
ವಿಜಯಪುರ: ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರೈತರಿಗೆ ಪ್ರತಿ ಟನ್‌ಗೆ ₹50 ಆರ್ಥಿಕ ನೆರವಿನ ಮೊತ್ತ ₹300 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಕಳೆದ ನವಂಬರ್ 8ರಂದು ಕರೆದಿದ್ದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ ಎಫ್‌ಆರ್‌ಪಿ ಮೇಲೆ ₹100 ಆರ್ಥಿಕ ನೆರವು ನೀಡುವ ನಿರ್ಧಾರ ಪ್ರಕಟಿಸಿದ್ದರು.
₹100 ಆರ್ಥಿಕ ನೆರವಿನಲ್ಲಿ ರಾಜ್ಯ ಸರ್ಕಾರ ₹50 ಹಾಗೂ ಸಕ್ಕರೆ ಕಾರ್ಖಾನೆಗಳು ₹50 ನೀಡಬೇಕು ಎಂಬ ತೀರ್ಮಾನ ಕೈಗೊಳ್ಳಲಾಗಿತ್ತು. ಈ ನಿರ್ಧಾರದಂತೆ ರಾಜ್ಯ ಸರ್ಕಾರ ತನ್ನ ಪಾಲಿನ ಆರ್ಥಿಕ ನೆರವಿನ ಹಣ ₹ 300 ಕೋಟಿಯನ್ನು ಬಿಡುಗಡೆ ಮಾಡಿದೆ ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯದ ಸಕ್ಕರೆ ಕಾರ್ಖಾನೆಗಳ ಪ್ರಸ್ತಾವನೆ ಆಧರಿಸಿ ಕಬ್ಬು ಅಭಿವೃದ್ಧಿ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಹಣ ಬಿಡುಗಡೆ ಮಾಡಲಿದ್ದಾರೆ. ರಾಜ್ಯದ ರೈತರು ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಪೂರೈಕೆ ಮಾಡಿದ ಕಬ್ಬಿನ ಪ್ರಮಾಣ ಆಧರಿಸಿ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪ್ರತಿ ಟನ್‌ಗೆ ₹50ಗಳಂತೆ ಜಮಾ ಮಾಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಅದೇ ರೀತಿ ಕಬ್ಬು ಪೂರೈಕೆ ಮಾಡಿದ ರೈತರಿಗೆ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ಪ್ರತಿ ಟನ್ ಕಬ್ಬಿಗೆ ₹50 ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
2025-26ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನಲ್ಲಿ 81 ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸಿದ್ದು, 29 ಕಾರ್ಖಾನೆಗಳಲ್ಲಿ ಕಬ್ಬು ನುರಿಸುವಿಕೆ ಮುಕ್ತಾಯವಾಗಿದೆ. ಇದುವರೆಗೆ 521 ಲಕ್ಷ ಮೆಟ್ರಿಕ್ ಕಬ್ಬು ನುರಿಸಲಾಗಿದ್ದು, ಈ ಹಂಗಾಮಿನಲ್ಲಿ ಸುಮಾರು 600 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ನಿರೀಕ್ಷೆ ಇದೆ ಎಂದು ಸಚಿವರು ವಿವರಿಸಿದ್ದಾರೆ.
ಮಾರ್ಚ್ ಮೊದಲ ವಾರದ ವೇಳೆಗೆ ಪ್ರಸಕ್ತ ಹಂಗಾಮಿನ ಕಬ್ಬು ನುರಿಸುವಿಕೆ ಅಂತ್ಯವಾಗಲಿದೆ. 600 ಲಕ್ಷ ಮೆಟ್ರಿಕ್ ಟನ್ ನುರಿಸುವ ಅಂದಾಜು ಆಧರಿಸಿ ₹300 ಕೋಟಿ ಆರ್ಥಿಕ ನೆರವು ಬಿಡುಗಡೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.