ವಿಜಯಪುರ: ‘ರಾಜ್ಯದಲ್ಲಿ ಎಲ್ಲೂ ಇಲ್ಲದ ಪಿಪಿಪಿ ಮಾದರಿಯಲ್ಲಿ ವಿಜಯಪುರದಲ್ಲಿ ವೈದ್ಯಕೀಯ ಕಾಲೇಜನ್ನು ಆರಂಭಿಸುವ ಅಗತ್ಯವಿಲ್ಲ, ಜನರಿಗೆ ಇದರಿಂದ ಸಹಾಯವಾಗಲ್ಲ, ಶೋಷಣೆಯಾಗಲಿದೆ’ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ವಿರೋಧ ವ್ಯಕ್ತಪಡಿಸಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ನಾನು ಆರಂಭದಿಂದಲೇ ವಿರೋಧ ವ್ಯಕ್ತಪಡಿಸಿದ್ದೇನೆ. ಸರ್ಕಾರ ಕೈಬಿಡಬೇಕು’ ಎಂದು ಒತ್ತಾಯಿಸಿದರು.
‘ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಅಗತ್ಯ ಇರುವುದಕ್ಕಿಂತ ಹೆಚ್ಚಿನ ಮೂಲಸೌಲಭ್ಯಗಳು ಜಿಲ್ಲಾಸ್ಪತ್ರೆಯಲ್ಲಿ ಇವೆ. 149 ಎಕರೆ ಜಮೀನು ಇದೆ. ಟ್ರಾಮಾ ಸೆಂಟರ್, ಕ್ಯಾನ್ಸರ್ ಘಟಕ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಇವೆ. ಇಷ್ಟೆಲ್ಲ ಸೌಲಭ್ಯ ಇರುವ ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದ ಅಗತ್ಯ ಇಲ್ಲ’ ಎಂದರು.
‘ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು. ಈ ವಿಷಯದಲ್ಲಿ ರಾಜಕೀಯ ಸಂಘರ್ಷಕ್ಕೆ ಇಳಿಯುವುದಿಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರಿಗೂ ಮನವಿ ಮಾಡುತ್ತೇನೆ. ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಜನರ ಜತೆ ನಿಲ್ಲುತ್ತೇನೆ’ ಎಂದರು.
‘ಉತ್ತರ ಕರ್ನಾಟಕದ ಕೊನೆಯ ಜಿಲ್ಲೆಯಾದ ವಿಜಯಪುರದಲ್ಲಿ ಉತ್ತಮ ವೈದ್ಯಕೀಯ ಸೌಲಭ್ಯಗಳು ಲಭಿಸಿದ ಕಾರಣ ಜನತೆ ಉನ್ನತ ಚಿಕಿತ್ಸೆಗಾಗಿ ಈಗಲೂ ನೆರೆಯ ಸೋಲಾಪುರ, ಮಿರಜ್‌ಗೆ ಹೋಗುತ್ತಿದ್ದಾರೆ. ಇದನ್ನು ತಪ್ಪಿಸಲು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಆರಂಭವಾಗಲೇಬೇಕು’ ಎಂದು ಹೇಳಿದರು.
‘ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ವಿಷಯದಲ್ಲಿ ರಾಜ್ಯ ಸರ್ಕಾರ ರಾಜಕೀಯ ಲಾಭಿಗೆ ಮಣಿದಿದೆಯೇ ಎಂಬ ಪ್ರಶ್ನೆಗೆ ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸರ್ಕಾರ ಯಾವುದೇ ಲಾಭಿಗೆ ಮಣಿಯಬಾರದು’ ಎಂದು ಹೇಳಿದರು.
ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಯಾಗಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಸಂಬಂಧರು ಧ್ವನಿ ಎತ್ತಬೇಕುಶಿವಾನಂದ ಪಾಟೀಲ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.