ಸಾಂದರ್ಭಿಕ ಚಿತ್ರ
ವಿಜಯಪುರ: ನಗರದಲ್ಲಿ ಐದು ವರ್ಷದ ಬಾಲಕಿ ಮೇಲೆ ಸ್ವಂತ ತಂದೆಯಿಂದಲೇ ಲೈಂಗಿಕ ದೌರ್ಜನ್ಯ ನಡೆದಿದ್ದು, ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಮತ್ತು ಆತನ ಪತ್ನಿ ಜಿಲ್ಲೆಯ ಹಳ್ಳಿಯೊಂದರಿಂದ ವಿಜಯಪುರ ನಗರಕ್ಕೆ ಬಂದು ಮನೆಗೆಲಸ ಮಾಡಿಕೊಂಡಿದ್ದಾರೆ. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ದಂಪತಿ ನಡುವೆ ಆಗಾಗ ವೈಮನಸ್ಸು ಉಂಟಾಗಿ ಆರೋಪಿಯು ತನ್ನ ಹಳ್ಳಿಗೆ ಹೋಗಿ ಬರುತ್ತಿದ್ದನು ಎಂದು ದೂರಿನಲ್ಲಿ ತಿಳಿಸಲಾಗಿದೆ.
‘ಆಗಸ್ಟ್ 30ರಂದು ರಾತ್ರಿ 8 ಗಂಟೆಗೆ ಗಣಪತಿ ದರ್ಶನ ಮಾಡಿಸಿಕೊಂಡು ಬರುವುದಾಗಿ ಇಬ್ಬರು ಹೆಣ್ಣು ಮಕ್ಕಳನ್ನು ಮನೆಯಿಂದ ಕರೆದುಕೊಂಡು ಹೋಗಿದ್ದ ಪತಿಯು, ಚಿಕ್ಕ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ’ ಎಂದು ಆರೋಪಿಸಿ ಪತಿಯ ವಿರುದ್ಧ ಪತ್ನಿಯೇ ದೂರು ನೀಡಿದ್ದಾರೆ.
ಆಯೋಗದಿಂದ ದೂರು ದಾಖಲು:
‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ತಿಳಿಸಿದ್ದಾರೆ.
‘ವಿಜಯಪುರ ಮಹಿಳಾ ಪೊಲೀಸ್ ಠಾಣೆಯ ಸಿಪಿಐಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ, ಮಗುವಿಗೆ ವೈದ್ಯಕೀಯ ಪರೀಕ್ಷೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳು ವಿಳಂಬ ಮಾಡದೇ, ತ್ವರಿತವಾಗಿ ಮಾಡುವಂತೆ ಸೂಚಿಸಲಾಗಿದೆ. ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವಾಗಿದೆ’ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.