ADVERTISEMENT

ಪೌರಕಾರ್ಮಿಕರ ಸೇವೆ ಅನನ್ಯ: ಶಾಸಕ ವಿಠ್ಠಲ ಕಟಕದೊಂಡ

ಪೌರಕಾರ್ಮಿಕರ ದಿನಾಚರಣೆ: ಕ್ರೀಡಾಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2024, 15:47 IST
Last Updated 23 ಸೆಪ್ಟೆಂಬರ್ 2024, 15:47 IST
ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸೋಮವಾರ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ವಿವಿಧ ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು
ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸೋಮವಾರ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ವಿವಿಧ ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು   

ವಿಜಯಪುರ: ನಗರದ ಸ್ವಚ್ಛತೆ, ನೈರ್ಮಲ್ಯ, ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು.

ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಸೋಮವಾರ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಬೇಕು ಹಾಗೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕೆ ಒತ್ತು ನೀಡಿ ಉನ್ನತ ಶಿಕ್ಷಣ ಒದಗಿಸುವುದರ ಮೂಲಕ ಅವರ ಬದುಕು ಮತ್ತು ಭವಿಷ್ಯವನ್ನು ಅತ್ಯುತ್ತಮವಾಗಿ ರೂಪಿಸಬೇಕು ಎಂದು ಹೇಳಿದರು.

ADVERTISEMENT

ಮಹಾನಗರ ಪಾಲಿಕೆ ಉಪಮೇಯರ್‌ ದಿನೇಶ ಹಳ್ಳಿ ಮಾತನಾಡಿ, ಪೌರಕಾರ್ಮಿಕರು ತಮ್ಮ ಕರ್ತವ್ಯದ ಜೊತೆಗೆ ಸುರಕ್ಷಾ ಪರಿಕರಗಳನ್ನು ಉಪಯೋಗಿಸಿ ಮುಂಜಾಗ್ರತೆಯಿಂದ ಕಾರ್ಯನಿರ್ವಹಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳುವಂತೆ ಹೇಳಿದರು.    

ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಪ್ರಾಸ್ತಾವಿಕವಾಗಿ ಮಾತನಾಡಿ, ಪೌರ ಕಾರ್ಮಿಕರ ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಹಲವಾರು ಯೋಜನೆಗಳಿದ್ದು, ಈಗಾಗಲೇ ಪಾಲಿಕೆ ವತಿಯಿಂದ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಟ್ಯಾಬ್‍ಗಳನ್ನು ವಿತರಿಸಲಾಗಿದೆ. ಆರೋಗ್ಯ ದೃಷ್ಟಿಯಿಂದ ಹಾಗೂ ಮಕ್ಕಳ ಶೈಕ್ಷಣಿಕ ಉನ್ನತಿಗಾಗಿ ಈಗಾಗಲೇ ಮಾಹಿತಿ ಕಾರ್ಯಗಾರ ಹಮ್ಮಿಕೊಂಡಿದ್ದು, ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.   

ಮನೋವೈದ್ಯ ಡಾ.ಮಂಜುನಾಥ ಮಸಳಿ ಉಪನ್ಯಾಸ ನೀಡಿದರು. ಪೌರಕಾರ್ಮಿಕರಿಗಾಗಿ ಆಯೋಜಿಸಲಾದ ವಿವಿಧ ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. 

ಮಹಾನಗರ ಪಾಲಿಕೆ ಮೇಯರ್‌ ಮಹೇಜಬಿನ್ ಹೊರ್ತಿ, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ಬದ್ರುದ್ದಿನ್‌ ಸೌದಾಗರ,  ಮಹಾನಗರಪಾಲಿಕೆ ಸದಸ್ಯರು, ಪೌರಕಾರ್ಮಿಕರು, ಅಧಿಕಾರಿ, ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.