ADVERTISEMENT

ಪಲ್ಸ್ ಪೊಲಿಯೋ ಅಭಿಯಾನ | 2.95 ಲಕ್ಷ ಮಕ್ಕಳಿಗೆ ಲಸಿಕೆ: 1331 ಬೂತ್ ಸ್ಥಾಪನೆ

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2025, 5:05 IST
Last Updated 4 ಡಿಸೆಂಬರ್ 2025, 5:05 IST
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕೆ. ಆನಂದ ಅವರು ಪಲ್ಸ್‌ ಪೊಲಿಯೋ ಕುರಿತು ಬುಧವಾರ ಪೂರ್ವಸಿದ್ಧತಾ ಸಭೆ ನಡೆಸಿದರು
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕೆ. ಆನಂದ ಅವರು ಪಲ್ಸ್‌ ಪೊಲಿಯೋ ಕುರಿತು ಬುಧವಾರ ಪೂರ್ವಸಿದ್ಧತಾ ಸಭೆ ನಡೆಸಿದರು   

ವಿಜಯಪುರ: ಜಿಲ್ಲೆಯಲ್ಲಿ ಡಿಸೆಂಬರ್‌ 21ರಿಂದ ನಾಲ್ಕು ದಿನಗಳ ಕಾಲ ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದ್ದು, ಜಿಲ್ಲೆಯಾದ್ಯಂತ ಒಟ್ಟು 2,95,156 ಮಕ್ಕಳಿಗೆ ಲಸಿಕೆ ಹಾಕಬೇಕಾಗಿದೆ. ಲಸಿಕಾ ಕಾರ್ಯಕ್ಕೆ ಒಟ್ಟು 1331 ಬೂತ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಅಲ್ಲದೇ 23 ಸಂಚಾರಿ ತಂಡಗಳನ್ನು ಕೂಡ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ಆನಂದ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪಲ್ಸ್ ಪೋಲಿಯೋ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಲಸಿಕಾ ಕಾರ್ಯಕ್ರಮಕ್ಕೆ 2,778 ಸಿಬ್ಬಂದಿ, 278 ಮೇಲ್ವಿಚಾರಕರು ಹಾಗೂ ಹೆಚ್ಚುವರಿಯಾಗಿ 183 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 61 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಎಲ್ಲ ಕೇಂದ್ರಗಳಿಗೆ ಲಸಿಕೆ ಪೂರೈಸಲು ಕ್ರಮವಹಿಸಲು ವಾಹನ ಒದಗಿಸುವಂತೆ ಪ್ರಾದೇಶಿಕ ಸಾರಿಗೆ ಆಯುಕ್ತರಿಗೆ ಸೂಚಿಸಿದರು. ಪ್ರತಿ ಬೂತ್‌ಗೆ ಇಬ್ಬರು ಸದಸ್ಯರು, ಐದು ತಂಡಕ್ಕೆ ಒಬ್ಬ ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದು, ಪ್ರತಿ ಬೂತ್ ಮಟ್ಟದ ವ್ಯಾಪ್ತಿಯಲ್ಲಿ ಬರುವ ಮನೆಗಳಿಗೆ ತೆರಳಿ ತಪ್ಪದೇ ಪೋಲಿಯೊ ಹನಿ ಹಾಕಲಿದ್ದಾರೆ ಎಂದರು.

ADVERTISEMENT

ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಲು ಡಿಸೆಂಬರ್ 21ರಂದು ಬೂತ್ ಮಟ್ಟದಲ್ಲಿ ಲಸಿಕಾ ಕಾರ್ಯಕ್ರಮ ನಡೆಸಲಾಗುತ್ತಿದ್ದು, ನಂತರದ ಮೂರು ದಿನ ಮನೆ ಮನೆಗೆ ತೆರಳಿ ಪೊಲಿಯೋ ಲಸಿಕೆ ಹಾಕಲಾಗುತ್ತಿದೆ ಎಂದರು.

ಪೊಲಿಯೋ ಒಂದು ಮಾರಕ ರೋಗವಾಗಿದ್ದು, ಐದು ವರ್ಷದೊಳಗಿನ ಯಾವುದೇ ಮಗು ಈ ಕಾರ್ಯಕ್ರಮದಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಸಂಘ ಸಂಸ್ಥೆಗಳ ಸಹಕಾರ ಪಡೆದು ಕಾರ್ಯಕ್ರಮ ಯಶಸ್ವಿಗೊಳಿಸಲು ಹೇಳಿದರು.

ಪೊಲಿಯೋ ಲಸಿಕೆ ಕುರಿತು ಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮ ಹಾಗೂ ಪಾಲಕರ ಸಭೆ ಏರ್ಪಡಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ವಲಸೆ ಕಾರ್ಮಿಕರ ಮಕ್ಕಳು ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನಿಗಾ ವಹಿಸಲು ಕಾರ್ಮಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರತಿ ಗ್ರಾಮಗಳಲ್ಲಿ ಕರಪತ್ರ, ಡಂಗುರ, ಸಾರುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಸೂಚಿಸಿದರು.

ಡಬ್ಲ್ಯೂಎಚ್‌ಓ ಕನ್ಸಲ್‌ಟಂಟ್ ಡಾ.ಮುಕುಂದ ಗಲಗಲಿ, ಡಿಎಚ್‌ಓ ಡಾ. ಸಂಪತ್ ಗುಣಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಪಾಲಿಕೆಯ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಪ್ರಾದೇಶಿಕ ಸಾರಿಗೆ ಆಯುಕ್ತ ವಸೀಂ ಬಾಬಾ ಮುದ್ದೇಬಿಹಾಳ, ಡಾ. ಎಸ್.ಎಲ್ ಲಕಣ್ಣವರ, ಡಾ.ಎಲ್.ಎಚ್. ಬಿದರಿ, ಪೀಟರ್ ಅಲೆಕ್ಸಾಂಡರ್ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.