ನಾಲತವಾಡ: ‘ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಶೀಘ್ರದಲ್ಲೆ ಉದ್ಘಾಟನೆಯಾಗಲಿದೆ’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಈರಣ್ಣ ಕೊಣ್ಣೂರ ಹೇಳಿದರು.
ಪಟ್ಟಣದ ಬಸ್ ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಮಂಗಳವಾರ ಪಟ್ಟಣ ಪಂಚಾಯಿತಿ ಸಿಬ್ಬಂದಿಯೊಂದಿಗೆ ಭೇಟಿ ನೀಡಿ, ಸಾರ್ವಜನಿಕರಿಗೆ ನೀಡುವ ಉಪಾಹಾರ ಹಾಗೂ ಊಟದ ಮಾಹಿತಿ, ಶುಚಿತ್ವ ಕುರಿತು ಮಾತನಾಡಿದರು.
‘ಕಡಿಮೆ ದರದಲ್ಲಿ ಜನರ ಹಸಿವು ನೀಗಿಸುವ ನಿಟ್ಟಿನಲ್ಲಿ, ಶಾಸಕ ಸಿ.ಎಸ್. ನಾಡಗೌಡ ಅವರ ಆಸಕ್ತಿ ಮತ್ತು ಆಶಯದಿಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಬೇಕಾದ ಸಿದ್ಧತೆಗಳು ಈಗಾಗಲೇ ಪೂರ್ಣಗೊಂಡಿವೆ’ ಎಂದು ತಿಳಿಸಿದರು.
‘ಇಂದಿರಾ ಕ್ಯಾಂಟೀನ್ ಸುತ್ತಮುತ್ತಲೂ ಸ್ವಚ್ಛತೆಗೆ ಆದ್ಯತೆ ನೀಡಲು ಸಾರಿಗೆ ಘಟಕ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಜಂಟಿಯಾಗಿ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ವಿಜಯಪುರ ಜಿಲ್ಲೆ ದಲಿತ ಸಂಘರ್ಷ ಸಮಿತಿ ಸಂಯೋಜಕ ಮಂಜುನಾಥ ಕಟ್ಟಿಮನಿ ಒತ್ತಾಯಿಸಿದರು.
"ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಅಡುಗೆ ಕೊಠಡಿಗಳಲ್ಲಿ ಸಾಮಗ್ರಿಗಳ ಅಳವಡಿಕೆ ಕಾರ್ಯ ನಡೆದಿದೆ. ಕೆಲವೇ ದಿನಗಳಲ್ಲಿ ಇಂದಿರಾ ಕ್ಯಾಂಟೀನ್ ಸಾರ್ವಜನಿಕರಿಗೆ ಮುಕ್ತವಾಗಲಿದೆ. ಇತ್ತ ಕ್ಯಾಂಟೀನ್ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಲು ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಪಟ್ಟಣ ಪಂಚಾಯಿತಿ ಎಂಜಿನಿಯರ್ ವೀರೇಶ ದೊಡಮನಿ ಹೇಳಿದರು.
ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಹಣಮಂತ ಕುರಿ, ವೀರೇಶ ದೊಡಮನಿ, ಪ್ರಕಾಶ ಸಜ್ಜನ, ಅಲ್ತಾಫ್ ಮೂಲಿಮನಿ, ವೀರೇಶ ತಂಗಡಗಿ, ಸಿದ್ದಲಿಂಗ ಪೂಜಾರಿ, ಸದ್ದಾಮ್ ತಂಗಡಿ, ರಜಿಬಸಾಬ ಮಲಗಲದಿನ್ನಿ, ಇಮಾಮಸಾಬ ತಂಗಡಗಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.