ADVERTISEMENT

ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ: ಸುನೀಲಗೌಡ ಪಾಟೀಲ ಆಗ್ರಹ

ವಿಧಾನ ಪರಿಷತ್‌ ಸದಸ್ಯ ಸುನೀಲಗೌಡ ಪಾಟೀಲ ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2022, 14:38 IST
Last Updated 21 ಸೆಪ್ಟೆಂಬರ್ 2022, 14:38 IST
ಸುನೀಲಗೌಡ ಪಾಟೀಲ
ಸುನೀಲಗೌಡ ಪಾಟೀಲ   

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಇರುವ ಮೂಲ ಸೌಕರ್ಯಗಳ ಕೊರತೆಯ ಕುರಿತು ವಿಧಾನ ಪರಿಷತ್‌ ಸದಸ್ಯ ಸುನೀಲಗೌಡ ಪಾಟೀಲ ಸರ್ಕಾರದ ಗಮನ ಸೆಳೆದರು.

ವಿಧಾನ ಪರಿಷತ್‌ನಲ್ಲಿ ಈ ಕುರಿತು ಬುಧವಾರ ಧ್ವನಿ ಎತ್ತಿರುವ ಅವರು, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಯಾವ್ಯಾವ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಸರ್ಕಾರದಿಂದ ಮಾಹಿತಿ ಕೇಳಿದರು.

ಈ ಪ್ರಶ್ನೆಗೆ ಉತ್ತರಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ, ಉಭಯ ಜಿಲ್ಲೆಗಳ 165 ಸರ್ಕಾರಿ ಶಾಲೆಗಳಲ್ಲಿ ಆಟದ ಮೈದಾನ, ಶೌಚಾಲಯ, ಕುಡಿಯುವ ನೀರು ಮತ್ತು ಕಂಪೌಂಡ್‍ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆ ಇದೆ ಎಂದು ಮಾಹಿತಿ ನೀಡಿದರು.

ADVERTISEMENT

ಈ ಮಧ್ಯೆ, ವಿಜಯಪುರ ಜಿಲ್ಲೆಯಲ್ಲಿ ಶಿಥಿಲಗೊಂಡಿರುವ ಸರ್ಕಾರಿ ಶಾಲಾ ಕಟ್ಟಡಗಳು ಮತ್ತು ಈ ಕಟ್ಟಡಗಳ ದುರಸ್ತಿಗೆ ಕೈಗೊಂಡಿರುವ ಕ್ರಮಗಳ ಕುರಿತು ಸುನೀಲಗೌಡ ಪಾಟೀಲ ಸರ್ಕಾರದ ಗಮನ ಸೆಳೆದರು.

ಇದಕ್ಕೆ ಉತ್ತರಿಸಿರುವ ಸಚಿವ ಬಿ.ಸಿ.ನಾಗೇಶ, ವಿಜಯಪುರ ಜಿಲ್ಲೆಯಲ್ಲಿ 459 ಸರ್ಕಾರಿ ಶಾಲೆಗಳಲ್ಲಿ 763 ಶಾಲಾ ಕೊಠಡಿಗಳ ಮರುನಿರ್ಮಾಣ ಮಾಡಬೇಕಿದೆ. ಅಲ್ಲದೇ, 29 ಶಾಲೆಗಳ 61 ಕೊಠಡಿಗಳನ್ನು ದುರಸ್ಥಿ ಮಾಡಬೇಕಿದೆ. 2022-23 ನೇ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹ 30 ಲಕ್ಷದಂತೆ ಒಟ್ಟು ₹2.40 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಇದೇ ರೀತಿ ವಿವೇಕ ಯೋಜನೆಯಡಿ 178 ಪ್ರಾಥಮಿಕ ಶಾಲಾ ಕೊಠಡಿಗಳು ಮತ್ತು 22 ಪ್ರೌಢ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ ಎಂದರು.

ನರೇಗಾ ಯೋಜನೆಯಡಿ ಶಾಲಾ ಕಟ್ಟಡಗಳ ನಿರ್ಮಾಣ ಮತ್ತು ದುರಸ್ಥಿ ಸೇರಿದಂತೆ ಮೂಲ ಸೌಕರ್ಯ ಒದಗಿಸಲು 14-15ನೇ ಹಣಕಾಸು ಆಯೋಗದಲ್ಲಿ ಸಂಬಂಧಿಸಿದ ಗ್ರಾಮ ಪಂಚಾಯ್ತಿಗಳಿಗೆ ಅವಕಾಶ ನೀಡಲಾಗಿದೆ. ಇದಕ್ಕೆ ಈಗಾಗಲೇ ಸುತ್ತೋಲೆಯನ್ನು ಹೊರಡಿಸಲಾಗಿದೆ. ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಬಜೆಟ್‍ನಲ್ಲಿ ಒದಗಿಸಲಾದ ಅನುದಾನದ ಲಭ್ಯತೆ ಮತ್ತು ಅಗತ್ಯತೆಗೆ ತಕ್ಕಂತೆ ವಿಜಯಪುರ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಶಾಲೆಗಳಲ್ಲಿ ಮೂಲ ಸೌಕರ್ಯ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

****

ವಿಜಯಪುರ, ಬಾಗಲಕೋಟೆ ಜಿಲ್ಲೆಯ ಬಹಳಷ್ಟು ಸರ್ಕಾರಿ ಶಾಲೆಗಳಲ್ಲಿ ಸಮಸ್ಯೆಗಳು ಇದೆ. ಇದು ಶಿಕ್ಷಣ ಇಲಾಖೆಯು ಮೂಲಭೂತ ಸೌಕರ್ಯಗಳ ಕಡೆಗಣನೆಗೆ ಸಾಕ್ಷಿಯಾಗಿದೆ

ಸುನೀಲಗೌಡ ಪಾಟೀಲ, ಎಂಎಲ್‌ಸಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.