ವಿಜಯಪುರ: ಬಬಲೇಶ್ವರ ತಾಲ್ಲೂಕಿನ ನಿಡೋಣಿ ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್ ಬುಧವಾರ ಭೇಟಿ ನೀಡಿ, ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣವಾದ ಎನ್.ಆರ್.ಎಲ್.ಎಂ ಸಂಜೀವಿನಿ ಶೆಡ್ ಕಟ್ಟಡ ಹಾಗೂ ನೂತನ ಗ್ರಾಮ ಪಂಚಾಯಿತಿ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಂಥಾಲಯ ಪೂರ್ಣಗೊಂಡ ತಕ್ಷಣವೇ ಅಗತ್ಯ ಮೂಲ ಸೌಕರ್ಯಗಳ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.
ಗ್ರಂಥಾಲಯಗಳಲ್ಲಿ ಬರುವ ವಿದ್ಯಾರ್ಥಿಗಳು ಹಾಗೂ ಓದುಗರಿಗೆ ಅನುಕೂಲವಾಗುವಂತೆ ಐಎಎಸ್, ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹಾಯಕವಾಗುವ ಪುಸ್ತಕಗಳನ್ನು ಖರೀದಿಸಿ ಇರಿಸಬೇಕು. ಗ್ರಂಥಾಲಯಕ್ಕೆ ಉತ್ತಮ ಗುಣಮಟ್ಟದ ಮತ್ತು ಆಕರ್ಷಕ ಪೇಂಟಿಂಗ್ ಮಾಡಿಸಬೇಕು ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮದ ಮುಖ್ಯ ರಸ್ತೆಗೆ ಗ್ರಂಥಾಲಯದ ನಾಮಫಲಕವನ್ನು ಅಳವಡಿಸಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.
ಬೆಂಚ್ ವಿತರಣೆ:
ನಿಡೋಣಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕುರ್ಚಿ ಮತ್ತು ಬೆಂಚ್ ವಿತರಿಸಿದ ರಿಷಿ ಆನಂದ್, ಮಕ್ಕಳೊಂದಿಗೆ ಸಂವಾದ ನಡೆಸಿ ಕೇಂದ್ರದಲ್ಲಿ ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರ ವಿತರಣೆ, ಆಟ, ಪಾಠ ಯೋಗಕ್ಷೇಮ ಕುರಿತು ವಿಚಾರಿಸಿದರು.
ಮಕ್ಕಳಿಗೆ ವಿತರಣೆ ಮಾಡಿದ ಪೀಠೋಪಕರಣಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಅಂಗನವಾಡಿ ಕೇಂದ್ರದ ಸುತ್ತ - ಮುತ್ತಲಿನ ಪರಿಸರವನ್ನು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಮಕ್ಕಳ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕು, ಮಕ್ಕಳ ಕಲಿಕಾ ಸಾಮರ್ಥ್ಯ ಗುಣಮಟ್ಟ ಹೆಚ್ಛಳವಾಗುವಂತೆ ಕಲಿಕೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ಕೇಂದ್ರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ ಹಾಗೂ ಶೌಚಾಲಯ ಸೌಕರ್ಯ ಕಲ್ಪಿಸುವುದು ಮತ್ತು ಮಕ್ಕಳಿಗೆ ಸಮಯಾನುಸಾರ ಪೌಷ್ಠಿಕ ಆಹಾರ ವಿತರಣೆಗೆ ಕ್ರಮವಹಿಸಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜೆ. ಎಸ್. ಪಠಾಣ, ಸಹಾಯಕ ನಿರ್ದೇಶಕ ವಿ. ಎಸ್. ಹಿರೇಮಠ, ವೈದ್ಯಾಧಿಕಾರಿ ಡಾ. ಶೀತಲ ಕಿನಗಿ, ತಾಲ್ಲೂಕು ಯೋಜಾನಾಧಿಕಾರಿ ಎಸ್ ಬಿ. ಪಾಟೀಲ, ನಿಡೋಣಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ. ಎಚ್. ಮುಜಾವರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್. ಎಸ್. ಮ್ಯಾಗೇರಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.