ಸಿಂದಗಿ: ‘ಹೊಸಪೇಟೆಯಲ್ಲಿ ನಡೆಯಲಿರುವ ಮೇ 20ರಂದು ಎರಡನೇ ವರ್ಷದ ಸರ್ಕಾರದ ಸಾಧನಾ ಸಮಾವೇಶದಲ್ಲಿ ವಿಜಯಪುರ ಜಿಲ್ಲೆಯ ಎಂಟು ಮತಕ್ಷೇತ್ರಗಳ 15 ಸಾವಿರ ಜನರಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು’ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದರು.
ಇಲ್ಲಿಯ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಾಲಯದ ಸಭಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸರ್ಕಾರದ ಸಾಧನಾ ಸಮಾವೇಶದ ಪೂರ್ವಭಾವಿ ಸಭೆಯ ನಂತರ ಅವರು ಸುದ್ದಿಗಾರರ ಜೊತೆಗೆ ಮಾತನಾಡಿ, ‘ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರದಿಂದ ಬರೆದಿಡುವ ಸಮಾವೇಶ ಆಗಲಿದೆ. ಒಟ್ಟು 1 ಲಕ್ಷಕ್ಕಿಂತ ಅಧಿಕ ರೈತರಿಗೆ ಹಕ್ಕುಪತ್ರ (ಖಾತೆ) ವಿತರಣೆ ಮಾಡಲಾಗುವುದು’ ಎಂದು ತಿಳಿಸಿದರು.
‘ಎರಡು ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ಬಡವರ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯ ಜೊತೆಗೆ ನೀರಾವರಿ ಸೌಲಭ್ಯಗಳನ್ನೊಳಗೊಂಂಡು ಪಿಡಬ್ಲೂಡಿ, ಆರ್‌ಡಿಪಿಆರ್, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳ ಅಭಿವೃದ್ಧಿ ಯೋಜನೆಗಳಿಗೆ ಸಾವಿರಾರು ಕೋಟಿ ಅನುದಾನ ಬಿಡುಗಡೆಗೊಳಿಸಿದೆ. ಸರ್ಕಾರದಲ್ಲಿ ಹಣದ ಕೊರತೆ ಇಲ್ಲ. ಹಿಂದಿನ ಬಿಜೆಪಿ ಸರ್ಕಾರ ಮಾಡಿದ ದೊಡ್ಡ ಪ್ರಮಾಣದ ಸಾಲ ತೀರಿಸಿ ಅಭಿವೃದ್ಧಿ ಪಥದತ್ತ ಸಾಗುತ್ತಿದೆ’ ಎಂದು ಹೇಳಿದರು.
‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನತೆಯಲ್ಲಿ ಖುಷಿಯಿದೆ. ಸರ್ಕಾರದ ಆಡಳಿತದ ಬಗ್ಗೆ ರಾಜ್ಯದ ಜನತೆ ಉತ್ಸುಕರಾಗಿದ್ದಾರೆ’ ಎಂದರು.
ಶಾಸಕ ಅಶೋಕ ಮನಗೂಳಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುರೇಶ ಪೂಜಾರಿ, ಆಲಮೇಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಾಧಿಕ ಸುಂಬಡ ಇದ್ದರು.
Highlights - null
Cut-off box - ‘ನಗರಾಭಿವೃದ್ಧಿಗೆ ₹100 ಕೋಟಿ ಅನುದಾನ’ ‘ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣ ಮುಂಬರುವ ಚುನಾವಣೆಯ ಒಂದು ವರ್ಷದ ಮುಂಚೆ ಕ್ಲೀನ್ ಸಿಟಿ ನೀಟ್ ಸಿಟಿ ಆಗಲಿದೆ. ಅಂತೆಯೇ ಈಗಾಗಲೇ ಮತಕ್ಷೇತ್ರದ ಸಿಂದಗಿ ಮತ್ತು ಆಲಮೇಲ ಪಟ್ಟಣ ಸೇರಿ ನಗರಾಭಿವೃದ್ಧಿ ಇಲಾಖೆಯಿಂದ ₹100 ಕೋಟಿ ಅನುದಾನ ಮಂಜೂರಾತಿ ನೀಡಿದೆ. ಜೊತೆಗೆ ಸಿಂದಗಿ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ರಾಜ್ಯದಲ್ಲಿ ಪ್ರಥಮ ಪ್ರಾಶಸ್ತ್ಯ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.