ADVERTISEMENT

ಬಿಜೆಪಿ ಗೆಲ್ಲಿಸಲು ಶ್ರಮಿಸೋಣ: ಯತ್ನಾಳ

ಬಿಜೆಪಿ ಜಿಲ್ಲಾ ಕಾರ್ಯಕಾರಣಿ ಸಭೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2022, 14:29 IST
Last Updated 21 ನವೆಂಬರ್ 2022, 14:29 IST
ವಿಜಯಪುರದಲ್ಲಿ ಸೋಮವಾರ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಶಾಸಕ ರಮೇಶ ಭೂಸನೂರ, ವಿಜುಗೌಡ ಪಾಟೀಲ ಇದ್ದಾರೆ –ಪ್ರಜಾವಾಣಿ ಚಿತ್ರ
ವಿಜಯಪುರದಲ್ಲಿ ಸೋಮವಾರ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಶಾಸಕ ರಮೇಶ ಭೂಸನೂರ, ವಿಜುಗೌಡ ಪಾಟೀಲ ಇದ್ದಾರೆ –ಪ್ರಜಾವಾಣಿ ಚಿತ್ರ   

ವಿಜಯಪುರ: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ ಮರಳಿ ಅಧಿಕಾರಕ್ಕೆ ತರಲು ಪಕ್ಷದ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನಗರದಲ್ಲಿ ಸೋಮವಾರ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದಅವರು, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 130 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಇದೆ. ಜಿಲ್ಲೆಯಲ್ಲಿ 8 ವಿಧಾನಸಭೆ ಕ್ಷೇತ್ರಗಳ ಪೈಕಿ 6 ಸ್ಥಾನಗಳನ್ನು ಗೆಲ್ಲಲು ಪಕ್ಷದ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು ಎಂದರು.

ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೀಸಲಾತಿ ಹೆಚ್ಚಳ, ಮರಾಠ ಸಮಾಜಕ್ಕೆ ನಿಗಮ ರಚನೆ, ತಳವಾರ ಸಮುದಾಯಕ್ಕೆ ಎಸ್‌ಟಿ ಮೀಸಲು ನೀಡಲಾಗಿದ್ದು, ಎಲ್ಲ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇನ್ನಷ್ಟು ಐತಿಹಾಸಿಕ ನಿರ್ಣಯಗಳನ್ನು ರಾಜ್ಯ ಬಿಜೆಪಿ ಸರ್ಕಾರ ಕೈಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.

ADVERTISEMENT

ಕಾಂಗ್ರೆಸ್‌ನ ನಾಯಕರು ಹತಾಶೆಗೊಂಡಿದ್ದಾರೆ. ಇದರಿಂದ ಕಾಂಗ್ರೆಸ್‌ನ ಲೆಕ್ಕಾಚಾರ ಬದಲಾಗಿದೆ. ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ಕೇಂದ್ರ ಸರ್ಕಾರ ಶೇ 10 ರಷ್ಟು ಮೀಸಲಾತಿ ನೀಡಿರುವುದನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿರುವುದು ಸರಿಯಲ್ಲ ಎಂದರು.

ಶಾಸಕ ರಮೇಶ ಭೂಸನೂರ ಮಾತನಾಡಿ, ಕಳೆದ ವಿಧಾನಸಭೆಯಲ್ಲಿ ಅಪಪ್ರಚಾರದಿಂದಾಗಿ ಸಿಂದಗಿಯಲ್ಲಿ ಸೋಲು ಅನುಭವಿಸಿದಂತಾಯಿತು. ನಂತರ ನಡೆದ ಉಪ ಚುನಾವಣೆಯಲ್ಲಿ ಮತದಾರರು ಕೈ ಹಿಡಿದಿದ್ದಾರೆ ಎಂದರು.

ಲಿಂಬೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಚಂದ್ರಶೇಖರ ಕವಟಗಿ ಮಾತನಾಡಿ, ಬಿಜೆಪಿಯಲ್ಲಿ ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ಮೊದಲು ಎನ್ನುವ ತತ್ವ ಪರಿಪಾಲನೆ ಅಗತ್ಯ. ವ್ಯಕ್ತಿ ಪೂಜೆಗೆ ಅವಕಾಶ ಇಲ್ಲ. ನಮ್ಮಲ್ಲಿ ತತ್ವ ಸಿದ್ಧಾಂತ ಮುಖ್ಯ. ಅದಕ್ಕೆ ಬದ್ಧರಾಗಿ ಕೆಲಸ ಮಾಡಬೇಕಾಗುತ್ತದೆ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಕೂಚಬಾಳ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಉಮೇಶ ಕಾರಜೋಳ, ಪ್ರಕಾಶ ಅಕ್ಕಲಕೋಟ, ವಿವೇಕಾನಂದ ಡಬ್ಬಿ, ಶಿವರುದ್ರ ಬಾಗಲಕೋಟ, ಜಯಪ್ರಕಾಶ, ಮಲ್ಲಮ್ಮ ಜೋಗೂರ, ಮಲ್ಲಿಕಾರ್ಜುನ ಜೋಗೂರ ಇದ್ದರು.

***

ಅಭಿವೃದ್ಧಿ, ಹಿಂದುತ್ವದ ಅಲೆಯಿಂದಾಗಿ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಿದೆ. ಪಾಲಿಕೆ ಫಲಿತಾಂಶ ರಾಜ್ಯ ರಾಜಕಾರಣಕ್ಕೆ ದಿಕ್ಸೂಚಿ ಆಗಿದೆ.
–ಬಸನಗೌಡ ಪಾಟೀಲ ಯತ್ನಾಳ, ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.