ವಿಜಯಪುರ: ಜಿಲ್ಲೆಯಲ್ಲಿ ಬಾಲ್ಯವಿವಾಹ ಕಂಡುಬಂದಲ್ಲಿ ಅದಕ್ಕೆ ಪ್ರೋತ್ಸಾಹ ನೀಡುವವರೂ ಸೇರಿದಂತೆ ಮಗುವಿನ ಪೋಷಕರು, ಮಗುವಿನ ಜವಾಬ್ದಾರಿಯನ್ನು ಹೊತ್ತವರು, ಭಾಗವಹಿಸಿದ ಇತರರ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಶಾಲೆಗಳಲ್ಲಿ ಒಂದು ವಾರಗಳಿಂತ ಹೆಚ್ಚು ಗೈರಾದ ಮಕ್ಕಳ ಮಾಹಿತಿಗಳನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಖುದ್ದಾಗಿ ಶಾಲೆಗಳಿಗೆ ಭೇಟಿ ನೀಡುವುದರ ಮೂಲಕ ಸಮಗ್ರ ಮಾಹಿತಿ ಪಡೆದುಕೊಳ್ಳಬೇಕು. ಬಾಲ್ಯ ವಿವಾಹ ಘಟನೆ ಕಂಡುಬಂದಲ್ಲಿ ಅವುಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ಬಾಲ್ಯ ವಿವಾಹದ ಘಟಿಸದಂತೆ ನೋಡಿಕೊಳ್ಳಬೇಕು ಹಾಗೂ ಬಾಲ್ಯ ವಿವಾಹ ತಡೆಗೆ ಇರುವ ಸಹಾಯವಾಣಿ ಸಂಖ್ಯೆ 1098 ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು ಹಾಗೂ ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯಿತಿಗಳನ್ನು ಗುರುತಿಸಿ ಅಂತಹ ಗ್ರಾಮ ಪಂಚಾಯಿತಿಗಳಿಗೆ ಸನ್ಮಾನಿಸುವ ಕಾರ್ಯ ನಡೆಯಬೇಕು ಎಂದು ತಿಳಿಸಿದರು.
ಬಾಣಂತಿ ಮತ್ತು ಗರ್ಭಿಣಿ ಮಹಿಳೆಯರ ಕ್ಷೇಮಾಭಿವೃದ್ಧಿಗಾಗಿ ಇರುವ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವುದರ ಮೂಲಕ ತಾಯಿ ಮತ್ತು ಮಗುವಿನ ಆರೋಗ್ಯ ಮತ್ತು ಪೋಷಣೆಯನ್ನು ಉತ್ತಮ ಪಡಿಸಲು ಅನುವಾಗಬೇಕು ಎಂದು ಹೇಳಿದರು.
ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನೊಂದ ಮಹಿಳೆಯರಿಗಾಗಿ ಸ್ಥಾಪಿಸಲಾಗಿರುವ ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ನೊಂದ ಮಹಿಳೆಯರಿಗೆ ಆರೋಗ್ಯ, ಆರೈಕೆ, ಪೊಲೀಸ್ ಹಾಗೂ ಕಾನೂನು ನೆರವು, ವಸತಿ ಹಾಗೂ ಆಪ್ತ ಸಮಾಲೋಚನೆ ಇತ್ಯಾದಿ ಸೇವೆಗಳನ್ನು ಸಮರ್ಪಕವಾಗಿ ದೊರಕುವಂತೆ ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಅವರು ಸೂಚಿಸಿದರು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಿಷಿ ಆನಂದ್, ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ನೊಂದ ಮಹಿಳೆಯರಿಗಾಗಿ ಜಿಲ್ಲೆಯಲ್ಲಿ 6 ಸಾಂತ್ವನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಈ ಕೇಂದ್ರಗಳಲ್ಲಿ ನೊಂದ ಮಹಿಳೆಯರಿಗೆ ಆಪ್ತ ಸಮಾಲೋಚನೆ, ಕಾನೂನು ಅರಿವು, ನೆರವು ನೀಡಲಾಗುವುದು. ಅಂತಹ ಮಹಿಳೆಯರಿಗೆ ಆತ್ಮ ಸ್ಥೈರ್ಯ ನೀಡಿ ಪುನಃ ಕುಟುಂಬದೊಂದಿಗೆ ಸೇರಿಸುವ ಕಾರ್ಯವಾಗಬೇಕು. ಸಾಂತ್ವನ ಕೇಂದ್ರಗಳಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಅಧಿಕಾರಿಗಳ ಗಮನಕ್ಕೆ ತಂದು ಇತ್ಯರ್ಥ ಪಡೆಸಿಕೊಳ್ಳುವಂತೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಪೋಕ್ಸೊ ಹಾಗೂ ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳಿಗೆ ಎಲ್ಲ ರೀತಿಯ ಸಹಾಯ ಸಹಕಾರವನ್ನು ಪೊಲೀಸ್ ಇಲಾಖೆಯಿಂದ ನೀಡಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ್ ಮಾರಿಹಾಳ, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಗುಣಾರೆ, ಮಹಾ ನಗರ ಪಾಲಿಕೆಯ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ಸಿ.ಬಿ.ಕುಂಬಾರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಟಿ.ಎಸ್.ಕೊಲ್ಹಾರ್ ಸಭೆಯಲ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.