ADVERTISEMENT

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 16:54 IST
Last Updated 24 ನವೆಂಬರ್ 2020, 16:54 IST
ವಿಜಯಪುರ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಐಕ್ಯತೆ ದಿನಾಚರಣೆಯನ್ನು ಮಕ್ಕಳ ರಕ್ಷಣಾ ಆಯೋಗದ ಸದಸ್ಯೆ ಭಾರತಿ ವಾಳ್ವೆಕರ ಉದ್ಘಾಟಿಸಿದರು
ವಿಜಯಪುರ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಐಕ್ಯತೆ ದಿನಾಚರಣೆಯನ್ನು ಮಕ್ಕಳ ರಕ್ಷಣಾ ಆಯೋಗದ ಸದಸ್ಯೆ ಭಾರತಿ ವಾಳ್ವೆಕರ ಉದ್ಘಾಟಿಸಿದರು   

ವಿಜಯಪುರ: ಮಹಿಳೆಯು ತಾಯಿಯಾಗಿ, ಮಡದಿಯಾಗಿ, ಸಹೋದರಿಯಾಗಿ, ಮಗಳಾಗಿ ಹೀಗೆ ಗಂಡಿನ ಜೀವನದಲ್ಲಿ ಪ್ರಮುಖ ಪಾತ್ರವಹಿಸುತ್ತಾಳೆ. ಇಂತಹ ಮಹಿಳೆಯನ್ನು ನಾವು ಗೌರವಿಸಬೇಕು. ಆದರೆ, ಹೆಣ್ಣಿನ ಮೇಲೆ ವಿವಿಧ ದೌರ್ಜನ್ಯಗಳು ನಡೆಯುತ್ತಿರುವುದು ಶೋಚನೀಯ ಎಂದು ವಿಜಯಪುರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಣ್ಣ ಹೊಸಮನಿ ಹೇಳಿದರು.

ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಐಕ್ಯತೆ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೆಣ್ಣಿನ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹತ್ತಾರು ಕಠಿಣ ಕಾನೂನುಗಳನ್ನು ರೂಪಿಸಿದೆಯಾದರೂ ದೌರ್ಜನ್ಯಗಳು ನಿಂತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ADVERTISEMENT

ಮಹಿಳೆ ದೌರ್ಜನ್ಯಕ್ಕೊಳಗಾದರೆ ಅಂತಹವರಿಗೆ ಸರ್ಕಾರದಿಂದ ಕಾನೂನುರೀತ್ಯ ಸಿಗಬಹುದಾದ ಸೌಲಭ್ಯಗಳ ಬಗ್ಗೆಯೂ ಅಗತ್ಯ ಅರಿವು ಮೂಡಿಸಬೇಕು. ಸಾರ್ವಜನಿಕರಿಗೂ ಈ ಕುರಿತು ಅಗತ್ಯ ಮಾಹಿತಿ ಒದಗಿಸಬೇಕು ಎಂದು ತಿಳಿಸಿದರು.

ಮಕ್ಕಳ ರಕ್ಷಣಾ ಆಯೋಗದ ಸದಸ್ಯೆ ಭಾರತಿ ವಾಳ್ವೆಕರ ಮಾತನಾಡಿ, ಮಕ್ಕಳ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡು ಅವಿರತವಾಗಿ ಶ್ರಮಿಸುತ್ತಿದ್ದು, ಮಕ್ಕಳ ರಕ್ಷಣೆ, ಅಭಿವೃದ್ಧಿ ಹಾಗೂ ಹಕ್ಕುಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲರ ಪಾತ್ರವೂ ಪ್ರಮುಖವಾಗಿದೆ ಎಂದು ಹೇಳಿದರು.

ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಪ್ರಕಟಿಸುವ ಮೂಲಕ ವ್ಯಾಪಕವಾಗಿ ಪ್ರಚಾರ ಮಾಡಬೇಕು ಎಂದು ಅವರು ತಿಳಿಸಿದರು.

ಬಸವರಾಜ ಕುಬಕಡ್ಡಿ, ಡಿವೈಎಸ್ಪಿ ಟಿ.ಎಸ್ ಸುಲ್ಪಿ, ಕೆ.ಕೆ ಚವ್ಹಾಣ, ಮಹಾದೇವಪ್ಪ ದೇವೂರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.