ವಿಜಯಪುರ: ಪ್ರವಾದಿ ಮಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪ್ರಕರಣ ದಾಖಲಾಗಿದೆ.
‘ಏಪ್ರಿಲ್ 7ರಂದು ಹುಬ್ಬಳ್ಳಿಯ ಬಾನಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಅವರ ಬಗ್ಗೆ ಯತ್ನಾಳ ಪ್ರಚೋದನಕಾರಿ, ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿ ಮಹಮ್ಮದ್ ಹನ್ನಾನ್ ಎಂಬುವರು ವಿಜಯಪುರದ ಗೋಳಗುಮ್ಮಟ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
'ಬಾಳಾ ಸಾಬ್ ಠಾಕ್ರೆ ಮನೆಯಲ್ಲಿ ಮಹಮ್ಮದ್ ಪೈಗಂಬರ್ ಹುಟ್ಟಿದ್ದಾನೆ’ ಎಂಬ ಹೇಳಿಕೆಯನ್ನು ಯತ್ನಾಳ ನೀಡಿದ್ದು, ಇದು ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತ ಉಂಟು ಮಾಡಿದೆ. ಈ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ಉಂಟಾಗುವ ಸಾಧ್ಯತೆ ಇದೆ’ ಎಂದು ದೂರುದಾರರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.