ADVERTISEMENT

Republic Day 2026: ವಿಜಯಪುರಲ್ಲಿ ಸಚಿವ ಎಂ.ಬಿ.ಪಾಟೀಲ ಧ್ವಜಾರೋಹಣ

ಜಿಲ್ಲೆಯಲ್ಲಿ ₹ 45 ಸಾವಿರ ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2026, 5:02 IST
Last Updated 26 ಜನವರಿ 2026, 5:02 IST
   

ವಿಜಯಪುರ: ಜಿಲ್ಲಾಡಳಿತದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಧ್ವಜಾರೋಹಣ ನೆರವೇರಿಸಿದರು.

ಗಣರಾಜೋತ್ಸವ ಸಂದೇಶ ನೀಡಿದ ಸಚಿವ ಎಂ.ಬಿ.ಪಾಟೀಲ, 'ಪ್ರಜಾಪ್ರಭುತ್ವದಲ್ಲಿ ಸಂವಿಧಾನವು ಅತ್ಯಂತ ಮಹತ್ವದ್ದಾಗಿದೆ. ಪ್ರಜಾಪ್ರಭುತ್ವವು ತನ್ನ ನಾಗರಿಕರಿಗೆ ಸ್ವಾತಂತ್ರ್ಯ, ಸಮಾನತೆ ಮತ್ತು ಸ್ವಾಯತ್ತತೆಯನ್ನು ನೀಡುತ್ತದೆ. ಜನರನ್ನು ಆಡಳಿತದಲ್ಲಿ ಭಾಗವಹಿಸಲು ಪ್ರೋತ್ಸಾಹಿಸುತ್ತದೆ. ಸರ್ಕಾರದ ಜವಾಬ್ದಾರಿ ಹೆಚ್ಚಿಸುತ್ತದೆ. ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿ ಹಿಡಿಯುತ್ತದೆ. ಹಕ್ಕುಗಳನ್ನು ರಕ್ಷಿಸುತ್ತದೆ ಮತ್ತು ಭಿನ್ನಾಭಿಪ್ರಾಯಗಳನ್ನು ಹಿಂಸೆಯಿಲ್ಲದೆ ಬಗೆಹರಿಸಲು ವೇದಿಕೆ ನೀಡುತ್ತದೆ ಎಂದು ಬಣ್ಣಿಸಿದರು.

ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ಇತ್ತೀಚಿಗೆ ನಡೆದ ವಿಶ್ವ ಆರ್ಥಿಕ ಸಮಾವೇಶದಲ್ಲಿ ನೋಕಿಯಾ, ಟಾಟಾ ಸ್ಪೇಸ್ ಮುಂತಾದ 50ಕ್ಕೂ ಹೆಚ್ಚು ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ಬಂಡವಾಳ ಹೂಡಿಕೆ ಕುರಿತು ಮಾತುಕತೆ ನಡೆಸಿದ್ದು, ಈ ಪೈಕಿ ಆರ್.ಪಿ.ಗೊಯೆಂಕಾ ಕಂಪನಿಯು ಮರು ಬಳಕೆ ಇಂಧನ ಕ್ಷೇತ್ರದಲ್ಲಿ ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆ ಮಾಡಲಿದೆ. ಇದರಿಂದ ಜಿಲ್ಲೆಯ ಯುವ ಜನರಿಗೆ ಉಜ್ವಲ ಉದ್ಯೋಗಾವಕಾಶ ಸೃಷ್ಠಿಯಾಗಲಿದೆ ಎಂದರು.

ADVERTISEMENT

ಹೆಸರಾಂತ ಕಂಪನಿಗಳು ವಿಜಯಪುರ ಜಿಲ್ಲೆಯಲ್ಲಿ ₹ 45 ಸಾವಿರ ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿವೆ. ಇದರಿಂದ ಜಿಲ್ಲೆಯು ಭವಿಷ್ಯದಲ್ಲಿ ಮ್ಯಾನ್ಯುಫ್ಯಾಕ್ಚರಿಂಗ್ ಕ್ಲಸ್ಟರ್ ಆಗಲಿದೆ ಎಂದರು.

ಆಕರ್ಷಕ ಪಥಸಂಚಲನ

ಜಿಲ್ಲೆಯ ವಿವಿಧ ಶಾಲಾ, ಕಾಲೇಜು, ಎನ್ ಸಿಸಿ, ಎನ್ ಎಸ್ ಎಸ್ ಎಸ್, ಸ್ಕೌಟ್ ಅಂಡ್ ಗೈಡ್ಸ್, ಅಗ್ನಿ ಶಾಮಕ, ಪೊಲೀಸ್, ಪೊಲೀಸ್ ವಾದ್ಯವೃಂದ, ಐಆರ್ ಬಿ, ಸೈನಿಕ ಶಾಲೆ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚನ ನಡೆಯಿತು.

ಶಾಲಾ, ಕಾಲೇಜು ವಿದ್ಯಾರ್ಥಿಗಳು ದೇಶಭಕ್ತಿಗೀತೆಗಳಿಗೆ ಆಕರ್ಷಕ ನೃತ್ಯ ಪ್ರದರ್ಶಿಸಿದರು.

ಜಿಲ್ಲೆಯ ವಿವಿಧ ಕ್ಷೇತ್ರದ ಸಾಧರನ್ನು ಸಚಿವರು ಸನ್ಮಾನಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕೌಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ, ಜಿಲ್ಲಾಧಿಕಾರಿ ಡಾ.ಆನಂದ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ, ಪ್ರೊಬೇಷನರಿ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.