ಇಂಡಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ 15 ದಿನಗಳಿಂದ ಹಲವು ಮಕ್ಕಳಲ್ಲಿ ತೀವ್ರ ಜ್ವರ ಕಾಣಿಸಿಕೊಂಡಿದೆ.
ಬೆಂಬಿಡದ ಮಳೆ, ಮೋಡ, ಮುಸುಕಿದ ವಾತಾವರಣ, ತಂಪು ಗಾಳಿ, ಸೇರಿ ಹವಾಮಾನ ವೈಪರೀತ್ಯದಿಂದ 10 ವರ್ಷದೊಳಗಿನ ಮಕ್ಕಳಿಗೆ ನೆಗಡಿ, ಕೆಮ್ಮು, ಜ್ವರ, ಶೀತ ಜ್ವರ, ತಲೆನೋವು, ವಾಂತಿ ಬೇಧಿ ಕಾಣಿಸಿಕೊಂಡಿದೆ. ಅವರಿಗೆ ಚಿಕಿತ್ಸೆ ಕೊಡಿಸಲು ಪಾಲಕರು ಆಸ್ಪತ್ರೆಯಿಂದ ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ. ಚಿಕಿತ್ಸೆ ಕೊಡಿಸುವಲ್ಲಿ ಪಾಲಕರು ಹೈರಾಣಾಗಿದ್ದಾರೆ.
ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿರುವ ಒಬ್ಬರೇ ಚಿಕ್ಕ ಮಕ್ಕಳ ತಜ್ಞರು ನಿತ್ಯ 180 ರಿಂದ 200 ಮಕ್ಕಳ ತಪಾಸಣೆ ಮಾಡುತ್ತಿದ್ದಾರೆ. ಖಾಸಗಿ ಆಸ್ಪತ್ರೆಯ ವೈದ್ಯರೂ ಸಾಕಷ್ಟು ಸಂಖ್ಯೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಚಿಕಿತ್ಸೆಗೆ ದಾಖಲಾಗುವ ಮಕ್ಕಳಿಗೆ ಮಲಗಲು ಸರ್ಕಾರಿ ಆಸ್ಪತ್ರೆಯಲ್ಲಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲೂ ಬೆಡ್ ಗಳ ಕೊರತೆ ಕಾಡುತ್ತಿದೆ. ಒಂದು ಬೆಡ್ ನಲ್ಲಿ ಎರಡು ಮೂರು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳ ವರಾಂಡದಲ್ಲಿ ಮಕ್ಕಳನ್ನು ಮಡಿಲಲ್ಲಿ ಹಾಕಿಕೊಂಡು ಸಂತೈಸುವ ತಾಯಂದಿರ ದೃಶ್ಯಗಳು ಸಾಮಾನ್ಯವಾಗಿವೆ. ಬೆಡ್ ಗಳು ಇಲ್ಲದ್ದರಿಂದ ತೀರ್ವ ಅನಿವಾರ್ಯತೆ ಇದ್ದಲ್ಲಿ ಮಾತ್ರ ಆಡ್ಮಿಟ್ ಮಾಡಿಕೊಳ್ಳಲಾಗುತ್ತಿದೆ ಎಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದರು.
ಚಿಕ್ಕ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಜ್ವರ, ನೆಗಡಿ, ಕೆಮ್ಮು, ವಾಂತಿ ಸೇರಿ ಕೆಲವರಲ್ಲಿ ನ್ಯೂಮೋನಿಯಾ ಲಕ್ಷಣ ಕಾಣಿಸಿಕೊಳ್ಳುತ್ತಿವೆ. ಪಾಲಕರು ತಮ್ಮ ಮಕ್ಕಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಇಂಡಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಚಿಕ್ಕ ಮಕ್ಕಳ ತಜ್ಞ ಡಾ. ವಿಪುಲ್ ಕೋಳೆಕರ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.