ADVERTISEMENT

ಸಂವಿಧಾನ ಭಾರತೀಯರ ಧ್ವನಿ–ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ್ವರ ಬಬಲೇಶ್ವರ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2025, 5:34 IST
Last Updated 27 ನವೆಂಬರ್ 2025, 5:34 IST
ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ  ಮಂಗಳವಾರ ನಡೆದ ಸಂವಿಧಾನ ದಿನಾಚರಣೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹಾಗೂ ಸಂವಿಧಾನ ಪ್ರಸ್ತಾವನೆಗೆ ಗಣ್ಯರು ಪುಷ್ಪಾರ್ಚನೆ ಮಾಡಿದರು
ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ  ಮಂಗಳವಾರ ನಡೆದ ಸಂವಿಧಾನ ದಿನಾಚರಣೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹಾಗೂ ಸಂವಿಧಾನ ಪ್ರಸ್ತಾವನೆಗೆ ಗಣ್ಯರು ಪುಷ್ಪಾರ್ಚನೆ ಮಾಡಿದರು   

ವಿಜಯಪುರ: ಡಾ.ಬಿ.ಆರ್. ಅಂಬೇಡ್ಕರ್ ರಚಿಸಿರುವ ನಮ್ಮ ಸಂವಿಧಾನವು ಬಡವರ, ಮಹಿಳೆಯರ, ಶೋಷಿತರು ಸೇರಿದಂತೆ ಭಾರತೀಯರೆಲ್ಲರ ಧ್ವನಿಯಾಗಿದೆ ಎಂದು ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ್ವರ ಬಬಲೇಶ್ವರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಮಂಗಳವಾರ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹಾಗೂ ಸಂವಿಧಾನ ಪ್ರಸ್ತಾವನೆಗೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿ, ಸರ್ವರಿಗೂ ಸಮಾನತೆ ಒದಗಿಸಿದೆ. ನಾವೆಲ್ಲರೂ ಘನತೆ ಗೌರವದಿಂದ ಬದುಕುವ ಹಕ್ಕನ್ನು ಕಲ್ಪಿಸಿ, ಎಲ್ಲರ ಬಾಳಿನ ಬೆಳಕಾಗಿದೆ. ನಮ್ಮ ಸಂವಿಧಾನದ ಆಶಯಗಳ ಕುರಿತು ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ತಿಳಿಸಿಕೊಡಬೇಕು ಎಂದರು.

ADVERTISEMENT

ಜಿಲ್ಲಾಧಿಕಾರಿ ಡಾ.ಆನಂದ.ಕೆ ಮಾತನಾಡಿ, ನಮ್ಮ ಸಂವಿಧಾನ ಇಡೀ ವಿಶ್ವದಲ್ಲಿಯೇ ದೊಡ್ಡ ಸಂವಿಧಾನವಾಗಿದೆ.   ಎಲ್ಲರ ಸದಾಶಯ ಹೊಂದಿದ ಬದುಕಿನ ದಾಖಲೆಯಾಗಿದೆ. ಜಾರಿಗೊಳಿಸುವ ಯಾವುದೇ ಕಾನೂನುಗಳು ಸಂವಿಧಾನದ ಆಶಯಗಳಿಗನುಗುಣವಾಗಿ ರೂಪುಗೊಳ್ಳುತ್ತವೆ. ಸಂವಿಧಾನದ ಪ್ರಸ್ತಾವನೆಯಲ್ಲಿ ಗೌರವದಿಂದ ಬದುಕಲು ಎಲ್ಲರಿಗೂ ಕಾನೂನುಬದ್ಧವಾಗಿ ಹೇಳಲು ಅವಕಾಶ ನೀಡಿದೆ. ಅವಕಾಶಗಳ ಸಮಾನತೆಯನ್ನು ತಂದುಕೊಟ್ಟಿದೆ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿ, ಸಂವಿಧಾನ ಈ ನೆಲದ ಕಾನೂನಾಗಿದೆ. ಅದು ಶ್ರೇಷ್ಠ ಪುಸ್ತಕ. ನಮ್ಮೆಲ್ಲರನ್ನೂ ಒಂದುಗೂಡಿಸಿದೆ ಎಂದು ಹೇಳಿದರು.

ಉಪನ್ಯಾಸ ನೀಡಿದ ಹೈಕೋರ್ಟ್ ವಕೀಲರಾದ ರಾಜಲಕ್ಷ್ಮಿ ಅಂಕಲಗಿ,  ಸಂವಿಧಾನವು ದೇಶದ ಕಟ್ಟಕಡೆಯ ವ್ಯಕ್ತಿಯೂ ಘನತೆಯಿಂದ ಬದುಕುವ ಅವಕಾಶ ಕಲ್ಪಿಸಿಕೊಟ್ಟಿದೆ ಎಂದು ಹೇಳಿದರು. 

ಪ್ರಮಾಣಪತ್ರ ವಿತರಣೆ: ಸಂವಿಧಾನ ದಿನಾಚರಣೆ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ರಸಪ್ರಶ್ನೆ, ಪ್ರಬಂಧ ಸ್ಪರ್ಧೆ, ಚರ್ಚಾಸ್ಪರ್ಧೆ, ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಪಾಲಿಕೆ ಉಪ ಆಯುಕ್ತ ಮಹಾವೀರ ಬೊರಣ್ಣವರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಕೆ.ಹೊಸಮನಿ, ನೌಕರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ, ಕಾರ್ಮಿಕ ಇಲಾಖೆಯ ಅಧಿಕಾರಿ ಉಮಾಶ್ರೀ ಕೋಳಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲಿಕ ಮಾನವರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ ಉಪಸ್ಥಿತರಿದ್ದರು. 

ಸಮಾಜದಲ್ಲಿ ನಾವೆಲ್ಲರೂ ಸಮಾನರು ತಾರತಮ್ಯ ಬೇಧ-ಭಾವ ತೊರೆದು ಎಲ್ಲರೂ ಸಮಾನರೆಂಬುದು ಸಂವಿಧಾನ ತಿಳಿಸುತ್ತದೆ. ನಮ್ಮ ಸಂವಿಧಾನದ ಆಶಯಗಳಿಗನುಗುಣವಾಗಿ ನಡೆಯೋಣ.
ಸಂಗಮೇಶ್ವರ ಬಬಲೇಶ್ವರಅಧ್ಯಕ್ಷಬಾಲ ವಿಕಾಸ ಅಕಾಡೆಮಿ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.