನು ಪ್ರದರ್ಶಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸಂಸದ ರಮೇಶ ಜಿಗಜಿಣಗಿ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾಧಿಕಾರಿ ವಿಜಯ ಮಹಾಂತೇಶ, ಜಿಲ್ಲಾ ಪಂಚಾಯ್ತಿ ಸಿಇಒ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಇದ್ದರು.

‘ಸ್ವಾತಂತ್ರ್ಯ ತಂದವರು ಕಾಂಗ್ರೆಸ್‌, ಬಿಜೆಪಿಯವರಲ್ಲ’

ವಿಜಯಪುರ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹೋರಾಡಿದವರು ಈಗಿನ ಕಾಂಗ್ರೆಸ್‌ ಅಥವಾ ಬಿಜೆಪಿಯವರಲ್ಲ. ತ್ಯಾಗ, ಬಲಿದಾನ ಮಾಡಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು ಯಾರು ಎಂಬುದು ಜನರಿಗೆ ಗೊತ್ತಿದೆ ಎಂದು ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಮಾಡಲು ಕೆಲಸ ಇಲ್ಲದವರು ಸ್ವಾತಂತ್ರ್ಯ ತಂದಕೊಟ್ಟವರೇ ನಾವು ಎಂಬಂತೆ ಮಾತನಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಆಲಮಟ್ಟಿ ಜಲಾಶಯ ವ್ಯಾಪ್ತಿಯಲ್ಲಿ ನೂರಕ್ಕೂ ಹೆಚ್ಚು ಪ್ರಬೇಧದ ಪಕ್ಷಿಗಳು ಪ್ರತಿ ವರ್ಷ ದೇಶ, ವಿದೇಶಗಳಿಂದ ಬರುತ್ತಿರುವುದರಿಂದ ಪಕ್ಷಿಧಾಮ ಮಾಡಲು ಇಲಾಖೆಯಿಂದ ಸರ್ವೇ ಕಾರ್ಯ ನಡೆದಿದೆ ಎಂದರು.

‌ಪ್ರತಿ ಜಿಲ್ಲೆಯಲ್ಲೊಂದು ಪ್ರಾಣಿ ಸಂಗ್ರಾಹಲಯ ಸ್ಥಾಪಿಸುವ ಉದ್ದೇಶವಿದ್ದು, ಅದೇ ರೀತಿ ವಿಜಯಪುರ, ಬಾಗಲಕೋಟೆಯಲ್ಲೂ ಆರಂಭಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.