ವಿಜಯಪುರ: ಕನ್ನಡ ಭಾಷೆ, ಸಾಹಿತ್ಯ, ನೆಲ, ಜಲ, ಸಂಸ್ಕೃತಿಗಳ ಸಂವರ್ಧನೆ, ಸಂರಕ್ಷಣೆಯ ಉದ್ದೇಶದಿಂದ ಹುಟ್ಟಿಕೊಂಡ ಕನ್ನಡ ಸಾಹಿತ್ಯ ಪರಿಷತ್ತು 111ನೇ ಸಂಸ್ಥಾಪನಾ ದಿನ ಆಚರಿಸಿಕೊಳ್ಳುವ ಮೂಲಕ ಕನ್ನಡ ನಾಡು ನುಡಿಯ ಪ್ರೇರಕ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಬಸವನಬಾಗೇವಾಡಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿ.ಬಿ.ಮರ್ತೂರ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಸೋಮವಾರ ನಡೆದ ‘ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆ’ಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ, ಸರ್ ಎಂ.ವಿಶ್ವೇಶ್ವರಯ್ಯ ಹಾಗೂ ಸರ್ ಮಿರ್ಜಾ ಇಸ್ಲಾಯಿಲ್ ಅವರ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಏಳು ಕೋಟಿ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಎನಿಸಿಕೊಂಡಿರುವ ಸಾಹಿತ್ಯ ಪರಿಷತ್ತು, ಕನ್ನಡ ಮನಸ್ಸುಗಳ ಮಾತೃಸಂಸ್ಥೆಯಾಗಿ ಹೊರಹೊಮ್ಮಿದ್ದು ಹೆಮ್ಮೆಯ ಸಂಗತಿ ಎಂದರು.
ಬಸವನ ಬಾಗೇವಾಡಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಆರ್.ಜಿ ಅಳ್ಳಗಿ ಮಾತನಾಡಿ, ಕನ್ನಡಕ್ಕೆ ಮೂವರು ರಾಷ್ಟ್ರಕವಿಗಳು, ಎಂಟು ಜನ ಜ್ಞಾನಪೀಠ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಭಾರತದ ಅತ್ಯಂತ ಶ್ರೀಮಂತ ಭಾಷೆಯಾದ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನವನ್ನು ದೊರಕಿದ್ದು, ನಮಗೆಲ್ಲ ಸಂತೋಷದ ಸಂಗತಿ ಎಂದರು.
ಬಸವರಾಜ ಹಂಚಲಿ, ದಿಲಾವರ ಖಾಜಿ, ಮಹಾದೇವಪ್ಪ ಬಿರಾದಾರ, ಜಗದೀಶ ಬೋಳಸೂರ, ಎಂ.ಎಂ. ಖಲಾಶಿ, ಆಶಾ ಬಿರಾದಾರ ಮಾತನಾಡಿದರು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಬಿ.ಎಂ. ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ವಿಜಯಪುರದ ಎಕ್ಸಲೆಂಟ್ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಜ್ವಲ್ ಪತ್ತಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.