ADVERTISEMENT

ಕುಡಿಯುವ ನೀರಿನ ಸಮಸ್ಯೆ ನೀಗಿಸಿ: ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2022, 15:39 IST
Last Updated 30 ಮಾರ್ಚ್ 2022, 15:39 IST
ವಿಜಯಪುರ ಜಿಲ್ಲೆಯ ವಿವಿಧ ತಾಲ್ಲೂಕುಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಬುಧವಾರ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ಮಾತನಾಡಿದರು
ವಿಜಯಪುರ ಜಿಲ್ಲೆಯ ವಿವಿಧ ತಾಲ್ಲೂಕುಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಬುಧವಾರ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ಮಾತನಾಡಿದರು   

ವಿಜಯಪುರ: ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ಸೂಚಿಸಿದರು.

ತಾಲ್ಲೂಕುಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ - ವಿಪತ್ತು ನಿರ್ವಹಣಾ ಸಭೆಯಲ್ಲಿ ಅವರು ಮಾತನಾಡಿದರು.

ನಿಡಗುಂದಿ ತಾಲ್ಲೂಕಿನ ಅರೇಶಂಕರ ಕೆರೆಯ ಗೇಟ್‌ಗಳನ್ನು ದುರಸ್ತಿಗೊಳಿಸಿ ನೀರು ಸೋರುವಿಕೆಯನ್ನು ತಡೆಗಟ್ಟಲು ಅವರು ಸೂಚಿಸಿದರು.

ADVERTISEMENT

ನಾಗಠಾಣ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯ ಏಕ್ಸ್‌ಪ್ರೆಸ್‌ ಫೀಡರ್ ಲೈನ್‌ಗೆ ಮತ್ತು ತಿಕೋಟಾ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯಡಿ ದೇವರಗೆಣ್ಣೂರ ಗ್ರಾಮದ ಹತ್ತಿರ, ಜಾಕ್‌ವೆಲ್‌ಗೆ ಸರಿಯಾದ ಪ್ರಮಾಣದಲ್ಲಿ ವಿದ್ಯುತ್‌ ವೋಲ್ವೇಜ್ ಪೂರೈಸಲು ಅವರು ಸೂಚಿಸಿದರು.

ಜಿಲ್ಲೆಯ ಆಹೇರಿ (ಜ) ಗ್ರಾಮದ ಹತ್ತಿರ 42.06 ಕಿ.ಮೀ. ಕಾಲುವೆ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಉಳಿದ 10 ಮೀಟರ್ ಕಾಲುವೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಅವರು ಹೇಳಿದರು.

ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆ ಮೂಲಕ ಸಿಂದಗಿ ತಾಲ್ಲೂಕಿನ ಯಂಕಂಚಿ ಕೆರೆಯನ್ನು ತುಂಬಿಸಬೇಕು ಎಂದು ಅವರು ಸೂಚಿಸಿದರು.

ನಗರ ಕುಡಿಯುವ ನೀರು ಸರಬರಾಜು ಮಾಡುವ ಪೈಪ್‌ಗಳನ್ನು ತೀರಾ ಮೇಲ್ಮಟ್ಟದಲ್ಲಿ ಹಾಕಿದ್ದು, ಈ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗಿರುವುದರಿಂದ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಜಾನುವಾರುಗಳಿಗೆ ನೀರಿನ ತೊಟ್ಟಿಗಳನ್ನು ಮತ್ತು ನೆರಳಿನ ವ್ಯವಸ್ಥೆಯನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಅಥವಾ 15ನೇ ಹಣಕಾಸು ಅನುದಾನದಡಿ ಕೈಗೊಳ್ಳುವ ಕುರಿತು ಜಿಲ್ಲಾ ಪಂಚಾಯ್ತಿಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆಪ್ರಸ್ತಾವನೆ ಸಲ್ಲಿಸಲು ಹಾಗೂ ಆಲಮೇಲ ಮತ್ತು ಸಿಂದಗಿ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಕೆರೆಗಳನ್ನು ಮೇಲಿಂದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್‌ ಶಿಂಧೆ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಉಪವಿಭಾಗಾಧಿಕಾರಿ ಬಲರಾಮ ಲಮಾಣಿ ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.