ADVERTISEMENT

ಅನುದಾನ ಸದ್ಬಳಕೆ; ಪರಿಶೀಲನೆಗೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2019, 12:12 IST
Last Updated 24 ಡಿಸೆಂಬರ್ 2019, 12:12 IST
ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ಜರುಗಿತು
ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ಜರುಗಿತು   

ವಿಜಯಪುರ: ‘ಅಂಗನವಾಡಿ ಕಟ್ಟಡಗಳ ದುರಸ್ತಿ, ನಿರ್ಗತಿಕ ಮಕ್ಕಳ ಕುಟೀರ ಯೋಜನೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳಡಿ ಅನುದಾನ ಪಡೆಯುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಕಾರ್ಯ ನಿರ್ವಹಣೆಗೆ ಬಗ್ಗೆ ಪರಿಶೀಲನೆ ನಡೆಸಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಮತ್ತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಅಂಗನವಾಡಿ ಕಟ್ಟಡಗಳ ದುರಸ್ತಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ನಿರ್ಗತಿಕ ಮಕ್ಕಳ ಕುಟೀರ ಯೋಜನೆಯ ಪ್ರಗತಿ ವರದಿಯನ್ನು ಪ್ರತಿ ತಿಂಗಳು ಸಲ್ಲಿಸಬೇಕು. ಸರ್ಕಾರದ ಅನುದಾನ ಪಡೆಯುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಿಗೆ ಖುದ್ದು ಭೇಟಿ ನೀಡಿ, ಪರಿಶೀಲಿಸಿ ವರದಿ ಸಲ್ಲಿಸಬೇಕು’ ಎಂದು ಹೇಳಿದರು.

ADVERTISEMENT

‘ವಿಶೇಷ ಅಭಿವೃದ್ಧಿ ಮತ್ತು ಉದ್ಯೋಗ ಖಾತ್ರಿ ಯೋಜನೆಯಡಿ ಅಂಗನವಾಡಿ ಕಟ್ಟಡಗಳ ನಿರ್ಮಾಣದಲ್ಲಿ ಸೂಕ್ತ ಪ್ರಗತಿ ಸಾಧಿಸಬೇಕು. ಮಾತೃವಂದನಾ ಯೋಜನೆ ಲಾಭ ದೊರೆಯಲು ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್‌ ನೀಡಬೇಕು. ಪೋಷಣ ಅಭಿಯಾನ ಕುರಿತು ಅರಿವು ಮೂಡಿಸಬೇಕು. ಸೀಮಂತ, ಪೌಷ್ಟಿಕ ಆಹಾರ ಶಿಬಿರ ಸೇರಿದಂತೆ ಮಕ್ಕಳ ಪೌಷ್ಟಿಕಾಂಶಗಳ ಕಾರ್ಯಗಳನ್ನು ಚುರುಕುಗೊಳಿಸಬೇಕು’ ಎಂದು ಹೇಳಿದರು.

‘ಸಾಂತ್ವನ ಕೇಂದ್ರಗಳಿಗೆ ಬರುವ ಪ್ರಕರಣಗಳ ಇತ್ಯರ್ಥದ ನಂತರ ಕೂಡ ಒಂದು ವರ್ಷದವರೆಗೆ ಆಯಾ ಕುಟುಂಬಗಳಲ್ಲಿನ ಸಾಮರಸ್ಯದ ಬಗ್ಗೆ ಪರಿಶೀಲಿಸಬೇಕು. ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ತಕ್ಷಣ ಸ್ಪಂದಿಸಬೇಕು’ ಎಂದರು.

‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನೆಗಳ ಕುರಿತು ಅರಿವು ಮೂಡಿಸಬೇಕು. ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಸಮೂಹ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.

‘ಜಿಲ್ಲೆಯಲ್ಲಿ ಎಲ್ಲ ಪಡಿತರ ನ್ಯಾಯ ಬೆಲೆ ಅಂಗಡಿಗಳು ಸಕಾಲಕ್ಕೆ ತೆರೆಯುವ ಜೊತೆಗೆ ಸಂಜೆ ಕನಿಷ್ಠ 7 ಗಂಟೆಯ ವರೆಗೆ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಕಳಪೆ ಆಹಾರ ಧಾನ್ಯ ಮಾರಾಟ ಮತ್ತು ಸಾಗಾಣಿಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಎಪಿಎಲ್‌ನವರು ಬಿಪಿಎಲ್ ಕಾರ್ಡ್‌ ಹೊಂದಿದ್ದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದರು.

ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.