ADVERTISEMENT

ಮಳೆ ಹಾನಿ ಪ್ರದೇಶಕ್ಕೆ ತ್ವರಿತ ಮೂಲ ಸೌಕರ್ಯ

ಜಿಲ್ಲಾಧಿಕಾರಿ ಡಾ‌.ಆನಂದ.ಕೆ ಅಧಿಕಾರಿಗಳಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2025, 4:53 IST
Last Updated 4 ಅಕ್ಟೋಬರ್ 2025, 4:53 IST
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ.ಮಾತನಾಡಿದರು
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ.ಮಾತನಾಡಿದರು   

ವಿಜಯಪುರ: ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಮಳೆ ನಮ್ಮ ಜಿಲ್ಲೆಯಲ್ಲಿಯಾಗಿದ್ದು, ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮೂಲ ಸೌಕರ್ಯಗಳನ್ನು ತ್ವರಿತವಾಗಿ ಕಲ್ಪಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ವಿಪತ್ತು ನಿರ್ವಹಣಾ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಮೂಲ ಸೌಕರ್ಯಗಳಾದ ರಸ್ತೆ, ಶಾಲಾ ಕಟ್ಟಡ, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಹಾನಿಗೀಡಾದ ಪ್ರದೇಶಗಳಿಗೆ ಅಧಿಕಾರಿಗಳು ತೆರಳಿ ಪ್ರಥಮ ಆದ್ಯತೆ ನೀಡಿ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು ಎಂದರು.

ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಉಂಟಾಗಿ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಹಾನಿಗೀಡಾದ ಮೂಲ ಸೌಕರ್ಯಗಳನ್ನು ತ್ವರಿತ ಗತಿಯಲ್ಲಿ ಕೈಗೊಳ್ಳಲಾಗುತ್ತಿದೆ. ಪ್ರವಾಹದಿಂದ ತೊಂದರೆಗೊಳಗಾದ ಗ್ರಾಮಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯಲ್ಲಿ ಅಂದಾಜು 2.45 ಲಕ್ಷ ಹೆಕ್ಟೆರ್‌ ಬೆಳಹಾನಿದೆ ಅಂದಾಜಿಸಲಾಗಿದೆ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಮೀಕ್ಷೆ ಕೈಗೊಂಡು ನಿಖರವಾದ ಬೆಳೆ ಹಾನಿಯ ಮಾಹಿತಿ ನೀಡುವಂತೆ ಅವರು ಸೂಚಿಸಿದರು.

ADVERTISEMENT

ಜಿಲ್ಲೆಯ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ನಗರಗಳಲ್ಲಿ ಮಳೆಯಿಂದ ಹಾನಿಯಾದ ಮನೆಗಳ ಸಮೀಕ್ಷೆ ಕಾರ್ಯ ಕೈಗೊಂಡು 30ಕ್ಕಿಂತ ಹೆಚ್ಚು ಪ್ರತಿಶತ ಹಾನಿಗೊಳಗಾದ ಮನೆಗಳನ್ನು ಗುರುತಿಸಿ, ಜಿ.ಪಿ.ಎಸ್ ಪೋಟೊ ಸಮೇತ ನಿಖರವಾದ ಮಾಹಿತಿ ನೀಡುವಂತೆ ಸೂಚಿಸಿದರು.

ಯಾವುದೇ ಕಾರಣಕ್ಕೂ ಜನರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಅವರು ತಿಳಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್, ಹೆಚ್ಚುವರಿ ಜಿಲ್ಲಾಧಿಕಾರಿ  ಸೋಮಲಿಂಗ ಗೆಣ್ಣೂರ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬದ್ರುದ್ದೀನ್‌ ಸೌದಾಗರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ  ವಿನಯಕುಮಾರ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಕೆ ಚವ್ಹಾಣ, ಪಶು ಸಂಗೋಪನ ಇಲಾಖೆ ಉಪ ನಿರ್ದೇಶಕ ಅಶೋಕ ಘೋಣಸಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್‌ ಗುಣಾರಿ, ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ರಾಹುಲ್‌ ಕುಮಾರ ಬಾವಿದೊಡ್ಡಿ ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.