ಮುದ್ದೇಬಿಹಾಳ: ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ ಜೆಡಿಎಸ್ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿತು.
ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಾಗಿ ತಹಶೀಲ್ದಾರ್ ಕಚೇರಿಗೆ ಆಗಮಿಸಿತು.
ಪಕ್ಷದ ಮುಖಂಡ ಬಸನಗೌಡ ಪಾಟೀಲ ಹಿರೇಮುರಾಳ ಮಾತನಾಡಿ, ಕಾಂಗ್ರೆಸ್ ಸರ್ಕಾರ ದುರಾಡಳಿತದಲ್ಲಿ ತೊಡಗಿದೆ. ದೈನಂದಿನ ವಸ್ತುಗಳ ಬೆಲೆ ಗಗನಕ್ಕೇರಿದ್ದು ಪ್ರತಿಯೊಂದಕ್ಕೂ ಲಂಚ ಕೊಡಬೇಕಾಗಿದೆ. ನೀರಾವರಿಗಾಗಿ ಒಂದು ನಯಾಪೈಸೆ ಅನುದಾನ ಈ ಸರ್ಕಾರದಿಂದ ಕೊಡಲು ಸಾಧ್ಯವಾಗಿಲ್ಲ ಎಂದು ದೂರಿದರು.
ಪಕ್ಷದ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ ಮಾತನಾಡಿ, ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಹೆಸರಿನ ಮೇಲೆ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ. ವಸತಿ ಹಗರಣ, ವಾಲ್ಮೀಕಿ ನಿಗಮದಲ್ಲಿ ಹಗರಣ, ಅಬಕಾರಿ ಇಲಾಖೆಯಲ್ಲಿ ಹಗರಣ ಸೇರಿದಂತೆ ಹಲವು ಹಗರಣಗಳಲ್ಲಿ ಸಿಲುಕಿ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೆ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ತಾಲ್ಲೂಕು ಅಧ್ಯಕ್ಷ ಪವಾಡೆಪ್ಪ ಹವಾಲ್ದಾರ ಮಾತನಾಡಿದರು. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸೆಯ್ಯದ ಸಾತಿಹಾಳ, ಕಾರ್ಯದರ್ಶಿ ಅಜರುದ್ದೀನ್ ಮುಲ್ಲಾ, ಜಿಲ್ಲಾ ಉಪಾಧ್ಯಕ್ಷ ಬಸವಂತ್ರಾಯ ದೇಸಾಯಿ, ಲಾಳೇಮಶ್ಯಾಕ ನಾಯ್ಕೋಡಿ(ಬುಡ್ಡಾ), ತಾಲೂಕಾ ಪ್ರಧಾನ ಕಾರ್ಯದರ್ಶಿ ಮೋತಿಲಾಲ ಮ್ಯಾಗೇರಿ, ತಾಲೂಕಾ ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಬ್ದುಲ್‌ಮಜೀದ್ ಶಿರೋಳ, ಅನ್ವರಸಾಬ ಟಕ್ಕಳಕಿ, ತಾಲೂಕಾ ಕಾರ್ಯದರ್ಶಿ ಅಶೋಕ ಅಮರಣ್ಣವರ, ಸಂಗಣ್ಣ ದೇಸಾಯಿ (ಬಳಗಾನೂರ), ಶರಣಗೌಡ ಪಾಟೀಲ ಪಾಲ್ಗೊಂಡಿದ್ದರು. ರಾಜ್ಯಪಾಲರಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.