ADVERTISEMENT

ವಿಜಯಪುರ: ರಾಷ್ಟ್ರಧ್ವಜಕ್ಕೆ ಅಪಮಾನ; ಕ್ರಮಕ್ಕೆ ಆಗ್ರಹ

ದಲಿತ ವಿದ್ಯಾರ್ಥಿ ಪರಿಷತ್ತಿನಿಂದ ಜಿಲ್ಲಾಧಿಕಾರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 28 ಜನವರಿ 2026, 7:26 IST
Last Updated 28 ಜನವರಿ 2026, 7:26 IST
ವಿಜಯಪುರ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್ ಅವರಿಗೆ ದಲಿತ ವಿದ್ಯಾರ್ಥಿ ಪರಿಷತ್ತಿನಿಂದ ಮಂಗಳವಾರ ಮನವಿ ಸಲ್ಲಿಸಲಾಯಿತು
ವಿಜಯಪುರ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್ ಅವರಿಗೆ ದಲಿತ ವಿದ್ಯಾರ್ಥಿ ಪರಿಷತ್ತಿನಿಂದ ಮಂಗಳವಾರ ಮನವಿ ಸಲ್ಲಿಸಲಾಯಿತು   

ವಿಜಯಪುರ: ‘ಭಾರತ ಎಂದರೆ ಕೇವಲ ಸಂವಿಧಾನವಲ್ಲ, ರಾಷ್ಟ್ರಧ್ವಜವಲ್ಲ, ಅಂಬೇಡ್ಕರ್ ಅಲ್ಲ’ ಎಂದು ಆಕ್ಷೇಪಾರ್ಹ, ಅವಹೇಳನಕಾರಿ ಹೇಳಿಕೆ ನೀಡಿರುವ ಸಂಘ ಪರಿವಾರದ ಮುಖಂಡ ಹಣಮಂತ ಮಳಲಿ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ತಿನಿಂದ ಜಿಲ್ಲಾಧಿಕಾರಿ ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

‘ನಗರದ ಜಲನಗರದ ಬಿಡಿಎ ಮೈದಾನದಲ್ಲಿ ಇತ್ತೀಚೆಗೆ ನಡೆದ ಹಿಂದೂ ಸಮ್ಮೇಳನದಲ್ಲಿ ದೇಶದ ಸಂವಿಧಾನ, ರಾಷ್ಟ್ರಧ್ವಜ ಹಾಗೂ ಈ ದೇಶದ ಮಹಾನ್ ನಾಯಕ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡುವ ಮೂಲಕ ದೇಶದ ಏಕತೆ, ಅಖಂಡತೆಗೆ ಧಕ್ಕೆ ತಂದಿರುವ ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಡಿ.ವಿ.ಪಿ ಜಿಲ್ಲಾ ಸಂಚಾಲಕ ಅಕ್ಷಯಕುಮಾರ್ ಅಜಮನಿ ಮಾತನಾಡಿ, ‘ಸಂವಿಧಾನ, ಅಂಬೇಡ್ಕರ್ ಹಾಗೂ ರಾಷ್ಟ್ರಧ್ವಜಕ್ಕೆ ಅಗೌರವದ ಮಾತುಗಳನ್ನು ಆಡುವ ಮೂಲಕ ಸಮಸ್ತ ದೇಶದ ಜನತೆಗೆ, ವಿಶೇಷವಾಗಿ ಅಂಬೇಡ್ಕರ್ ಅನುಯಾಯಿಗಳಿಗೆ ತೀವ್ರ ನೋವು ಉಂಟು ಮಾಡಿದ್ದಾರೆ. ಉದ್ದೇಶ ಪೂರ್ವಕವಾಗಿ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಹಾಳುಮಾಡುವ ಪ್ರಯತ್ನ ಮಾಡಿರುವುದು ಗಂಭೀರ ಅಪರಾಧವಾಗಿದೆ’ ಎಂದು ಆರೋಪಿಸಿದರು.

ADVERTISEMENT

‘ಸಮ್ಮೇಳನ ಜವಾಬ್ದಾರಿ ವಹಿಸಿಕೊಂಡವರು ಹಾಗೂ ದೇಶಕ್ಕೆ ಮತ್ತು ದೇಶದ ಮಹಾನ್ ನಾಯಕರಿಗೆ ಅಪಮಾನವಾಗುವ ರೀತಿಯಲ್ಲಿ ಭಾಷಣ ಮಾಡಿದವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.

‘ಜಿಲ್ಲಾಡಳಿತ ಈ ವಿಚಾರದಲ್ಲಿ ತಕ್ಷಣ ಗಮನಹರಿಸಿ, ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಜಿಲ್ಲೆಯ ಪ್ರಗತಿಪರ, ದಲಿತ, ಕನ್ನಡಪರ, ರೈತ, ಕಾರ್ಮಿಕ, ವಿದ್ಯಾರ್ಥಿ ಹಾಗೂ ಯುವಜನಪರ ಎಲ್ಲ ಸಂಘಟನೆಗಳ ನೇತೃತ್ವದಲ್ಲಿ ವ್ಯಾಪಕ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ದಲಿತ ಮುಖಂಡ ಅಡಿವೆಪ್ಪ ಸಾಲಗಲ್ಲ, ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಶ್ರೀನಾಥ ಪೂಜಾರಿ, ಮುಖಂಡರಾದ ಮಾದೇಶ ಚಲವಾದಿ, ಪ್ರತಾಪ, ಸಿದ್ದು, ಮಹಾಂತೇಶ್, ಹುಚ್ಚಪ್ಪ, ಸಿದ್ದಾರ್ಥ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.