ADVERTISEMENT

ವಿಜಯಪುರ: ಸ್ವಾತಂತ್ರ್ಯ ದಿನ ಸರಳ ಆಚರಣೆಗೆ ಡಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 12:00 IST
Last Updated 4 ಆಗಸ್ಟ್ 2021, 12:00 IST
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸ್ವಾತಂತ್ರ್ಯ ದಿನ‌ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸ್ವಾತಂತ್ರ್ಯ ದಿನ‌ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು   

ವಿಜಯಪುರ: ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನವನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದುಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ್‌ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸ್ವಾತಂತ್ರ್ಯ ದಿನ‌ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಪಟ್ಟಂತೆ ಅವಶ್ಯಕ ಸಿದ್ಧತೆಯನ್ನು ಅಧಿಕಾರಿಗಳು ಮಾಡಿಕೊಳ್ಳಬೇಕು ಎಂದರು.

ADVERTISEMENT

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನ ಆಚರಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಈ ವರ್ಷ ವಿಶ್ವವಿದ್ಯಾನಿಲಯದ ಬದಲು ಬೇರೆ ಕಡೆಯಲ್ಲಿ ಸ್ವಾತಂತ್ರ್ಯ ದಿನ ಆಚರಿಸುವ ಬಗ್ಗೆ ಮುಖಂಡರಾದ ಅಡಿವೆಪ್ಪ ಸಾಲಗಲ್ ಕೋರಿದ್ದು, ಈ ಕುರಿತು ಪರಿಶೀಲಿಸುವುದಾಗಿ ಹಾಗೂ ಇದರ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ನಗರದ ವಿವಿಧಕಡೆ ಸ್ವಚ್ಛತೆ, ವೃತ್ತಗಳಿಗೆ ದೀಪಾಲಂಕಾರ, ನಗರ ಹಾಗೂ ವಿವಿಧ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರ ಧ್ವಜಾರೋಹಣ ಹಾಗೂ ಇತರ ಸಿಧ್ಧತೆ ಅಚ್ಚುಕಟ್ಟಾಗಿ ಮಾಡಬೇಕು. ಯಾವುದೇ ಲೋಪಕ್ಕೆ ಅವಕಾಶ ನೀಡಬಾರದು ಎಂದು ಸೂಚಿಸಿದರು.

ಕೋವಿಡ್ ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕ್ರೀಡಾಂಗಣದ ಪ್ರವೇಶದ್ವಾರದಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಿಕೊಳ್ಳಬೇಕು ಹಾಗೂ ಪರಸ್ಪರ ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಪರಸ್ಪರ ಅಂತರದಲ್ಲಿ ಆಸನದ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಉಪ ವಿಭಾಗಾಧಿಕಾರಿ ಬಲರಾಮ ಲಮಾಣಿ , ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ್ ಕಳಸದ ಸಭೆಯಲ್ಲಿಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.